ನಿರಂತರ ಮಳೆ | ಬೆಂಗಳೂರು ಜಿಲ್ಲೆಯಾದ್ಯಂತ ನಾಳೆ(ಅ.23) ಶಾಲೆಗಳಿಗೆ ರಜೆ

Update: 2024-10-22 14:13 GMT

ಸಾಂದರ್ಭಿಕ ಚಿತ್ರ

ಬೆಂಗಳೂರು : ನಗರದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ನಾಳೆ(ಅ.23) ಬೆಂಗಳೂರು ನಗರ ಜಿಲ್ಲೆಯಾದ್ಯಂತ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ, ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ ಜಿ. ಆದೇಶಿಸಿದ್ದಾರೆ.

ಮಂಗಳವಾರ ಪ್ರಕಟನೆ ಹೊರಡಿಸಿರುವ ಅವರು, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮ, ಇಂಜಿನಿಯರಿಂಗ್ , ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ. ಹೀಗಾಗಿ ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಕೆಲವೊಂದು ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದೆ ಎಂದಿದ್ದಾರೆ.

ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂದರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸುವುದು. ದುರ್ಬಲ ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸಬೇಕು ಎಂದು ಅವರು ತಿಳಿಸಿದ್ದಾರೆ.

ಮುಂಜಾಗೃತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ರವಿವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸಬೇಕು. ಪೋಷಕರು, ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಜಾಗ್ರತೆ ವಹಿಸಬೇಕು. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳಬೇಕು. ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ, ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News