‘ವಿಕಸಿತ ಭಾರತ’ ನನಸಾಗುವಲ್ಲಿ ಕೈಗಾರಿಕೆಗಳ ಪಾತ್ರ ದೊಡ್ಡದಿದೆ: ಶೋಭಾ ಕರಂದ್ಲಾಜೆ

Update: 2024-08-30 14:31 GMT

ಶೋಭಾ ಕರಂದ್ಲಾಜೆ (PC:x/@ShobhaBJP)

ಬೆಂಗಳೂರು: ಪ್ರಧಾನಿ ಮೋದಿ ಅವರ ವಿಕಸಿತ ಭಾರತ ಪರಿಕಲ್ಪನೆಯು ನನಸಾಗುವ ನಿಟ್ಟಿನಲ್ಲಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಪ್ರಮುಖ ಪಾತ್ರವಹಿಸಲಿವೆ ಎಂದು ಕೇಂದ್ರ ಎಂಎಸ್‍ಎಂಇ, ಕಾರ್ಮಿಕ ಮತ್ತು ಉದ್ಯೋಗ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಶುಕ್ರವಾರ ನಗರದ ಅರಮನೆ ಮೈದಾನದಲ್ಲಿ ಭಾರತ ಸರಕಾರದ ಎಂಎಸ್‍ಎಂಇ ಮಂತ್ರಾಲಯದ ಸಹಯೋಗದೊಂದಿಗೆ ಫೆಡರೇಶನ್ ಆಫ್ ಕರ್ನಾಟಕ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀ(ಎಫ್‍ಕೆಸಿಸಿಐ) ಆಯೋಜಿಸಿರುವ ಎರಡು ದಿನಗಳ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಸಮಾವೇಶಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕೈಗಾರಿಕಾ ಕ್ಷೇತ್ರದಲ್ಲಿರುವ ಮಾನವ ಸಂಪನ್ಮೂಲದ ಕೌಶಲ್ಯವನ್ನು ಇನ್ನಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಬೇಕಾಗಿದೆ. ದೇಶದ ಜಿಡಿಪಿಯಲ್ಲಿ ಹೆಚ್ಚಿನ ಕೊಡುಗೆ ನೀಡುವುದಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.

ಹೊಸ ಕೈಗಾರಿಕೆಗಳನ್ನು ಪ್ರಾರಂಭಿಸಲು, ಇರುವ ಸಬ್ಸಿಡಿಗಳನ್ನು ಪಡೆಯಲು ಪ್ರತಿ ವರ್ಷ ಸುಮಾರು 5 ಲಕ್ಷ ಅರ್ಜಿಗಳು ಸಲ್ಲಿಕೆಯಾಗುತ್ತಿವೆ. ನಮ್ಮ ಇಲಾಖೆಯಿಂದ ಕೇವಲ 90 ಸಾವಿರ ಜನರಿಗೆ ಮಾತ್ರ ಸಬ್ಸಿಡಿ ನೀಡಲು ಸಾಧ್ಯವಾಗುತ್ತಿದೆ. ಇದನ್ನು ಹೆಚ್ಚಿಸುವ ನಿಟ್ಟಿನಲ್ಲಿ ನಮ್ಮ ಇಲಾಖೆಗೆ ಹೆಚ್ಚಿನ ಅನುದಾನ ನೀಡುವಂತೆ ಹಣಕಾಸು ಸಚಿವರಿಗೆ ಮನವಿ ಸಲ್ಲಿಸಿದ್ದೇವೆ ಎಂದು ಶೋಭಾ ಕರಂದ್ಲಾಜೆ ತಿಳಿಸಿದರು.

ದೇಶದ ದೊಡ್ಡ ಕೈಗಾರಿಕೆಗಳು ಹಾಗೂ ಸಾರ್ವಜನಿಕ ಉದ್ದಿಮೆಗಳು ಹೊರ ದೇಶದಿಂದ ಆಮದು ಮಾಡಿಕೊಳ್ಳುತ್ತಿರುವ ಬಿಡಿಭಾಗಗಳ ಸಂಗ್ರಹಣೆಗೆ ದೇಶದಲ್ಲಿರುವ ಎಂಎಸ್‍ಎಂಇಗಳಿಗೆ ಆದ್ಯತೆ ನೀಡುವಂತಾಗಬೇಕು. ಈ ನಿಟ್ಟಿನಲ್ಲಿ ಪ್ರಧಾನಿ ಮೋದಿ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಶೋಭಾ ಕರಂದ್ಲಾಜೆ ಹೇಳಿದರು.

