ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ಮುಖ್ಯಮಂತ್ರಿ, ಸಚಿವರು, ಶಾಸಕರಿಗೆ ಆಹ್ವಾನ
ಬೆಳಗಾವಿ(ಸುವರ್ಣ ವಿಧಾನಸೌಧ) : ಇದೇ ತಿಂಗಳ 20 ರಿಂದ ಮಂಡ್ಯ ಜಿಲ್ಲೆಯಲ್ಲಿ ಜರುಗಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ನೇತೃತ್ವದ ಜಿಲ್ಲಾಡಳಿತದ ನಿಯೋಗ, ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಸಮ್ಮೇಳನದ ಆಹ್ವಾನ ಪತ್ರಿಕೆ ನೀಡಿ ಆಹ್ವಾನಿಸಿತು.
ಇದೇ ಸಂದರ್ಭದಲ್ಲಿ ಸಾಹಿತ್ಯ ಸಮ್ಮೇಳನಕ್ಕೆ ಮಂತ್ರಿ, ಶಾಸಕರಿಗೆ ಆಹ್ವಾನ ನೀಡಲಾಯಿತು. ಈ ಸಮಯದಲ್ಲಿ ಮಂಡ್ಯದ ಜಿಲ್ಲಾಡಳಿತ ಹಾಗೂ ಮಂಡ್ಯ ಕ್ಷೇತ್ರದ ಶಾಸಕ ರವಿಕುಮಾರ್ ಗಣಿಗ, ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡ, ವಿಧಾನ ಪರಿಷತ್ ಸದಸ್ಯ ಮಧು ಮಾದೇಗೌಡ, ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.
ಎಲ್ಲರ ಕೊರಳಲ್ಲಿ ಕನ್ನಡ ಶಾಲು :
ಸ್ಪೀಕರ್ ಖಾದರ್, ಸಚಿವರು, ಆಡಳಿತ ಮತ್ತು ಪ್ರತಿಪಕ್ಷಗಳ ಶಾಸಕರಿಗೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕನ್ನಡ ಸಾಹಿತ್ಯ ಪರಿಷತ್ ಆಹ್ವಾನ ಪತ್ರಿಕೆ ನೀಡಿ ಆಹ್ವಾನಿಸಿದ ಮಂಡ್ಯ ಜಿಲ್ಲಾಡಳಿತ, ಎಲ್ಲರಿಗೆ ಕನ್ನಡ ಶಾಲು ಹಾಕಿ ಸ್ವಾಗತ ಕೋರಿತು. ಆ ಹಿನ್ನೆಲೆಯಲ್ಲಿ ಸ್ಪೀಕರ್ ಯು.ಟಿ.ಖಾದರ್, ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಸಚಿವರಾದ ಡಾ.ಜಿ.ಪರಮೇಶ್ವರ್, ಚಲುವರಾಯಸ್ವಾಮಿ ಸೇರಿದಂತೆ ಬಹುತೇಕ ಶಾಸಕರು, ತಮ್ಮ ಕೊರಳಿನಲ್ಲಿ ಕನ್ನಡ ಶಾಲು ಧರಿಸಿಯೇ ಸದನ ಕಲಾಪಕ್ಕೆ ಹಾಜರಾಗಿದ್ದು ವಿಶೇಷವಾಗಿತ್ತು.