ಮಹದಾಯಿ, ಭದ್ರಾ ಮೇಲ್ದಂಡೆ, ಮೇಕೆದಾಟು ಯೋಜನೆಗಳಿಗೆ ಕೇಂದ್ರ ಸಹಕಾರ ನೀಡುತ್ತಿಲ್ಲ : ಸಿಎಂ ಸಿದ್ದರಾಮಯ್ಯ

Update: 2024-03-06 17:37 GMT

ಬೆಳಗಾವಿ:  ಜಿಲ್ಲೆಗೆ 1500 ಕೋಟಿ ರೂ.ವೆಚ್ಚದ ಬೃಹತ್ ಏತ ನೀರಾವರಿ ಯೋಜನೆಯನ್ನು ಕೊಡುವ ಮೂಲಕ ಶಾಸಕ ಲಕ್ಷ್ಮಣ ಸವದಿ ಅವರಿಗೆ ಕೊಟ್ಟ ಭರವಸೆ ಈಡೇರಿಸಿದ್ದೇವೆ. ಅವರಿಗೆ ಸದ್ಯದಲ್ಲೆ ಒಳ್ಳೆಯ ಭವಿಷ್ಯವಿದೆ. ನಮ್ಮ ಕಾಂಗ್ರೆಸ್ ಸರಕಾರ ಈ ಯೋಜನೆಯನ್ನು ಬೆಳಗಾವಿ ಜಿಲ್ಲೆಗೆ ನೀಡಿದ್ದನ್ನು ಮರೆಯಲಾಗದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಬುಧವಾರ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಟ್ಟಲಗಿಯ (ಅಮ್ಮಾಜೇಶ್ವರಿ) ಏತ ನೀರಾವರಿ ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಯೋಜನೆಯಿಂದ ಎರಡು ರೀತಿಯ ಲಾಭ ಆಗಲಿದೆ. ಮೊದಲಿಗೆ ಒಣ ಭೂಮಿ ಇರುವ ಜಮೀನುಗಳಿಗೆ ನೀರು ಒದಗುತ್ತದೆ. ಎರಡನೆಯದಾಗಿ ಕೆರೆಗಳಿಗೆ ನೀರು ತುಂಬಿಸುವುದರಿಂದ ಅಂತರ್ಜಲ ಅಭಿವೃದ್ಧಿ ಆಗುತ್ತದೆ ಎಂದು ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳ ಉದಾಹರಣೆಗಳನ್ನು ನೀಡಿ ವಿವರಿಸಿದರು.

ಕೇಂದ್ರ ಸಹಕಾರ ನೀಡುತ್ತಿಲ್ಲ

ಕೇಂದ್ರದ ಹಾಲಿ ಸರಕಾರ ಮತ್ತು ರಾಜ್ಯದಲ್ಲಿ ಈ ಹಿಂದೆ ಇದ್ದ ಬಿಜೆಪಿ ಸರಕಾರ ರಾಜ್ಯದ ಯಾವ ನೀರಾವರಿ ಯೋಜನೆಗಳಿಗೂ ಬೆಂಬಲ ನೀಡಲಿಲ್ಲ. ಕೃಷ್ಣ ಮೇಲ್ದಂಡೆ, ಮಹದಾಯಿ, ಭದ್ರಾ ಮೇಲ್ದಂಡೆ, ಮೇಕೆದಾಟು ಯೋಜನೆಗಳಿಗೆ ಕೇಂದ್ರ ಒಂಚೂರು ಸಹಕಾರ ನೀಡುತ್ತಿಲ್ಲ ಎಂದು ಅವರು ದೂರಿದರು.

ಬೆಳಗಾವಿಯಲ್ಲಿ ಗೆದ್ದಿರುವ ಇಬ್ಬರು ಸಂಸದರು ಸೇರಿ ಬಿಜೆಪಿಯ ಒಬ್ಬೆ ಒಬ್ಬ ಸಂಸದ ಸಂಸತ್ತಿನಲ್ಲಿ ಈ ಬಗ್ಗೆ ಧ್ವನಿ ಎತ್ತಲಿಲ್ಲ. ಇದು ಬೆಳಗಾವಿ ಜನತೆಗೆ, ರಾಜ್ಯದ ಜನತೆಗೆ ಬಿಜೆಪಿ ಸಂಸದರು ಬಗೆದ ದ್ರೋಹ ಅಲ್ಲವೆ ಎಂದು ಮುಖ್ಯಮಂತ್ರಿ ಖಾರವಾಗಿ ಪ್ರಶ್ನಿಸಿದರು.