ದೇಶದ ಕೈಗಾರಿಕಾ ಕ್ಷೇತ್ರಕ್ಕೆ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಕೊಡುಗೆ ಅಪಾರ. ಹೆಚ್ಚಿನ ಉದ್ಯೋಗ ಸೃಷ್ಟಿಗೆ ಎಂಎಸ್‍ಎಂಇ ಗಳೂ ಕಾರಣ. ಇವುಗಳಿಗೆ ಪ್ರೊತ್ಸಾಹ ನೀಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಹಲವಾರು ಯೋಜನೆಗಳನ್ನು ರೂಪಿಸಿದೆ. ಈ ಬಾರಿಯ ಆಯವ್ಯಯದಲ್ಲಿ ಹೆಚ್ಚಿನ ಆದ್ಯತೆಯನ್ನು ನೀಡಲಾಗಿದೆ ಎಂದು ಶೋಭಾ ಕರಂದ್ಲಾಜೆ ತಿಳಿಸಿದರು.

ದೇಶದಲ್ಲಿರುವ ದೊಡ್ಡ ಹಾಗೂ ಸಾರ್ವಜನಿಕ ಉದ್ದಿಮೆಗಳು ತಮಗೆ ಬೇಕಾದ ಬಹುತೇಕ ಕಚ್ಚಾವಸ್ತುಗಳನ್ನ ಹೊರ ದೇಶದಿಂದ ಆಮದು ಮಾಡಿಕೊಳ್ಳುತ್ತಿವೆ. ನಮ್ಮ ದೇಶದಲ್ಲಿರುವ ಎಂಎಸ್‍ಎಂಇ ಗಳಿಗೆ ಆದ್ಯತೆ ನೀಡುವ ಉದ್ದೇಶದಿಂದ ಸಾರ್ವಜನಿಕ ಉದ್ದಿಮೆಗಳು ದೇಶದಲ್ಲಿರುವ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಂದ ಕಚ್ಚಾವಸ್ತುಗಳನ್ನು ಖರೀದಿಸುವಂತೆ ಸೂಚನೆ ನೀಡಲು ಪ್ರಧಾನಿ ಅವರಿಗೆ ಮನವಿ ಸಲ್ಲಿಸಿದ್ದೇನೆ ಎಂದು ಶೋಭಾ ಕರಂದ್ಲಾಜೆ ಹೇಳಿದರು.

ಕೇಂದ್ರ ಸರಕಾರ ನೀತಿ ನಿರೂಪಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇದೇ ರೀತಿಯಲ್ಲಿ ಆಯಾ ರಾಜ್ಯಗಳು ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುತ್ತವೆ. ಕೇಂದ್ರ ಹಾಗೂ ರಾಜ್ಯ ಸರಕಾರಗಳ ಮಧ್ಯೆ ಅಗತ್ಯ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಕೈಗಾರಿಕಾ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆಯನ್ನು ಆಯೋಜಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂದು ಶೋಭಾ ಕರಂದ್ಲಾಜೆ ತಿಳಿಸಿದರು.

ಎಫ್‍ಕೆಸಿಸಿಐ ಅಧ್ಯಕ್ಷ ರಮೇಶ್ ಚಂದ್ರ ಲಹೋಟಿ ಮಾತನಾಡಿ, ಎರಡು ದಿನಗಳ ಕಾಲ ನಡೆಯಲಿರುವ ಈ ಸಮ್ಮೇಳನದಲ್ಲಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸ್ಥಾಪನೆಗೆ ಹಾಗೂ ಅವುಗಳ ಅಭಿವೃದ್ಧಗೆ ಅಗತ್ಯವಿರುವ ಮಾಹಿತಿಯನ್ನು ಪಡೆಯುವಂತಹ ವೇದಿಕೆಯನ್ನು ಒದಗಿಸಲಾಗಿದೆ. ಎಂಎಸ್‍ಎಂಇ ಗಳು ನಮ್ಮ ಕೈಗಾರಿಕಾ ಕ್ಷೇತ್ರದ ಬುನಾದಿಗಳಾಗಿವೆ ಎಂದರು.

ಕಾರ್ಯಕ್ರಮದಲ್ಲಿ ಎಫ್‍ಕೆಸಿಸಿಐ ಪ್ರಸಿಡೆಂಟ್ ಎಲೆಕ್ಟ್ ಎಂ.ಜಿ.ಬಾಲಕೃಷ್ಣ, ಹಿರಿಯ ಉಪಾಧ್ಯಕ್ಷೆ ಉಮಾ ರೆಡ್ಡಿ, ಎಫ್‍ಕೆಸಿಸಿಐ ಇಚಿಡಸ್ಟ್ರಿ ಕಮಿಟಿ ಅಧ್ಯಕ್ಷ ಅರವಿಂದ ಬುರ್ಜಿ, ಕಾಸಿಯಾ ಅಧ್ಯಕ್ಷ ಎಂ.ಜಿ.ರಾಜಗೋಪಾಲ್, ಪೀಣ್ಯ ಇಂಡಸ್ಟ್ರಿಯ ಅಸೋಸಿಯೇಷನ್ ಅಧ್ಯಕ್ಷ ಶಿವಕುಮಾರ್ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News