ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಂ ಪತ್ನಿ ವಾಣಿ ಶಿವರಾಂ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆ

Update: 2024-04-08 14:23 GMT

ಬೆಂಗಳೂರು: ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಂ ಅವರ ಪತ್ನಿ ವಾಣಿ ಶಿವರಾಂ, ಮಾಜಿ ಕಾರ್ಪೋರೇಟರ್ ರೂಪಾ ಲಿಂಗೇಶ್ ಸೇರಿದಂತೆ ಛಲವಾದಿ ಮಹಾಸಭಾ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಸೋಮವಾರ ಇಲ್ಲಿನ ಕೆಪಿಸಿಸಿ ಕಚೇರಿಯಲ್ಲಿ ಏರ್ಪಡಿಸಿದ್ದ ಸರಳ ಸಮಾರಂಭದಲ್ಲಿ ಎಲ್ಲರನ್ನು ಪಕ್ಷಕ್ಕೆ ಬರಮಾಡಿಕೊಂಡ ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಬಿಜೆಪಿ ಹಾಗೂ ಬೇರೆ ಪಕ್ಷಕ್ಕೆ ಸೇರುವುದಕ್ಕಿಂತ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕೈಗೆ ಶಕ್ತಿ ತುಂಬಲು ಇಂದು ಹಲವರು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ ಎಂದರು.

ಕಾಂಗ್ರೆಸ್ ಪಕ್ಷ ಛಲವಾದಿ ಸಮಾಜದವರನ್ನು ಗುರುತಿಸಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಒಪ್ಪದೆ ಇಂದು ಅನೇಕರು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ. ನಮ್ಮ ಪಕ್ಷದಲ್ಲಿ ಹಳಬರು, ಹೊಸಬರು ಎಂಬ ತಾರತಮ್ಯ ಇಲ್ಲದೆ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ನೀವೆಲ್ಲರೂ ಇನ್ನು ಮುಂದೆ ಕಾಂಗ್ರೆಸ್‍ನ ಸಕ್ರಿಯ ನಾಯಕರು. ನೀವುಗಳು ನಿಮ್ಮ ಬ್ಲಾಕ್ ಮಟ್ಟದಲ್ಲಿ ಹೆಚ್ಚಿನ ಜನರನ್ನು ಆನ್‍ಲೈನ್ ಮೂಲಕ ಕಾಂಗ್ರೆಸ್ ಪಕ್ಷದ ಸದಸ್ಯರನ್ನಾಗಿ ಮಾಡಬೇಕು. ತಳಮಟ್ಟದಲ್ಲಿ ಸಂಘಟನೆ ಮಾಡಿ ಪಕ್ಷಕ್ಕೆ ಶಕ್ತಿ ತುಂಬಬೇಕು. ಪಕ್ಷಕ್ಕೆ ಸೇರುವುದಷ್ಟೇ ಮುಖ್ಯವಲ್ಲ. ಪ್ರತಿ ಹಳ್ಳಿಗಳಲ್ಲಿ ಸಂಘಟನೆ ಮಾಡಿ ಪಕ್ಷಕ್ಕೆ ಆಸ್ತಿಯಾಗಬೇಕು ಎಂದರು.

ಇನ್ನು ಬರ ಪರಿಹಾರ ವಿಚಾರವಾಗಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಖಂಡಿಸಿ ನಾವು ನ್ಯಾಯಾಲಯದ ಮೊರೆ ಹೋಗಿದ್ದೇವೆ. ಬರ ಪರಿಹಾರ ವಿತರಣೆ ವಿಚಾರದಲ್ಲಿ ಮಧ್ಯಪ್ರವೇಶ ಮಾಡಬಾರದು ಎಂದು ನಮ್ಮ ಪಕ್ಷದ ವತಿಯಿಂದ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದು, ನಮ್ಮ ರಾಜ್ಯಕ್ಕೆ ಬರಬೇಕಾದ ಅನುದಾನ, ಪರಿಹಾರ ಬಾಕಿಯಿದೆ ಎಂದು ತಿಳಿಸಿದ್ದೇವೆ ಎಂದು ಅವರು ತಿಳಿಸಿದರು.

ಕಾಂಗ್ರೆಸ್ ವಕ್ತಾರರಾಗಿ ತೇಜಸ್ವಿನಿ ಗೌಡ: ಪರಿಷತ್ ಮಾಜಿ ಸದಸ್ಯೆ ತೇಜಸ್ವಿನಿ ಗೌಡ ಹೊಸದಿಲ್ಲಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಅವರು ಕಾಂಗ್ರೆಸ್ ಮೂಲದವರು. ಕಾಂಗ್ರೆಸ್‍ನಿಂದ ಮಾತ್ರ ಈ ದೇಶಕ್ಕೆ ಒಳ್ಳೆಯದಾಗಲಿದೆ ಎಂದು ಪಕ್ಷಕ್ಕೆ ಬಂದಿದ್ದಾರೆ. ತೇಜಸ್ವಿನಿ ಗೌಡ ನಮ್ಮ ಸಂಸದರಾಗಿದ್ದರು. ಪಕ್ಷದ ಅಧ್ಯಕ್ಷನಾಗಿ ನಾನು ಅವರನ್ನು ಪಕ್ಷಕ್ಕೆ ಸ್ವಾಗತಿಸುತ್ತೇನೆ. ಇಂದಿನಿಂದ ತೇಜಸ್ವಿನಿ ಗೌಡ ಅವರನ್ನು ಪಕ್ಷದ ಅಧಿಕೃತ ವಕ್ತಾರರಾಗಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News