ರಾಜ್ಯದಲ್ಲಿ ನೀರಿನ ಸಮಸ್ಯೆ ಇರುವಾಗ ನೆರೆ ರಾಜ್ಯಕ್ಕೆ ನೀರು ಹರಿಸಲಾಗಿದೆ : ಆರ್.ಅಶೋಕ್

Update: 2025-02-27 17:46 IST
ರಾಜ್ಯದಲ್ಲಿ ನೀರಿನ ಸಮಸ್ಯೆ ಇರುವಾಗ ನೆರೆ ರಾಜ್ಯಕ್ಕೆ ನೀರು ಹರಿಸಲಾಗಿದೆ : ಆರ್.ಅಶೋಕ್
  • whatsapp icon

ಬೆಂಗಳೂರು : ‘ರಾಜ್ಯದಲ್ಲಿ ನೀರಿನ ಸಮಸ್ಯೆ ಇರುವಾಗ ನೆರೆ ರಾಜ್ಯಕ್ಕೆ ನೀರು ಹರಿಸಲಾಗಿದೆ. ಆಡಳಿತಾರೂಢ ಕಾಂಗ್ರೆಸ್ ಸರಕಾರ ಮೀರ್ ಸಾಧಿಕ್‍ನಂತೆ ಜನರಿಗೆ ದ್ರೋಹ ಬಗೆದಿದೆ’ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗುರುವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳಿಂದ ಸುಮಾರು ಒಂದೂವರೆ ಟಿಎಂಸಿ ನೀರನ್ನು ತೆಲಂಗಾಣಕ್ಕೆ ಹರಿಸಿದೆ. ಅಲ್ಲಿನ ಕಾಂಗ್ರೆಸ್ ಸರಕಾರವನ್ನು ತೃಪ್ತಿಪಡಿಸಲು ಡಿಸಿಎಂ ಡಿ.ಕೆ.ಶಿವಕುಮಾರ್ ಕನ್ನಡಿಗರ ಹಿತವನ್ನು ಕಡೆಗಣಿಸಿದ್ದಾರೆ ಎಂದು ದೂರಿದರು.

ಮೀರ್ ಸಾಧಿಕ್‍ನಂತೆ ಸರಕಾರ ವರ್ತಿಸಿರುವುದನ್ನು ರೈತರು ಕ್ಷಮಿಸುವುದಿಲ್ಲ. ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವಾಗ ನೀರು ಹರಿಸಿರುವುದರಿಂದ ಜನರಿಗೆ ತೊಂದರೆಯಾಗಲಿದೆ. ಒಬ್ಬೊಬ್ಬ ಸಚಿವರು ಒಂದೊಂದು ಹೇಳಿಕೆ ನೀಡುತ್ತಿದ್ದಾರೆ ಎಂದು ಅವರು ಟೀಕಿಸಿದರು.

ರಾಷ್ಟ್ರೀಯ ಆರೋಗ್ಯ ಅಭಿಯಾನದ ಸಿಬ್ಬಂದಿಗೆ ವೇತನ ಪಾವತಿಸಿಲ್ಲ. ಸರಕಾರದ ಮೋಸದ ಆಶ್ವಾಸನೆಗಳಿಂದಾಗಿ ಭಿಕ್ಷೆ ಬೇಡುವ ಮಟ್ಟಕ್ಕೆ ಸರಕಾರ ಬಂದಿದೆ. ಬೆಂಗಳೂರಿನ ಆಸ್ಪತ್ರೆಗಳ ವೈದ್ಯರಿಗೆ ವೇತನ ನೀಡಿಲ್ಲ. ವಿವಿಗಳನ್ನು ಮುಚ್ಚಲಾಗಿದೆ. ಹಾಲಿನ ಪ್ರೋತ್ಸಾಹಧನದ ಬಾಕಿ ಉಳಿದಿದೆ. ಇದರ ಜೊತೆಗೆ ತೆರಿಗೆಗಳನ್ನು ಏರಿಸಲಾಗಿದೆ ಎಂದು ಅವರು ವಾಗ್ದಾಳಿ ನಡೆಸಿದರು.

