ಸಾಮಾಜಿಕ ಜಾಲತಾಣದಲ್ಲಿ ಕನ್ನಡ, ಕನ್ನಡಿಗರನ್ನು ಹೀಯಾಳಿಸುವವರ ವಿರುದ್ಧ ಕಠಿಣ ಕ್ರಮ: ಸಿದ್ದರಾಮಯ್ಯ

Update: 2024-11-01 10:05 GMT

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚೆಗೆ ಕನ್ನಡ ಮತ್ತು ಕನ್ನಡಿಗರನ್ನು ಹೀಯಾಳಿಸುವ ಪ್ರವೃತ್ತಿ ಬೆಳೆಯುತ್ತಿದೆ. ಇದು ನಾಡ ದ್ರೋಹವಾಗಿದೆ. ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.

ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 69 ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ನಾಡದೇವಿ ಭುವನೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸಿ ಹಾಗೂ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡುತ್ತಿದ್ದರು.

ಕೇಂದ್ರದಿಂದ ಕರ್ನಾಟಕಕ್ಕೆ ತೆರಿಗೆಯಲ್ಲಿ ಅನ್ಯಾಯ

ಕರ್ನಾಟಕಕ್ಕೆ ತೆರಿಗೆ ಪಾಲು ನೀಡುವುದರಲ್ಲಿ ಕೇಂದ್ರ ಸರ್ಕಾರದಿಂದ ಬಹಳ ಅನ್ಯಾಯವಾಗುತ್ತಿದೆ. ಇಡೀ ದೇಶದಲ್ಲೇ ಅತಿ ಹೆಚ್ಚು ತೆರಿಗೆ ನೀಡುವ ಎರಡನೇ ರಾಜ್ಯ ಕರ್ನಾಟಕವಾಗಿದೆ. ನಾವು 4 ಲಕ್ಷ ಕೋಟಿಗೂ ಹೆಚ್ಚು ತೆರಿಗೆ ನೀಡಿದರೂ, ಕೇಂದ್ರದಿಂದ ದೊರೆಯುವ ತೆರಿಗೆ ಪಾಲು ಕೇವಲ 50ರಿಂದ 60 ಸಾವಿರ ಕೋಟಿ ರೂ. ಮಾತ್ರ. ಅಂದರೆ ನಾವು ನೀಡುವ ಪ್ರತಿ ನೂರು ರೂಪಾಯಿಗೆ ಕೇಂದ್ರ ಸರ್ಕಾರ ಕೇವಲ ಹದಿಮೂರರಿಂದ 15 ಪೈಸೆ ಮಾತ್ರ. ರಾಜ್ಯಕ್ಕೆ ನ್ಯಾಯುತವಾಗಿ ಬರಬೇಕಾದ ತೆರಿಗೆ ಪಾಲನ್ನು ನೀಡಿ ಎಂದು ಕೇಂದ್ರಕ್ಕೆ ಮನವಿ ಮಾಡಲಾಗುತ್ತಿದೆ. ರಾಜ್ಯದ ಸಂಸದರು ಲೋಕಸಭೆಗೆ ಆಯ್ಕೆಯಾಗಿ ಹೋಗಿದ್ದು, ಲೋಕಸಭಾ ಅಧಿವೇಶನದಲ್ಲಿ ಕರ್ನಾಟಕ ರಾಜ್ಯದ ಪರವಾಗಿ ಧ್ವನಿ ಎತ್ತಬೇಕೆಂದರು ಕೇಂದ್ರದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರನ್ನು ಇದೇ ಸಂದರ್ಭದಲ್ಲಿ ಒತ್ತಾಯ ಮಾಡಿದರು

