ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ : ನಿಕಿತಾ ಸಿಂಘಾನಿಯ, ಕುಟುಂಬದ ವಿರುದ್ಧದ ಎಫ್ಐಆರ್ ರದ್ದತಿಗೆ ಹೈಕೋರ್ಟ್ ನಕಾರ

Update: 2025-01-06 12:20 GMT

ಬೆಂಗಳೂರು: ಪತ್ನಿ ಮತ್ತು ಕುಟುಂಬ ಸದಸ್ಯರ ವಿರುದ್ಧದ ಗಂಭೀರ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಪ್ರಕರಣದ ನಿಕಿತಾ ಸಿಂಘಾನಿಯ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ.

ತಮ್ಮ‌ ವಿರುದ್ಧ ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಅತುಲ್ ಪತ್ನಿ ನಿಖಿತಾ ಸಿಂಘಾನಿಯಾ, ಅತ್ತೆ ನಿಶಾ ಸಿಂಘಾನಿಯಾ, ಬಾಮೈದ ಅನುರಾಗ್ ಸಿಂಘಾನಿಯ ಹಾಗೂ ಸುಶೀಲ್ ಸಿಂಘಾನಿಯಾ ಅರ್ಜಿ ಸಲ್ಲಿಸಿದ್ದರು.ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್.ಕೃಷ್ಣ ಕುಮಾರ್ ಅವರ ಏಕಸದಸ್ಯ ಪೀಠ,ಅರ್ಜಿದಾರರ ವಿರುದ್ಧ ದಾಖಲಿಸಿರುವ ದೂರು ಸಮರ್ಥನೀಯವಾಗಿದೆ. ಮೇಲ್ನೋಟಕ್ಕೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಅಂಶಗಳಿವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿ ಎಫ್ಐಆರ್ ರದ್ದು ಮಾಡಲು ನಿರಾಕರಿದ್ದಾರೆ.

ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ,ಅಧೀನ ನ್ಯಾಯಾಲಯವು ಜನವರಿ 4 ರಂದು ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ನೀಡಿದೆ. ಆತ್ಮಹತ್ಯೆ ಪ್ರಚೋದನೆಯಡಿ ಪ್ರಕರಣ ದಾಖಲಿಸಲು ಯಾವುದೇ ಅಂಶಗಳು ಇಲ್ಲ. ಆರೋಪಿಗಳನ್ನು ಬಂಧಿಸುವುದಕ್ಕೆ ಆಧಾರಗಳನ್ನೂ ಪೊಲೀಸರು ನೀಡಿಲ್ಲ.ಅದರಿಂದಾಗಿ ಪೋಲೀಸರು ದಾಖಲಿಸಿರುವ ಪ್ರಕರಣ ರದ್ದು ಮಾಡಬೇಕೆಂದು ಮನವಿ ಮಾಡಿದರು.ಈ ವೇಳೆ ಮಧ್ಯಪ್ರವೇಶ ಮಾಡಿದ ನ್ಯಾಯಮೂರ್ತಿಗಳು,

ಎಫ್‌ಐಆರ್ ಓದಿದರೆ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಎಲ್ಲ ಅಂಶಗಳು ಸ್ಪಷ್ಟವಾಗಿವೆ. ನನ್ನ ಪ್ರಕಾರ ಎಲ್ಲಾ ವಿವರಗಳನ್ನು ನೀಡಲಾಗಿದೆ. ಎಫ್‌ಐಆರ್‌ನಲ್ಲಿ ಇದಕ್ಕಿಂತ ಇನ್ನೂ ಹೆಚ್ಚಿನದನ್ನು ಏನು ಕೊಡಲಾಗುತ್ತದೆ? ಎಂದು ನ್ಯಾಯಾಲಯ ಪ್ರಶ್ನಿಸಿತು. ತನಿಖೆ ನಡೆಯುತ್ತಿದೆಯೇ? ಏನೆಲ್ಲಾ ದಾಖಲೆಗಳನ್ನು ಸಂಗ್ರಹಿಸಲಾಗಿದೆ? ಡೆತ್​​ನೋಟ್, ಆತ್ಮಹತ್ಯೆ ವಿಡಿಯೋ ಸಂಗ್ರಹಿಸಲಾಗಿದೆಯೇ? ಎಂದು ಸರ್ಕಾರಿ ವಕೀಲರಿಗೆ ಪೀಠ ಪ್ರಶ್ನಿಸಿತು. ಈ ವೇಳೆ, ಸರ್ಕಾರಿ ಪರ ವಕೀಲರು ತನಿಖೆ ಪ್ರಗತಿಯಲ್ಲಿದೆ ಎಂದರು. ಆಗ ಪೀಠವು ತನಿಖೆಯ ಸಂದರ್ಭದಲ್ಲಿ ಸಂಗ್ರಹಿಸಿರುವ ದಾಖಲೆಗಳನ್ನು ಸಲ್ಲಿಸಬೇಕು. ಜೊತೆಗೆ ಆಕ್ಷೇಪಣೆ ಸಲ್ಲಿಸಬೇಕು ಎಂದು ನಿರ್ದೇಶಿಸಿ, ವಿಚಾರಣೆ ಜನವರಿ 21 ಕ್ಕೆ ಮುಂದೂಡಿದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News