ಬೆಳಗಾವಿ | ಕಾರಿಗೆ ಆಕಸ್ಮಿಕ ಬೆಂಕಿ : ಪ್ರಯಾಣಿಕರು ಪಾರು
Update: 2024-12-11 11:56 GMT
ಬೆಳಗಾವಿ : ಚಲಿಸುತ್ತಿದ್ದ ಕಾರೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಸುಟ್ಟುಕರಕಲಾಗಿದ್ದು, ಅದರಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹುಕ್ಕೇರಿ ತಾಲೂಕಿನ ಹತ್ತರಗಿ ಬಳಿ ನಡೆದಿದೆ.
ಹುಕ್ಕೇರಿ ಕಡೆಯಿಂದ ಹುಬ್ಬಳ್ಳಿ ಕಡೆಗೆ ಕಾರು ಹೊರಟಿತ್ತು. ಈ ವೇಳೆ ಹತ್ತರಗಿಯ ಬಸ್ ನಿಲ್ದಾಣ ಎದುರಿನ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ ಎಂದು ಗೊತ್ತಾಗಿದೆ.
ಇದನ್ನು ಕಂಡ ಕೂಡಲೇ ಕಾರಿನಲ್ಲಿದ್ದ ಪ್ರಯಾಣಿಕರು ಹೊರಗೆ ಬಂದಿದ್ದಾರೆ. ಇದರಿಂದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳದಲ್ಲಿದ್ದ ಸ್ಥಳೀಯರು ಪೊಲೀಸರಿಗೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.