ಮಹಾರಾಷ್ಟ್ರ ಸರಕಾರದ ವಿರುದ್ಧ ಕಾನೂನು ಹೋರಾಟ ನಡೆಸಲು ಪರಿಶೀಲನೆ: ಸಿದ್ದರಾಮಯ್ಯ

Update: 2024-11-18 07:40 GMT

ಬೆಂಗಳೂರು: ನಮ್ಮ ಸರಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಮಹಾರಾಷ್ಟ್ರದ ಜನರನ್ನು ದಾರಿತಪ್ಪಿಸಿ, ಮತ ಗಳಿಸಲು ಮಹಾರಾಷ್ಟ್ರ ಸರ್ಕಾರ ಸುಳ್ಳು ಜಾಹೀರಾತು ನೀಡಿದೆ. ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕಾನೂನು ಹೋರಾಟ ನಡೆಸಲು ಪರಿಶೀಲನೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅವರು ಇಂದು ಕನಕ ಜಯಂತಿ ಪ್ರಯುಕ್ತ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾಧ್ಯಮದೊಂದಿಗೆ ಮಾತನಾಡುತ್ತಿದ್ದರು.

ಗ್ಯಾರಂಟಿಗಳ ಬಗ್ಗೆ ಮಾತನಾಡಲು ಕುಮಾರಸ್ವಾಮಿಗೆ ಯಾವ ನೈತಿಕ ಹಕ್ಕಿದೆ?

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸರ್ಕಾರ ಕೇವಲ ಗ್ಯಾರಂಟಿ ಎನ್ನುತ್ತಿದೆ ತೆರಿಗೆ ಹಣ ಎಲ್ಲಿ ಹೋಗುತ್ತಿದೆ ಎಂದು ಜನರಿಗೆ ಉತ್ತರ ನೀಡಬೇಕು ಎಂದು ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ ಕುಮಾರಸ್ವಾಮಿ ಇರುವಾಗ ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದರೆ? ಅವರಿಗೆ ಮಾತನಾಡಲು ಯಾವ ನೈತಿಕ ಹಕ್ಕಿದೆ ಎಂದರು.

ರಾಜ್ಯಕ್ಕೆ ತೆರಿಗೆ ಹಣ ಕೊಡಿಸಲಿ

ನಾವು ಕರ್ನಾಟಕ ರಾಜ್ಯದಿಂದ ಕೇಂದ್ರಕ್ಕೆ 4.50 ಲಕ್ಷ ಕೋಟಿ ರೂ. ತೆರಿಗೆಯನ್ನು ಕಟ್ಟುತ್ತೇವೆ. ನಮಗೆ ವಾಪಸ್ ಬರುವುದು 59 ಸಾವಿರ ಕೋಟಿ ರೂ. ಮಾತ್ರ. ಉಳಿದ ದುಡ್ಡು ಕೇಂದ್ರದಲ್ಲೇ ಇರುತ್ತದೆ. ಅದನ್ನು ರಾಜ್ಯಕ್ಕೆ ಕೊಡಿಸಲಿ ಎಂದರು.

ಬರೀ ಮಾತನಾಡಿದರೆ ಪ್ರಯೋಜನವೇನು? ಎಚ್.ಡಿ.ದೇವೇಗೌಡರಾಗಲಿ, ಕುಮಾರಸ್ವಾಮಿಯವರಾಗಲಿ ಕರ್ನಾಟಕಕ್ಕೆ ಅನ್ಯಾಯವಾದಾಗ ಮಾತನಾಡಿದ್ದರೆಯೇ ಎಂದು ಪ್ರಶ್ನಿಸಿದರು.

ಕುಮಾರಸ್ವಾಮಿ, ಪ್ರಹ್ಲಾದ ಜೋಷಿ ಕರ್ನಾಟಕದ ಸಚಿವರಾಗಿ ಏನು ಮಾಡುತ್ತಿದ್ದಾರೆ ?

ನಬಾರ್ಡ್ ವತಿಯಿಂದ ಕಳೆದ ವರ್ಷ 5,600 ಕೋಟಿ ರೂ. ಸಾಲ ರಾಜ್ಯಕ್ಕೆ ನೀಡಲಾಗಿತ್ತು. ಈ ವರ್ಷ 2,340 ಕೋಟಿ ರೂ. ನೀಡಿದ್ದಾರೆ ಇದು ಅನ್ಯಾಯವಲ್ಲವೇ? ಸಾಲದ ಪ್ರಮಾಣವನ್ನು 58% ರಷ್ಟು ಕಡಿಮೆ ಮಾಡಿದ್ದಾರೆ. ಕುಮಾರಸ್ವಾಮಿ, ಪ್ರಹ್ಲಾದ ಜೋಷಿಯವರು ಕರ್ನಾಟಕದ ಮಂತ್ರಿಗಳಾಗಿ ಏನು ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ರೈತರಿಗೆ ಅನ್ಯಾಯ ಮಾಡಬೇಡಿ ಇದು ದ್ರೋಹದ ಕೆಲಸ ಎಂದು ಪ್ರಧಾನ ಮಂತ್ರಿಗಳಿಗೆ, ಹಣಕಾಸು ಸಚಿವ ನಿರ್ಮಾಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದೇನೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News