ಸಿಎಂ ಸಿದ್ದರಾಮಯ್ಯ ವಿರುದ್ಧದ ಎಫ್‌ಐಆರ್‌ಗೆ ಕಾನೂನು ಮೂಲಕವೇ ಹೋರಾಟ : ಲಕ್ಷ್ಮೀ ಹೆಬ್ಬಾಳ್ಕರ್‌

Update: 2024-09-28 07:14 GMT

ಲಕ್ಷ್ಮೀ ಹೆಬ್ಬಾಳ್ಕರ್‌

ಬೆಳಗಾವಿ : "ರಾಜಕೀಯ ಪ್ರೇರಿತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇದಕ್ಕೆ ಯಾವುದೇ ಕಾರಣಕ್ಕೂ ಜಗ್ಗುವ ಮಾತೇ ಇಲ್ಲ. ಕಾನೂನು ಮೂಲಕವೇ ಉತ್ತರ ನೀಡಲಾಗುವುದು"ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ದೇಶದಲ್ಲಿ ಬಿಜೆಪಿಯೇತರ ಸರಕಾರಗಳನ್ನು ಅಸ್ಥಿರಗೊಳಿಸುವ ಕೆಲಸ ನಡೆಯುತ್ತಿದ್ದು, ಇದಕ್ಕಾಗಿ ರಾಜಭವನಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ" ಎಂದು ಆರೋಪಿಸಿದರು.

ರಾಜೀನಾಮೆ ನೀಡಲಿ :

"6 ಸಾವಿರ ಕೋಟಿ ಮೊತ್ತದ ಚುನಾವಣಾ ಬಾಂಡ್ ಹಗರಣದಲ್ಲಿ ಸಿಲುಕಿರುವ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಡಿನೋಟಿಫೈ ಹಗರಣದಲ್ಲಿ ಸಿಲುಕಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಮೊದಲು ರಾಜೀನಾಮೆ ನೀಡಲಿ, ನಂತರ ಸಿಎಂ ಸಿದ್ದರಾಮಯ್ಯನವರ ಬಗ್ಗೆ ಬಿಜೆಪಿಯವರು ಮಾತನಾಡಲಿ" ಎಂದು ಸಚಿವರು ಕಿಡಿಕಾರಿದರು.

ಸರಕಾರದ ವಿರುದ್ಧ ಪ್ರಡ್ಯಂತ್ರ :

"ಚುನಾವಣೆಗೂ ಮೊದಲು ನಾವು ಘೋಷಿಸಿದ್ದ ಗ್ಯಾರಂಟಿ ಯೋಜನೆಗಳನ್ನು ಗಿಮಿಕ್ ಎಂದು ಛೇಡಿಸಿದ್ದರು. ನಾವು ಅಧಿಕಾರಕ್ಕೆ ಬಂದ 100 ದಿನಗಳಲ್ಲಿ ಪಂಚ ಗ್ಯಾರಂಟಿಗಳನ್ನು ಜಾರಿಗೆ ತಂದೆವು. ಇದನ್ನು ಸಹಿಸದ ವಿಪಕ್ಷಗಳು ಇದೀಗ ಯೋಜನೆಗಳ ಬಗ್ಗೆ, ಸರಕಾರದ ಬಗ್ಗೆ ವಿನಾಕಾರಣ ಆರೋಪಗಳನ್ನು ಮಾಡುತ್ತಿವೆ" ಎಂದರು.

ಬಿಜೆಪಿಯಿಂದ ಗ್ಯಾರಂಟಿ ಯೋಜನೆಗಳ ಅನುಕರಣೆ :

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ ನಾಯಕರು ಟೀಕಿಸುತ್ತಾರೆ. ಆದರೆ, ಜಮ್ಮು ಕಾಶ್ಮೀರ, ಹರಿಯಾಣ, ಮಹಾರಾಷ್ಟ್ರ ರಾಜ್ಯಗಳಲ್ಲಿ ಚುನಾವಣಾ ಪ್ರಣಾಳಿಕೆಯಲ್ಲಿ ನಮ್ಮ ಯೋಜನೆಗಳನ್ನೇ ಅನುಕರಣೆ ಮಾಡಿದ್ದಾರೆ. ಇದು ಅವರಿಗಿರುವ ದ್ವಂದ್ವ ನಿಲುವು. ನಮ್ಮ ಯೋಜನೆಗಳು ಕೇವಲ ಕರ್ನಾಟಕಕ್ಕಷ್ಟೆ ಅಲ್ಲ, ಇಡೀ ದೇಶಕ್ಕೆ ಮಾದರಿಯಾಗಿವೆ ಎಂದು ಸಚಿವರು ಹೇಳಿದರು.

ಬೇರೆ ರಾಜ್ಯಗಳ ಚುನಾವಣಾ ಪ್ರಚಾರದ ವೇಳೆ ಮೋದಿ ಮುಡಾ ಹಗರಣ ಪ್ರಸ್ತಾಪಿಸುವ ಮೂಲಕ ಕರ್ನಾಟಕ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅವರಿಗೆ ಕರ್ನಾಟಕದ ಹೆಸರು ಕೆಡಿಸಿ ಚುನಾವಣೆಯಲ್ಲಿ ಗೆಲ್ಲುವುದೇ ಮುಖ್ಯವಾಗಿದೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - Mushaveer

contributor

Byline - ವಾರ್ತಾಭಾರತಿ

contributor

Similar News