ನೀರಾವರಿ ಯೋಜನೆಗಳ ಬಗ್ಗೆಯೂ ಈ ಸಂಸದರು ಬಾಯಿಯನ್ನೇ ಬಿಡಲಿಲ್ಲ, ರಾಜ್ಯಕ್ಕೆ ಆರ್ಥಿಕವಾಗಿ ವಂಚಿಸುತ್ತಿರುವ ಬಗ್ಗೆಯೂ ತುಟಿ ಬಿಡದ ಈ ಸಂಸದರಿಗೆ ನೀವು ಕೊಟ್ಟ ಮತಕ್ಕೆ ಏನು ಗೌರವ ಬಂತು ಹೇಳಿ. ಬಿಜೆಪಿ ಇವತ್ತಿನವರೆಗೂ ನುಡಿದಂತೆ ನಡೆದ ಒಂದೇ ಒಂದು ಉದಾಹರಣೆ ಇದೆಯಾ ನೀವೇ ವಿಚಾರ ಮಾಡಿ ಎಂದು ಸಿದ್ದರಾಮಯ್ಯ ಹೇಳಿದರು.

ನಮ್ಮ ಸರಕಾರ ಕೊಟ್ಟ ಮಾತಿನಂತೆ ನಡೆದುಕೊಂಡು ನೀವು ಕೊಟ್ಟ ಮತಕ್ಕೆ ಗೌರವ ಕೊಟ್ಟಿದ್ದೇವೆ. ಹೌದೋ ಇಲ್ಲವೋ ಎದೆ ಮುಟ್ಟಿಕೊಂಡು ಕೇಳಿಕೊಳ್ಳಿ. ನಿಮ್ಮ ಬದುಕಿಗೆ ಆಸರೆ ಆಗುತ್ತಿರುವ, ಕುಟುಂಬದ ಕಷ್ಟಗಳಿಗೆ ಸ್ಪಂದಿಸುವ ಕಾರ್ಯಕ್ರಮ ಕೊಡುತ್ತಿರುವ ನಾವು ಬೇಕೋ-ದೇವರ ಹೆಸರಲ್ಲಿ ನಿಮ್ಮ ಭಾವನೆ ಕೆರಳಿಸಿ ನಿಮ್ಮ ಬದುಕಿಗೆ ವಂಚಿಸುತ್ತಿರುವ ಬಿಜೆಪಿ ಬೇಕಾ? ನಿಮ್ಮ ಹೃದಯವನ್ನು ಕೇಳಿಕೊಳ್ಳಿ. ನಿಮ್ಮ ಹೃದಯ ಹೇಳಿದವರಿಗೆ ಮತ ಹಾಕಿ ಎಂದು ಮುಖ್ಯಮಂತ್ರಿ ಕರೆ ನೀಡಿದರು.

ನರೇಂದ್ರ ಮೋದಿಯವರ ಸುಳ್ಳುಗಳಿಗೆ, ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯಗಳಿಗೆ ಕೋಲೆ ಬಸವನಂತೆ ತಲೆ ಆಡಿಸುವ ಬಿಜೆಪಿಯನ್ನು ತಿರಸ್ಕರಿಸಿ. ನಾವು ಕೆಲಸ ಮಾಡಿ ಕೂಲಿ ಕೇಳುತ್ತಿದ್ದೇವೆ. ಕೆಲಸ ಮಾಡಿದವರಿಗೆ ನೀವು ಕೂಲಿ ಕೊಡಿ ಎಂದು ಅವರು ಮನವಿ ಮಾಡಿದರು.

ನಾಡಿನ ಬಡವರ, ಮಧ್ಯಮ ವರ್ಗದವರ ಕೊಳ್ಳುವ ಶಕ್ತಿಯನ್ನು ಹೆಚ್ಚಿಸಿದ್ದೇವೆ. ಇದು ತಪ್ಪಾ? ಆದರೆ ಬಿಜೆಪಿ ಇದನ್ನು ವಿರೋಧಿಸುತ್ತಿದೆ. ನಾಡಿನ ನಾಲ್ಕೂವರೆ ಕೋಟಿ ಫಲಾನುಭವಿಗಳನ್ನು ಬಿಜೆಪಿ ಅವಮಾನಿಸುತ್ತಿದೆ. ನಿಮ್ಮನ್ನು ಅವಮಾನಿಸುವವರನ್ನು ಕ್ಷಮಿಸಬೇಡಿ ಎಂದು ಸಿದ್ದರಾಮಯ್ಯ ಕರೆ ನೀಡಿದರು

ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಲಕ್ಷ್ಮಣ ಸವದಿ ವಹಿಸಿದ್ದರು. ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮಾಜಿ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್, ಶಾಸಕರಾದ ಮಹೇಂದ್ರ ತಮ್ಮಣ್ಣವರ, ಅಶೋಕ್ ಪಟ್ಟಣ್ ಸೇರಿ ಹಲವು ನಾಯಕರು ವೇದಿಕೆಯಲ್ಲಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News