ಕನ್ನಡ ಭಾಷೆ ಉಳಿಸಿ ಬೆಳೆಸುವುದು ಪ್ರತಿಯೊಬ್ಬ ಕನ್ನಡಿಗರ ಅದ್ಯ ಕರ್ತವ್ಯ

ನಮ್ಮ ಭಾಷೆಗೆ ಸುಮಾರು ಎರಡು ಸಾವಿರ ವರ್ಷಗಳ ಇತಿಹಾಸ ಇದೆ. ನಮ್ಮ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬ ಕನ್ನಡಿಗರ ಅದ್ಯ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಭಾಷೆಯನ್ನು ಬೆಳೆಸಿ ಉಳಿಸಲು ಮೊದಲು ಕನ್ನಡಿಗರಾಗಿ, ಕನ್ನಡೇತರರಿಗೆ ಕನ್ನಡವನ್ನು ಕಲಿಸಲು ಪ್ರಯತ್ನಿಸುವ ಮೂಲಕ ಕನ್ನಡ ವಾತಾವರಣವನ್ನು ನಿರ್ಮಿಸಿ ಎಂದು ರಾಜ್ಯದ ಜನರಿಗೆ ಮುಖ್ಯ ಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಕರ್ನಾಟಕದಲ್ಲಿ 200 ಕ್ಕೂ ಹೆಚ್ಚು ಭಾಷೆಗಳಿದ್ದು, ಕನ್ನಡ, ಗಾಳಿ, ನೀರು, ಆಹಾರ ಸೇವೆನೆ ಮಾಡಿದ ಮೇಲೆ ನಾವೆಲ್ಲರೂ ಕನ್ನಡಿಗರು. ಕನ್ನಡ ಭಾಷೆಗೆ 2000 ಕ್ಕೂ ಅಧಿಕ ಇತಿಹಾಸವಿದೆ. ಕೇಂದ್ರ ಸರ್ಕಾರ ಶಾಸ್ತ್ರೀಯ ಭಾಷೆಯನ್ನಾಗಿ ಪರಿಗಣಿಸಿದೆ. ನಾವು ಯಾವುದೇ ಕಾರಣಕ್ಕೂ ಕನ್ನಡ ಭಾಷೆಯನ್ನು ಬಲಿಕೊಟ್ಟು ಉದಾರಿಗಳಾಗಬಾರದು. ಭಾಷೆಯ ವ್ಯಾಮೋಹ ಅತಿಯಾಗಬಾರದು, ಅದೇ ರೀತಿ ಕನ್ನಡ ಅಭಿಮಾನವನ್ನು ಬಿಟ್ಟುಕೊಡಬಾರದು. ಭಾಷೆಯನ್ನು ಎತ್ತರಕ್ಕೆ ಬೆಳೆಸುವುದರ ಜೊತೆಗೆ ಬೇರೆ ಭಾಷೆಯನ್ನು ಕಲಿತು ಭಾಷಾ ಸಂಪತ್ತನ್ನು ಬೆಳೆಸಿಕೊಂಡು ಕನ್ನಡ ಮಾತೆಯನ್ನು ಉತ್ತುಂಗಕ್ಕೇರಿಸಬೇಕು. ಮಹಾತ್ಮಗಾಂಧೀಜಿ ಅವರು ಹೇಳಿದಂತೆ ನಾವು ನಮ್ಮ ದೇಶ ಭಾಷೆಯಲ್ಲಿ ಶಿಕ್ಷಣ ಪಡೆದರೆ ಹೆಚ್ಚು ಶಕ್ತಿಯುತವಾಗಿ ಬೆಳೆಯುತ್ತೇವೆ ಎಂದು ಆಶಿಸಿದರು.

