‘ಬೆಳಗಾವಿ ಕಾಂಗ್ರೆಸ್ ಅಧಿವೇಶನ’ ರಾಜ್ಯಕ್ಕೆ ಸಿಕ್ಕ ಐತಿಹಾಸಿಕ ಭಾಗ್ಯ: ಡಿ.ಕೆ.ಶಿವಕುಮಾರ್
ಬೆಳಗಾವಿ : ಬೆಳಗಾವಿ ಅಧಿವೇಶನದಲ್ಲಿ ಮಹಾತ್ಮ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ್ದು, ಕರ್ನಾಟಕಕ್ಕೆ ಸಿಕ್ಕ ಐತಿಹಾಸಿಕ ಭಾಗ್ಯ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಮಂಗಳವಾರ ಬೆಳಗಾವಿಯ ಸರ್ಕಿಟ್ ಹೌಸ್ ಹಾಗೂ ಪೀರನವಾಡಿ ಗಾಂಧಿ ಭವನದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಮಹಾತ್ಮ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾದಾಗ ಗಂಗಾಧರ ದೇಶಪಾಂಡೆ ಹಾಗೂ ಜವಾಹರ್ ಲಾಲ್ ನೆಹರೂ ಮಾತ್ರ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಆಗ ದೇಶಪಾಂಡೆ ಬೆಳಗಾವಿಯಲ್ಲಿ ಎಐಸಿಸಿ ಅಧಿವೇಶನ ನಡೆಸಲು ಆಹ್ವಾನ ನೀಡಿದರು ಎಂದರು.
ಆ ಅಧಿವೇಶನಕ್ಕೆ ಬಂದ ಬರುವ ಜನರಿಗೆ ಕುಡಿಯುವ ನೀರು ಕಲ್ಪಿಸಲು ಬಾವಿ ತೋಡಲಾಗಿತ್ತು. 100 ವರ್ಷಗಳ ನಂತರ ನಮ್ಮ ಕರ್ನಾಟಕದವರೇ ಆದ ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿದ್ದಾರೆ. ‘ಅಂದು ಗಾಂಧಿ ಇಂದು ಖರ್ಗೆ’ ಅಧ್ಯಕ್ಷರಾಗಿದ್ದಾರೆ. ಈ ಮಧ್ಯೆ ಅನೇಕ ಮಹಾನ್ ನಾಯಕರು ಆ ಸ್ಥಾನ ಅಲಂಕರಿಸಿದ್ದಾರೆ ಎಂದು ಶಿವಕುಮಾರ್ ಹೇಳಿದರು.
ನಿಜಲಿಂಗಪ್ಪ, ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಕೂಡ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದರು. ಈ ಬಾರಿಯ ಅಧಿವೇಶನವನ್ನು ಗುಜರಾತಿನ ಸಬರಮತಿ ಆಶ್ರಮದಲ್ಲಿ ನಡೆಸುವ ಬಗ್ಗೆ ಚರ್ಚೆ ನಡೆಯಿತು. ನಂತರ ನಾನು ಎಐಸಿಸಿಗೆ ಬೆಳಗಾವಿಯಲ್ಲೆ ನಡೆಸುವ ಪ್ರಸ್ತಾವನೆ ಸಲ್ಲಿಸಿದೆ, ಅವರು ಒಪ್ಪಿದರು ಎಂದು ಶಿವಕುಮಾರ್ ತಿಳಿಸಿದರು.
‘ಗಾಂಧಿ ಭಾರತ’ ಕಾರ್ಯಕ್ರಮದ ಭಾಗವಾಗಿ ಅ.2ರಂದು ರಾಜ್ಯ ಸರಕಾರದ ವತಿಯಿಂದ ಬೆಂಗಳೂರಿನ ಗಾಂಧಿ ಭವನದಿಂದ ವಿಧಾನಸೌಧದ ಗಾಂಧಿ ಪ್ರತಿಮೆವರೆಗೂ ಹೆಜ್ಜೆ ಹಾಕಿದೆವು. ನಂತರ ಪಕ್ಷದ ವತಿಯಿಂದ ಗಾಂಧಿ ವೃತ್ತದಿಂದ ಭಾರತ ಜೋಡೋ ಭವನದವರೆಗೂ ಹೆಜ್ಜೆ ಹಾಕಲಾಗಿತ್ತು. ಈಗ ಮುಂದುವರಿದ ಭಾಗವಾಗಿ ಡಿ.26 ರಂದು ಬೆಳಗಾವಿಯಲ್ಲಿ ಪಕ್ಷದ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿಯ ಎಲ್ಲ ಸದಸ್ಯರು, ಎಲ್ಲ ಮುಖ್ಯಮಂತ್ರಿಗಳು, ಶಾಸಕರು, ಸಂಸದರು ಆಗಮಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಮರುದಿನ ಬೃಹತ್ ಸಾರ್ವಜನಿಕ ಸಮಾವೇಶ ನಡೆಯಲಿದೆ. ಈ ಸಮಾವೇಶಕ್ಕೆ ಪಂಚಾಯ್ತಿ ಸದಸ್ಯರು, ಸಮಿತಿ ಹಾಗೂ ನಿಗಮಗಳ ಸದಸ್ಯರು, ನಾಮನಿರ್ದೇಶಿತರು ಸೇರಿದಂತೆ ಪಕ್ಷದ ಎಲ್ಲ ಮುಖಂಡರು, ಕಾರ್ಯಕರ್ತರು ಆಗಮಿಸಲಿದ್ದಾರೆ. ಈ ಮಧ್ಯೆ ಸುವರ್ಣ ವಿಧಾನಸೌಧದ ಬಳಿ ಗಾಂಧಿ ಪ್ರತಿಮೆ ಉದ್ಘಾಟನೆ ಮಾಡಲಾಗುತ್ತಿದ್ದು, ಈ ಕಾರ್ಯಕ್ರಮಕ್ಕೆ ಎಲ್ಲ ಪಕ್ಷದ ಶಾಸಕರು ಹಾಗೂ ಪರಿಷತ್ ನಾಯಕರಿಗೂ ಆಹ್ವಾನ ನೀಡಲಾಗುವುದು. ಸ್ಪೀಕರ್ ಹಾಗೂ ಸಭಾಪತಿ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ಉಪ ಮುಖ್ಯಮಂತ್ರಿ ತಿಳಿಸಿದರು.
ಇಂದಿರಾ ಗಾಂಧಿ ಅವರ ನುಡಿಮುತ್ತುಗಳ ಬಗ್ಗೆ ಸೋನಿಯಾ ಗಾಂಧಿ ಒಂದು ಪುಸ್ತಕ ಬರೆದಿದ್ದಾರೆ. ಆ ಪುಸ್ತಕವನ್ನು ನಾನು ಕನ್ನಡಕ್ಕೆ ಅನುವಾದ ಮಾಡಿಸಿದ್ದು, ಗಾಂಧಿ ಭಾರತ ಕಾರ್ಯಕ್ರಮದ ವೇಳೆ ಬಿಡುಗಡೆ ಮಾಡಲಾಗುವುದು ಎಂದು ಶಿವಕುಮಾರ್ ಹೇಳಿದರು.