ಹೊಸಕೋಟೆ: ದೇವಸ್ಥಾನದಲ್ಲಿ ಪ್ರಸಾದ ಸೇವಿಸಿ ಅಸ್ವಸ್ಥಗೊಂಡಿದ್ದ ಮಹಿಳೆ ಮೃತ್ಯು

Update: 2023-12-25 17:55 GMT
ಸಾಂದರ್ಭಿಕ ಚಿತ್ರ

ಬೆಂಗಳೂರು ಗ್ರಾಮಾಂತರ: ಹೊಸಕೋಟೆಯಲ್ಲಿ ದೇವಸ್ಥಾನದ ಪ್ರಸಾದ ಸೇವಿಸಿ ಅಸ್ವಸ್ಥರಾಗಿದ್ದ ಮಹಿಳೆಯೊಬ್ಬರು ಮೃತಪಟ್ಟಿದ್ದು, ವಿವಿಧ ಆಸ್ಪತ್ರೆಗಳಲ್ಲಿ 135ಕ್ಕೂ ಹೆಚ್ಚು ಜನರು ಚಿಕಿತ್ಸೆಗೆ ದಾಖಲಾಗಿರುವ ಘಟನೆ ವರದಿಯಾಗಿದೆ.

ಹೊಸಕೋಟೆಯ ಕಾವೇರಿನಗರದ ನಿವಾಸಿ ಸಿದ್ದಗಂಗಮ್ಮ(60) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ.

ಘಟನೆ ಸಂಬಂಧ ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ಪತ್ರೆಗೆ ಹೆಚ್ಚುವರಿ ಎಸ್ಪಿ ಪುರುಷೋತ್ತಮ್ ಅವರು ಭೇಟಿ ನೀಡಿ ಮಾಹಿತಿ ಪಡೆದಿದ್ದು, ಸಿಲಿಕಾನ್ ಸಿಟಿ ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಪ್ರಸಾದ ಸೇವಿಸಿದ 135ಕ್ಕೂ ಹೆಚ್ಚು ಜನರು ಚಿಕಿತ್ಸೆ ಪಡೆಯುತ್ತಿದ್ದು, ಅವರಲ್ಲಿ ಸುಮಾರು ಸುಮಾರು 35 ಮಂದಿಯ ಆರೋಗ್ಯ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಆಸ್ಪತ್ರೆಗೆ ದಾಖಲಾದವರಲ್ಲಿ ಕೆಲವರು ತಕ್ಷಣಕ್ಕೆ ಗುಣಮುಖರಾಗಿದ್ದು, ಇನ್ನು ಕೆಲವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯ ಇಲಾಖೆ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ತಿಳಿಸಿದ್ದಾರೆ.

ಪ್ರಕರಣದ ತನಿಖೆ ಆರಂಭಿಕ ಹಂತದಲ್ಲಿರುವುದರಿಂದ, ಸದ್ಯಕ್ಕೆ ನಿಖರವಾದ ಕಾರಣವನ್ನು ಕಂಡುಹಿಡಿಯಲಾಗುವುದಿಲ್ಲ, ಡಿ.24ರಂದು ಹನುಮ ಜಯಂತಿ ಹಿನ್ನೆಲೆಯಲ್ಲಿ ಬಹುತೇಕರು ಹೊಸಕೋಟೆಯ ವೆಂಕಟರಮಣಸ್ವಾಮಿ, ಊರುಬಾಗಿಲು ಆಂಜನೇಯ, ಕೋಟೆ ಆಂಜನೇಯಸ್ವಾಮಿ ದೇವಾಲಯಗಳಿಗೆ ತೆರಳಿ ಪುಲಿಯೋಗರೆ, ಪಾಯಸ, ಲಡ್ಡು ಸೇವಿಸಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಒಂದು ದಿನದ ನಂತರ, ಕೆಲವರು ಭೇದಿ ಮತ್ತು ವಾಂತಿ ಎಂದು ದೂರಿದರು ಮತ್ತು ನಂತರ ಅವರು ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ಧಾವಿಸಿದರು. ಅದೇ ರೋಗಲಕ್ಷಣಗಳಿದ್ದ ಮಹಿಳೆಯನ್ನು ಡಿ.24ರ ಭಾನುವಾರ ಮಧ್ಯಾಹ್ನ ಆಸ್ಪತ್ರೆಗೆ ದಾಖಲಿಸಲಾಗಿದ್ದು, 25ರಂದು ಸಾವನ್ನಪ್ಪಿದ್ದಾರೆ ಎಂದು ಎಸ್ಪಿ ಪುರುಷೋತ್ತಮ್ ತಿಳಿಸಿದ್ದಾರೆ.

ಸುಮಾರು 135 ಮಂದಿಯನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂಬ ಮಾಹಿತಿ ನಮಗಿದೆ. ಗರಿಷ್ಠ ರೋಗಿಗಳು ದಾಖಲಾಗಿರುವ ಆರು ಆಸ್ಪತ್ರೆಗಳನ್ನು ಆರೋಗ್ಯ ಇಲಾಖೆ ಗುರುತಿಸಿದೆ. ಪರಿಸ್ಥಿತಿ ನೋಡಿದರೆ ಆಸ್ಪತ್ರೆಯೊಂದರಲ್ಲಿ ಐಸಿಯು ಚಿಕಿತ್ಸೆಗೆ ಸಂಪೂರ್ಣ ಮಹಡಿಯನ್ನು ಮೀಸಲಿಟ್ಟಿದ್ದಾರೆ ಎಂದು ಎಸ್ಪಿ ಪುರುಷೋತ್ತಮ್ ಹೇಳಿದ್ದಾರೆ.

ನಾವು ಈ ರೋಗಿಗಳ ಹೇಳಿಕೆಗಳನ್ನು ದಾಖಲಿಸಲು ಪ್ರಾರಂಭಿಸಿದ್ದೇವೆ. ನಮ್ಮ ತನಿಖೆ ಆರಂಭಿಕ ಹಂತದಲ್ಲಿದೆ. ನಾವು ಆರೋಗ್ಯ ಇಲಾಖೆ ಮತ್ತು ಆಹಾರ ಸುರಕ್ಷತಾ ಅಧಿಕಾರಿಯಿಂದ ದೂರಿಗಾಗಿ ಕಾಯುತ್ತಿದ್ದೇವೆ. ಹೇಳಿಕೆಗಳು ಮತ್ತು ಅವರ ದೂರುಗಳ ಆಧಾರದ ಮೇಲೆ, ಶೀಘ್ರದಲ್ಲೇ ಪ್ರಕರಣ ದಾಖಲಿಸಿಕೊಂಡು ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಎಸ್ಪಿ ಪುರುಷೋತ್ತಮ್ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News