ಸುವರ್ಣ ಕರ್ನಾಟಕ ಸಂಭ್ರಮೋತ್ಸವ ಆಚರಣೆ

ಕರ್ನಾಟಕ ಏಕೀಕರಣವಾಗಿ 68 ವರ್ಷ ಕಳೆದು, 69 ನೇ ವರ್ಷಕ್ಕೆ ಕಾಲಿಟ್ಟಿದ್ದೇವೆ. 1947 ರಲ್ಲಿ ಭಾರತ ದೇಶ ಸ್ವಾತಂತ್ರ್ಯವಾದ ನಂತರ ನೂರಾರು ಸಂಸ್ಥಾನಗಳನ್ನು ಒಗ್ಗೂಡಿಸುವ ಕಾರ್ಯ ಯಶಸ್ವಿಯಾಗಿ ನಡೆಯಿತು. ಭಾಷಾವಾರು ಪ್ರಾಂತ್ಯಗಳನ್ನು ಗುರುತಿಸಿ 1956ರ ನವೆಂಬರ್ 1 ರಂದು ಮೈಸೂರು ರಾಜ್ಯ ಉದಯವಾಯಿತು. 1973 ನವೆಂಬರ್ 1 ರವರೆಗೆ ಮೈಸೂರು ರಾಜ್ಯವಾಗಿದ್ದನ್ನು ಅಂದಿನ ಮಾಜಿ ಮುಖ್ಯಮಂತ್ರಿ ದಿ. ಡಿ. ದೇವರಾಜ ಅರಸು ಅವರು ಇಡೀ ರಾಜ್ಯವನ್ನು ಪ್ರತಿನಿಧಿಸುವ ಕರ್ನಾಟಕ ರಾಜ್ಯ ಎಂದು 1973 ನವೆಂಬರ್ 1 ರಂದು ಮರುನಾಮಕರಣ ಮಾಡಿದರು. ತಾನು ಮುಖ್ಯಮಂತ್ರಿಯಾದ ನಂತರ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ 2023 ನವೆಂಬರ್ 1 ರಂದು ಬಜೆಟ್ನಲ್ಲಿ ಇಡೀ ವರ್ಷ ಕರ್ನಾಟಕ ಸುವರ್ಣ ಸಂಭ್ರಮ ದಿನವನ್ನಾಗಿ ಆಚರಿಸಬೇಕೆಂದು ಘೋಷಣೆ ಮಾಡಲಾಯಿತು. ಕನ್ನಡ ನಾಡು, ನುಡಿ, ಸಂಸ್ಕøತಿ, ಕಲೆ, ಪರಂಪರೆಯನ್ನು ಉಳಿಸಿ ಬೆಳೆಸಬೇಕೆಂಬ ಉದ್ದೇಶದಿಂದ “ಕರ್ನಾಟಕ ಸುವರ್ಣ ಸಂಭ್ರಮ”ವನ್ನು ಆಚರಿಸಲಾಗುತ್ತಿದೆ ಎಂದರು.

ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಘೋಷವಾಕ್ಯದೊಡನೆ ಸಮಸ್ತ ನಾಡಿನ ಜನರಿಗೆ ತಿಳಿಸಬೇಕೆಂದು ಅರ್ಥಪೂರ್ಣವಾಗಿ ಇಡೀ ವರ್ಷ ಆಚರಿಸಲಾಯಿತು. ಕನ್ನಡಿಗರಾಗಿ ಮಾತೃ ಭಾಷೆಯನ್ನು ನಮ್ಮ ವ್ಯವಹಾರದಲ್ಲಿ ವ್ಯಾವಹಾರಿಕ ಭಾಷೆಯನ್ನಾಗಿ ಮಾಡುವುದರ ಜೊತೆಗೆ ಕನ್ನಡ ಮಾತನಾಡುತ್ತೇವೆ ಎಂದು ಪ್ರತಿಜ್ಞೆ ಮಾಡಬೇಕು. ಕನ್ನಡೇತರರಿಗೂ ಕನ್ನಡವನ್ನು ಕಲಿಸಲು ಪ್ರಯತ್ನಿಸಬೇಕು ಎಂದರು.

ಬಡ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ ಪೌಷ್ಠಿಕಾಂಶ ಆಹಾರ ನೀಡಲಾಗುತ್ತಿದೆ ಹಾಗೂ ಕನ್ನಡ ಸ್ಪಷ್ಟವಾಗಿ ಬರೆಯಲು ಮತ್ತು ಓದಲು ಬಾರದವರಿಗೆ ಕನ್ನಡ ಕಲಿಸುವ ಉದ್ದೇಶದಿಂದ “ಕನ್ನಡ ದೀವಿಗೆ” ಕಿರುಹೊತ್ತಿಗೆಯನ್ನು ಇಂದು ಲೋಕಾರ್ಪಣೆ ಮಾಡಲಾಗಿದೆ ಎಂದರು.

