ಅಪರಾಧ ತಡೆಗೆ ರಾಜ್ಯಾದ್ಯಂತ 5 ಲಕ್ಷ ಕ್ಯಾಮೆರಾಗಳ ಅಳವಡಿಕೆ : ಜಿ.ಪರಮೇಶ್ವರ್
ಬೆಳಗಾವಿ : ರಾಜ್ಯಾದ್ಯಂತ ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ವಿವಿಧ ಸ್ಥಳಗಳಲ್ಲಿ 5 ಲಕ್ಷ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಗುರುವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಎಸ್.ರವಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಮಹಿಳೆಯರು ಮತ್ತು ಅಪ್ರಾಪ್ತ ಬಾಲಕಿಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳ ಬಗ್ಗೆ ಸರಕಾರ ಗಂಭೀರವಾಗಿ ಪರಿಗಣಿಸಿದ್ದು, ಇವುಗಳ ನಿಯಂತ್ರಣಕ್ಕೆ ಇನ್ನು ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಲಾಗುವುದು ಎಂದರು.
ಮಹಿಳೆಯರು ಕೆಲಸ ನಿರ್ವಹಿಸುವ ಸ್ಥಳಗಳಲ್ಲಿ ದೌರ್ಜನ್ಯ ನಡೆಯುವುದನ್ನು ತಡೆಯಲು ಸೇಫ್ಟಿ ಐಲ್ಯಾಂಡ್‍ಗಳನ್ನು ರಚಿಸಲಾಗಿದೆ. ಮಹಿಳೆಯರು ದೂರು ನೀಡಲು ಅನುಕೂಲವಾಗುವಂತೆ ಸಹಾಯವಾಣಿ ಸಂಖ್ಯೆ 1091 ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಕುರಿತು ದೂರು ನೀಡಲು ಸಹಾಯವಾಣಿ 1098 ಮೂಲಕ 24 ಗಂಟೆಗಳ ಕಾಲವೂ ಕಾರ್ಯನಿರ್ವಹಿಸಲಾಗುತ್ತಿದೆ ಎಂದು ಡಾ.ಜಿ.ಪರಮೇಶ್ವರ್ ಹೇಳಿದರು.
ನ್ಯಾಯಾಲಯಗಳಲ್ಲಿ ಈಗಾಗಲೇ ದಾಖಲಾಗಿರುವ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಮತ್ತು ಪೋಕ್ಸೋ ಪ್ರಕರಣಗಳ ವಿಚಾರಣೆ ಬೇಗ ಇತ್ಯರ್ಥವಾಗುವ ಕುರಿತಂತೆ ಹೆಚ್ಚು ಗಮನಹರಿಸಲಾಗುವುದು ಎಂದು ಡಾ.ಜಿ.ಪರಮೇಶ್ವರ್ ತಿಳಿಸಿದರು.