ಕೆಂಗೇರಿ ಕೆರೆಯಲ್ಲಿ ಮುಳುಗಿ ಮೃತಪಟ್ಟ ಮಕ್ಕಳ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ : ಡಿ.ಕೆ.ಶಿವಕುಮಾರ್
ಬೆಂಗಳೂರು: ಕೆಂಗೇರಿ ಕೆರೆಯಲ್ಲಿ ಮುಳುಗಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ಬಿಬಿಎಂಪಿ ವತಿಯಿಂದ 5 ಲಕ್ಷ ರೂ. ಪರಿಹಾರವನ್ನು ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಮನೆಗೆ ನೀರು ನುಗ್ಗಿ ತೊಂದರೆ ಉಂಟಾಗಿರುವವರಿಗೆ ತಲಾ 10 ಸಾವಿರ ರೂ. ಪರಿಹಾರ, ವಸತಿ ಇಲ್ಲದವರಿಗೆ ವಾಸಿಸಲು ತಾತ್ಕಾಲಿಕ ವಸತಿ ಹಾಗೂ ಊಟದ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ಹೇಳಿದರು.
ನಗರದಾದ್ಯಂತ ಮುಲಾಜಿಲ್ಲದೆ ರಾಜಕಾಲುವೆ ಒತ್ತುವರಿ ತೆರವಿಗೆ ಸೂಚನೆ ನೀಡಲಾಗಿದೆ. ಮಳೆ ನೀರುಗಾಲುವೆಗಳನ್ನು ಸ್ವಚ್ಚಗೊಳಿಸಿ ಸರಾಗವಾಗಿ ನೀರು ಹರಿಯುವಂತೆ ಮಾಡಲು ವಿಶ್ವಬ್ಯಾಂಕಿನಿಂದ 1 ಸಾವಿರ ಕೋಟಿ ರೂ. ಸಾಲ ಪಡೆದು ಈಗಾಗಲೇ ಕೆಲಸ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.
ನೀರುಗಾಲುವೆ ಸ್ವಚ್ಛತಾ ಕೆಲಸದ ವಿಚಾರವಾಗಿ ಕಂದಾಯ ಸಚಿವ ಕೃಷ್ಣಬೈರೇಗೌಡರು ಕೆಲಸ ಮಾಡುತ್ತಿದ್ದಾರೆ. ಎನ್‍ಡಿಆರ್‌ಎಫ್ ಅನುದಾನ ಸೇರಿದಂತೆ ವಿವಿಧ ಯೋಜನೆಗಳ ಅಡಿ ಕೆರೆಗಳ ಸ್ವಚ್ಚತೆ, ಹೂಳು ತೆಗೆಯುವ ಕೆಲಸ ಮಾಡಲಾಗುವುದು. ಶೀಘ್ರದಲ್ಲೇ ಕೆರೆ ನಿರ್ವಹಣಾ ಸಮಿತಿಯ ಸಭೆ ಕರೆಯಲಾಗುವುದು ಎಂದು ಅವರು ಹೇಳಿದರು.
ಮುಲಾಜಿಲ್ಲದೆ ರಾಜಕಾಲುವೆ ಒತ್ತುವರಿ ತೆರವುಗೊಳಿಸಿ: ಅನೇಕ ಕಡೆ ಖಾಸಗಿಯವರು ರಾಜಕಾಲುವೆ ಒತ್ತುವರಿ ತೆರವುಗೊಳಿಸದಂತೆ ನ್ಯಾಯಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಇವರು ಕೆಲಸ ಮಾಡಲು ಬಿಡುತ್ತಿಲ್ಲ. ತುರ್ತು ಸಂದರ್ಭದಲ್ಲಿ ಇವುಗಳಿಗೆ ಅವಕಾಶವಿಲ್ಲ. ತೆರವುಗೊಳಿಸಲು ಕಾನೂನಿನಲ್ಲಿ ಅವಕಾಶವಿದೆ. ಯಾವುದನ್ನೂ ಪರಿಗಣಿಸದೆ ಕೂಡಲೇ ಎಲ್ಲ ಒತ್ತುವರಿಗಳನ್ನು ತೆರವುಗೊಳಿಸಿ ಹಾಗೂ ಪ್ರವಾಹ ಪರಿಸ್ಥಿತಿ ನಿರ್ವಹಣೆ ಅಡಿಯಲ್ಲಿ ಕೂಡಲೇ ಆದೇಶ ಹೊರಡಿಸಿ ಎಂದು ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದೇನೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ಬೆಂಗಳೂರಿನ ಹಾಗೂ ಯಲಹಂಕ ಇತಿಹಾಸದಲ್ಲಿಯೇ 115-120 ವರ್ಷಗಳ ನಂತರ ವಾಡಿಕೆಗಿಂತ ಹೆಚ್ಚು ಮಳೆ ಸುರಿದಿದೆ. ಇಷ್ಟು ಜಾಸ್ತಿ ಮಳೆ ಬರುತ್ತದೆ ಎನ್ನುವ ಕಲ್ಪನೆಯೂ ಇರಲಿಲ್ಲ. ಎಲ್ಲೆಲ್ಲಿ ನೀರು ನುಗ್ಗುತ್ತಿದೆ ಹಾಗೂ ನೀರು ಸರಾಗವಾಗಿ ಹರಿಯುವ ವ್ಯವಸ್ಥೆ ಮಾಡುವುದಕ್ಕೆ ಜಾಗಗಳನ್ನು ಗುರುತಿಸಲಾಗುತ್ತಿದೆ ಎಂದು ಅವರು ಹೇಳಿದರು.