ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಆರೋಪ | ಸಿ.ಟಿ.ರವಿ ವಿರುದ್ಧ ಎಫ್‌ಐಆರ್ ದಾಖಲು
Update: 2024-12-19 13:15 GMT
ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿಧಾನ ಪರಿಷತ್‌ನಲ್ಲಿ ಗುರುವಾರ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಆರೋಪದ ಮೇಲೆ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ್ದ ದೂರಿನ್ವಯ ಪ್ರಕರಣ ದಾಖಲಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಅಂಬೇಡ್ಕರ್ ಕುರಿತು ನೀಡಿದ ಹೇಳಿಕೆ ಸಂಬಂಧ ವಿಧಾನ ಪರಿಷತ್‌ನಲ್ಲಿ ಗುರುವಾರ ಬೆಳಗ್ಗೆ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಸಿ.ಟಿ.ರವಿ, ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕುರಿತು ಅವಹೇಳನಕಾರಿ ಪದ ಬಳಸಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಪ್ರಕರಣದ ಸಂಬಂಧ ಕಾಂಗ್ರೆಸ್ ಮುಖಂಡರು ಈಗಾಗಲೇ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೂ ದೂರು ನೀಡಿದ್ದಾರೆ. ಸಿ.ಟಿ.ರವಿ ಅವರನ್ನು ಸದನದಿಂದ ಅಮಾನತುಗೊಳಿಸಬೇಕು. ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.