ಶೀಘ್ರದಲ್ಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಭೆ : ಸತೀಶ್ ಜಾರಕಿಹೊಳಿ
Update: 2025-03-19 19:37 IST

ಬೆಂಗಳೂರು: ಶೀಘ್ರದಲ್ಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಭೆ ನಡೆಯಲ್ಲಿದ್ದು, ವಿಳಂಬವಾಗಿರುವ ಎಲ್ಲ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಕೋರಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಬುಧವಾರ ವಿಧಾನಪರಿಷತ್‍ನ ಪ್ರಶೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಭೂ ಸ್ವಾಧೀನ ಸೇರಿದಂತೆ ಹಲವು ಸಮಸ್ಯೆಗಳಿಂದಾಗಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬವಾಗಿದೆ. ಶೀಘ್ರ ಪರಿಹಾರಕ್ಕೆ ಸರಕಾರ ಪ್ರಯತ್ನಿಸುತ್ತಿದೆ ಎಂದರು.
ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಕಾಮಗಾರಿಗಳ ವಿಳಂಬಕ್ಕೆ ಕೇಂದ್ರ ಮತ್ತು ರಾಜ್ಯ ಸರಕಾರಗಳೆರಡೂ ಕಾರಣಗಳಾಗಿವೆ. ಇದಕ್ಕೆ ಸಂಬಂಧಿಸಿದ ಸಚಿವರು, ಶಾಸಕರನ್ನು ಸಹ ಸಭೆಗೆ ಆಹ್ವಾನಿಸಿ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಸತೀಶ್ ಜಾರಕಿಹೊಳಿ ಹೇಳಿದರು.