ನಮ್ಮ ಕರ್ನಾಟಕ ನಮ್ಮ ಹೆಮ್ಮೆ ಡಿ.ಕೆ.ಶಿ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಾತನಾಡಿ, ನಮ್ಮ ಕರ್ನಾಟಕ ನಮ್ಮ ಹೆಮ್ಮೆಯಾಗಿದ್ದು, ಬದುಕು ನೀಡಿದ ಕನ್ನಡ ಮಾತೆಗೆ ನಮ್ಮ ನಮನ ಎಂದರು.

ಕನ್ನಡ ಭಾಷೆಯನ್ನು ಬದುಕಿನ ಭಾಷೆಯನ್ನಾಗಿಸುವುದು ನಮ್ಮ ಗುರಿ. ನಮ್ಮ ತಾಯ್ನಾಡಿಗೆ ಗೌರವ ಸಲ್ಲಿಸುವುದರೊಂದಿಗೆ ಈ ನೆಲಕ್ಕೆ ಕೃತಜ್ಞತೆ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯ ಎಂದರು.

ಪ್ರಾಸ್ತಾವಿಕ ಮಾತುಗಳನ್ನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಎಸ್.ಮಧು ಬಂಗಾರಪ್ಪ ಮಾತನಾಡಿ ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿದೆ. ಅದಕ್ಕಾಗಿ ರಾಜ್ಯದಲ್ಲಿ ಉತ್ತಮ ಗುಣಮಟ್ಟದ ಶಾಲಾ ಶಿಕ್ಷಣವನ್ನು ನೀಡಲು ಸತತ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ಬಾಷೆಯನ್ನು ಪ್ರಥಮ ಭಾಷೆ ಅಥವಾ ದ್ವಿತೀಯ ಭಾಷೆಯಾಗಿ ಭೋದಿಸಲಾಗುತ್ತಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ 70 ಸಾವಿರಕ್ಕೂ ಹೆಚ್ಚು ಸರ್ಕಾರಿ, ಅನುದಾನಿತ ಖಾಸಗಿ ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, 1 ಕೋಟಿ 4 ಲಕ್ಷ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಶಾಲೆಗಳ ಗುಣಮಟ್ಟ ಹೆಚ್ಚಿಸಲು ಹಲವು ನೂತನ ಯೋಜನೆಗಳನ್ನು ಸರ್ಕಾರ ರೂಪಿಸಿದೆ. ನಮ್ಮ ಶಾಲೆ ನಮ್ಮ ಜವಾಬ್ದಾರಿ ಎಂಬ ಕಾರ್ಯಕ್ರಮದ ಮೂಲಕ ಪ್ರತಿ ಶಾಲೆಯಲ್ಲಿ ಹಳೆಯ ವಿದ್ಯಾರ್ಥಿ ಸಂಘ ಸ್ಥಾಪಿಸಲಾಗಿದೆ. ತಾವು ಕಲಿತ ಶಾಲೆಗಾಗಿ ನೆರವು ನೀಡಲು ಹಳೆಯ ವಿದ್ಯಾರ್ಥಿಗಳು ಅಪಾರ ಸಂಖ್ಯೆಯಲ್ಲಿ ಮುಂದೆ ಬಂದಿದ್ದಾರೆ ಎಂದರು.

ಸಮಾರಂಭದಲ್ಲಿ 16 ತಂಡಗಳು ಪಥ ಸಂಚಲನ ನಡೆಸಿದವು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಮಧು ಬಂಗಾರಪ್ಪ ಗೌರವ ವಂದನೆ ಸ್ವೀಕರಿಸಿದರು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಮಗಳನ್ನು ಏರ್ಪಡಿಸಲಾಗಿತ್ತು.

ಸಮಾರಂಭದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಶಿವಲಿಂಗಪ್ಪ ಹೊರಟ್ಟಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಶಾಸಕ ಎನ್.ಎ.ಹಾರಿಸ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಿತೇಶ್ಕುಮಾರ್ ಸಿಂಗ್, ಶಾಲಾ ಶಿಕ್ಷಣ ಇಲಾಖೆಯ ಆಯುಕ್ತ ಡಾ.ಕೆ.ವಿ.ತ್ರಿಲೋಕ್ಚಂದ್ರ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು, ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 

Full View

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News