ರಸ್ತೆ ಒತ್ತುವರಿ ಮಾಡಿ ದೇವಾಲಯ ನಿರ್ಮಾಣ ವಿಚಾರ : ಸಮಗ್ರ ವರದಿ ಸಲ್ಲಿಸಲು ಜಿಲ್ಲಾಡಳಿತಕ್ಕೆ ಹೈಕೋರ್ಟ್ ನಿರ್ದೇಶನ
ಬೆಂಗಳೂರು: ನಗರದ ಸುಂಕದಕಟ್ಟೆಯ ವ್ಯಾಪ್ತಿಯಲ್ಲಿ ಸಾರ್ವಜನಿಕ ರಸ್ತೆ ಒತ್ತುವರಿ ಮಾಡಿ ಸಲ್ಲಾಪುರದಮ್ಮ ದೇವಾಲಯ ನಿರ್ಮಾಣ ಮಾಡಲಾಗುತ್ತಿದೆ ಎಂಬ ಆರೋಪ ಕುರಿತು ಹೊಸದಾಗಿ ಸಮಗ್ರ ವರದಿ ಸಲ್ಲಿಸುವಂತೆ ಜಿಲ್ಲಾಡಳಿತಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಸುಂಕದಕಟ್ಟೆ ಸಿ. ಹೊನ್ನಯ್ಯ ಮತ್ತಿತರರು ಸಾರ್ವಜನಿಕ ರಸ್ತೆ ಒತ್ತುವರಿ ಮಾಡಿ ಸಲ್ಲಾಪುರದಮ್ಮ ದೇವಾಲಯ ಟ್ರಸ್ಟ್ ಸದಸ್ಯರು ದೇವಸ್ಥಾನ ನಿರ್ಮಿಸುತ್ತಿರುವುದಕ್ಕೆ ಆಕ್ಷೇಪಿಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾ. ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕಳೆದ ವಿಚಾರಣೆ ವೇಳೆ ನಗರ ಜಿಲ್ಲಾಧಿಕಾರಿ ನೇಮಿಸಿದ ಭೂ ದಾಖಲೆಗಳ ಉಪನಿರ್ದೇಶಕರು ತಾಂತ್ರಿಕ ತಂಡದೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ವಾಸ್ತವಿಕ ವರದಿ ಸಲ್ಲಿಸಲು ನ್ಯಾಯಾಲಯ ನಿರ್ದೇಶನ ನೀಡಿತ್ತು.
ಸೋಮವಾರ ಅರ್ಜಿ ವಿಚಾರಣೆಗೆ ಬಂದಾಗ, ನ್ಯಾಯಾಲಯದ ಆದೇಶದಂತೆ ಮಾ. 4ರಂದು ವರದಿ ಸಲ್ಲಿಸಲಾಗಿದೆ ಎಂದು ಸರಕಾರದ ಪರ ವಕೀಲರು ಮಾಹಿತಿ ನೀಡಿದರು. ವರದಿಗೆ ಆಕ್ಷೇಪ ವ್ಯಕ್ತಪಡಿಸಿ, ವರದಿ ಸಮರ್ಪಕವಾಗಿಲ್ಲ. ಈ ಹಿಂದೆ ಬಿಬಿಎಂಪಿ ನೀಡಿದ್ದ ವರದಿಯ ಅಂಶಗಳನ್ನೇ ಇದರಲ್ಲಿ ಸೇರಿಸಲಾಗಿದೆ ಎಂದರು. ಆಗ, ದೇವಸ್ಥಾನದವರು ಸಾರ್ವಜನಿಕ ರಸ್ತೆ ಒತ್ತುವರಿ ಮಾಡಿರುವ ಬಗ್ಗೆ ಈಗ ಸಲ್ಲಿಸಿರುವ ವರದಿಯಲ್ಲಿ ಏನು ಹೇಳಲಾಗಿದೆ. ಆ ಅಂಶ ವರದಿಯಲ್ಲಿ ಎಲ್ಲಿ ಉಲ್ಲೇಖಿಸಲಾಗಿದೆ ಎಂದು ನ್ಯಾಯಪೀಠ ಸರಕಾರದ ಪರ ವಕೀಲರನ್ನು ಪ್ರಶ್ನಿಸಿತು. ಅದಕ್ಕೆ ಸರಕಾರಿ ವಕೀಲರಿಂದ ಸಮರ್ಪಕ ಉತ್ತರ ಬಂದಿಲ್ಲ. ಈ ಮಧ್ಯೆ, ನ್ಯಾಯಾಲಯ ಅನುಮತಿ ಕೊಟ್ಟರೆ ಸ್ಥಳ ಪರಿಶೀಲನೆಯ ಪ್ರಕ್ರಿಯೆಯನ್ನು ಮತ್ತೊಮ್ಮೆ ನಡೆಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗುವುದು ಎಂದು ಸರಕಾರದ ಪರ ವಕೀಲರು ಕೋರಿದರು.
ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ಜಿಲ್ಲಾಡಳಿತ ಸಲ್ಲಿಸಿರುವ ವರದಿ ತೃಪ್ತಿದಾಯಕವಾಗಿಲ್ಲ. ಹಾಗಾಗಿ, ಹೊಸದಾಗಿ ಸಮಗ್ರ ವರದಿ ಸಲ್ಲಿಸುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿತು. ಅಲ್ಲದೆ, ಸ್ಥಳ ಪರಿಶೀಲನೆಯನ್ನು ಮತ್ತೊಮ್ಮೆ ಕೈಗೊಳ್ಳಲು ಜಿಲ್ಲಾಡಳಿತ ಸ್ವತಂತ್ರವಾಗಿದೆ. ಅದಕ್ಕೂ ಮೊದಲು ಸಂಬಂಧಪಟ್ಟ ಎಲ್ಲರಿಗೂ ನೋಟಿಸ್ ಕೊಟ್ಟು ಪ್ರಕ್ರಿಯೆ ಕೈಗೊಳ್ಳಬೇಕು ಎಂದು ಸೂಚಿಸಿದ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿದೆ.