ಪಿಡಿಓ ಪರೀಕ್ಷೆಯ ವೇಳೆ ಪ್ರಶ್ನೆಪತ್ರಿಕೆ ವಿತರಣೆ ವಿಳಂಬ ಆರೋಪ | ತ್ರಿಸದಸ್ಯರ ಸಮಿತಿಯ ವರದಿ ಆಧರಿಸಿ ಕ್ರಮ : ಸಿಎಂ ಸಿದ್ದರಾಮಯ್ಯ
ಬೆಳಗಾವಿ: ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಓ ಹುದ್ದೆಗಳ ನೇಮಕಾತಿಗಾಗಿ ಸಿಂಧನೂರಿನಲ್ಲಿ ನಡೆದ ಪರೀಕ್ಷೆಯ ವೇಳೆ ಪ್ರಶ್ನೆಪತ್ರಿಕೆ ವಿತರಿಸಲು ಅರ್ಧಗಂಟೆ ತಡವಾಗಿರುವ ಕುರಿತು ಅಭ್ಯರ್ಥಿಗಳು ನಡೆಸಿದ ಪ್ರತಿಭಟನೆ ಕುರಿತಂತೆ ಸಮಗ್ರ ತನಿಖೆ ನಡೆಸಲು ಕೆಪಿಎಸ್‍ಸಿ 3 ಸದಸ್ಯರ ಉಪ ಸಮಿತಿಯನ್ನು ರಚಿಸಿದ್ದು, ಸಮಿತಿ ಸಲ್ಲಿಸುವ ವರದಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಗುರುವಾರ ವಿಧಾನ ಪರಿಷತ್‍ನ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಶಶೀಲ್ ನಮೋಶಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಒ ಹುದ್ದೆಗಳ ಪರೀಕ್ಷೆಯನ್ನು ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದು, ಈ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಆಗಿಲ್ಲ ಎಂದರು.
ನ.17ರಂದು ಸಿಂಧನೂರು ಸರಕಾರಿ ಪಿಯು ಕಾಲೇಜಿನಲ್ಲಿ ನಡೆದ ಪಿಡಿಒ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ವಿತರಿಸಲು ವಿಳಂಬವಾಗಿಲ್ಲ. ಈ ಪ್ರಕರಣದ ಸತ್ಯಾಸತ್ಯತೆ ತಿಳಿಯಲು ಈಗಾಗಲೇ ಆಯೋಗದಲ್ಲಿ ಉಪ ಸಮಿತಿಯನ್ನು ರಚಿಸಲಾಗಿದ್ದು, ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.