ಬೆಂಗಳೂರಿನಲ್ಲಿ ಇ-ಖಾತಾ ಮಾಡಿಸಲು 12ಸಾವಿರ ರೂ. ವಸೂಲಿ ಮಾಡಲಾಗುತ್ತಿದೆ. ಇದನ್ನು ಪ್ರಶ್ನೆ ಮಾಡಿದರೆ ಹೊಸ ವ್ಯವಸ್ಥೆಯಲ್ಲಿ ಇದು ಸಾಮಾನ್ಯ ಎಂದು ಹೇಳುತ್ತಾರೆ. ಏಜೆಂಟ್‍ಗಳು ಜನರಿಂದ ಹಣ ವಸೂಲಿ ಮಾಡುತ್ತಿದ್ದು, ಇಂತಹವರ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ? ಎಂದು ಆರ್.ಅಶೋಕ್ ಪ್ರಶ್ನಿಸಿದರು.

ಮಹಾ ಕುಂಭಮೇಳಕ್ಕೆ ಹೋಗುವುದು ಸಾಮಾನ್ಯ. ಡಿಸಿಎಂ ಡಿ.ಕೆ.ಶಿವಕುಮಾರ್ ಏಕೆ ಹೋಗುತ್ತಾರೆ ಎಂದು ಅವರ ಪಕ್ಷದವರೇ ಪ್ರಶ್ನಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಈ ಬಗ್ಗೆ ಕೀಳಾಗಿ ಮಾತಾಡಿದ್ದು, ಆ ಮಾತನ್ನು ಡಿ.ಕೆ.ಶಿವಕುಮಾರ್ ಧಿಕ್ಕರಿಸಿದ್ದಾರೆ. ಈಶ ಫೌಂಡೇಶನ್‍ನ ಕಾರ್ಯಕ್ರಮಕ್ಕೂ ಹೋಗಿದ್ದಾರೆ. ಅವರ ಮನಸ್ಸಲ್ಲಿ ಏನಿದೆ ಎಂಬುದು ಗೊತ್ತಿಲ್ಲ. ಇದು ಪಕ್ಷದ ಆಂತರಿಕ ವಿಚಾರ. ಕಾಂಗ್ರೆಸ್‍ನಲ್ಲಿ ಕರಿ ಬೆಕ್ಕಿನ ಕಾಟ ಹೆಚ್ಚಾಗಿದೆ. ಅದರ ಬಗ್ಗೆ ಡಿ.ಕೆ.ಶಿವಕುಮಾರ್ ಉತ್ತರಿಸಬೇಕು ಎಂದು ವ್ಯಂಗ್ಯವಾಡಿದರು.

‘ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತೇನೆಂದು ಡಿ.ಕೆ.ಶಿವಕುಮಾರ್ ಹೇಳಿದಾಗಲೇ ಎಲ್ಲರೂ ಸುಮ್ಮನಿದ್ದರು. ಪಕ್ಷದೊಳಗಿನ ಆಂತರಿಕ ಕಚ್ಚಾಟ ಎಲ್ಲರಿಗೂ ಗೊತ್ತಾಗಿದೆ. ಇದು ಮುಖ್ಯಮಂತ್ರಿ ಬದಲಾಗುವ ಸ್ಥಿತಿಯ ಲಕ್ಷಣ. ಸಿಎಂ ಸಿದ್ದರಾಮಯ್ಯ ವೀಕ್ ಆಗಿದ್ದಾರೆ. ಆದುದರಿಂದ ಡಿಕೆಶಿ ಹಲವು ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುವ ಮೂಲಕ ತಾವೇ ಮಾಸ್ ಲೀಡರ್ ಎಂಬ ಸಂದೇಶವನ್ನು ನೀಡಿದ್ದಾರೆ’

-ಆರ್.ಅಶೋಕ್ ವಿಪಕ್ಷ ನಾಯಕ

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News