ವಾಲ್ಮೀಕಿ ನಿಗಮದ ಹಗರಣ : ಮಾಜಿ ಸಚಿವ ಬಿ.ನಾಗೇಂದ್ರಗೆ ನ್ಯಾಯಾಂಗ ಬಂಧನ

Update: 2024-07-22 07:51 GMT

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂ. ಹಗರಣದ ಆರೋಪಿ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಪ್ರಕರಣಕ್ಕೆ ಸಂಬಂಧಿಸಿ ನಾಗೇಂದ್ರರನ್ನು ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯಕ್ಕೆ (ಸಿಸಿಎಚ್-82) ಸೋಮವಾರ ಹಾಜರುಪಡಿಸಲಾಗಿತ್ತು.

ವಿಚಾರಣೆ ವೇಳೆ ಪ್ರಾಸಿಕ್ಯೂಷನ್ ಪರ ಹಾಜರಾದ ಇ.ಡಿ ವಕೀಲ ಪಿ.ಪ್ರಸನ್ನ ಕುಮಾರ್, ಪ್ರಕರಣದ ಮತ್ತೊಬ್ಬ ಆರೋಪಿಯಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಹೈದರಾಬಾದ್ ನ ಸತ್ಯನಾರಾಯಣ ವರ್ಮರನ್ನು ಬಾಡಿ ವಾರಂಟ್ ಮುಖಾಂತರ ವಶಕ್ಕೆ ನೀಡುವಂತೆ ಕೋರಿದರು.

ಈ ಮನವಿಯನ್ನು ಮಾನ್ಯ ಮಾಡಿದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರು ಆರೋಪಿ ಸತ್ಯನಾರಾಯಣ ವರ್ಮರನ್ನು ಜು.23ರಂದು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಆದೇಶಿಸಿದರು. ಅಲ್ಲದೇ, ನಾಗೇಂದ್ರರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದರು.

ನಾಗೇಂದ್ರ ಪರ ಹೈಕೋರ್ಟ್ ಹಿರಿಯ ವಕೀಲ ಎಂ.ಎಸ್.ಶ್ಯಾಮ್ ಸುಂದರ್ ಹಾಜರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News