ಬಿಜೆಪಿಯೊಂದಿಗೆ ಸೇರಿ ಸದನದಲ್ಲಿ ಜಂಟಿ ಹೋರಾಟಕ್ಕೆ ಜೆಡಿಎಸ್ ನಿರ್ಧಾರ

Update: 2024-12-09 13:24 GMT

ಬೆಳಗಾವಿ : ಆಡಳಿತಾರೂಢ ಕಾಂಗ್ರೆಸ್ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷ ಬಿಜೆಪಿಯೊಂದಿಗೆ ಸೇರಿ ಜೆಡಿಎಸ್ ರಣತಂತ್ರ ರೂಪಿಸಿದ್ದು, ಬಾಣಂತಿಯರ ಸರಣಿ ಸಾವು ಪ್ರಕರಣ, ವಕ್ಫ್ ಆಸ್ತಿ ಗೊಂದಲ ಸೇರಿದಂತೆ ಅಭಿವೃದ್ಧಿ ವಿಚಾರದಲ್ಲಿ ನಿರ್ಲಕ್ಷ್ಯ ಸೇರಿದಂತೆ ಸರಕಾರದ ವೈಫಲ್ಯಗಳನ್ನು ಸದನದಲ್ಲಿ ಪ್ರಸ್ತಾಪಿಸಲು ನಿರ್ಧರಿಸಿದೆ.

ಸೋಮವಾರ ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅಧ್ಯಕ್ಷತೆಯಲ್ಲಿ ನಡೆದ ಜೆಡಿಎಸ್ ಶಾಸಕಾಂಗ ಸಭೆಯಲ್ಲಿ ಸರಕಾರವನ್ನು ಇಕ್ಕಟ್ಟಿನಲ್ಲಿ ಸಿಲುಕಿಸಲು ಸಮಾಲೋಚನೆ ನಡೆಸಿದ್ದು, ಉಭಯ ಸದನಗಳಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಸದನದಲ್ಲಿ ಆಸಕ್ತಿ ವಹಿಸಬೇಕು. ಜತೆಗೆ ಎಲ್ಲ ಸದಸ್ಯರು ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ತೀರ್ಮಾನ ಮಾಡಲಾಗಿದೆ.

ಜತೆಗೆ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಬಾಣಂತಿಯರ ಮತ್ತು ಹಸುಗೂಸುಗಳ ಸಾವಿನ ಪ್ರಕರಣ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಸದನದಲ್ಲಿ ಪ್ರಸ್ತಾಪಿಸಬೇಕು. ಬಳ್ಳಾರಿ, ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಬಾಣಂತಿಯರ ಮತ್ತು ಶಿಶುಗಳ ಸಾವು ಸೇರಿದಂತೆ ವಿವಿಧೆಡೆ ಆಸ್ಪತ್ರೆಗಳಲ್ಲಿನ ಸಾವಿನ ಪ್ರಕರಣದ ಮಾಹಿತಿಗಳನ್ನು ಕಲೆಹಾಕಿ ಮಾತನಾಡಬೇಕು. ಸೂಕ್ತ ತನಿಖೆಗೆ ಒತ್ತಾಯಿಸಿ ಹೋರಾಟ ನಡೆಸಲು ಒತ್ತಾಯಿಸಲು ಚರ್ಚಿಸಲಾಗಿದೆ ಎಂದು ಗೊತ್ತಾಗಿದೆ.

ಸಭೆಯ ಬಳಿಕ ಮಾತನಾಡಿದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್‍ಬಾಬು, ರಾಜ್ಯ ಸರಕಾರದ ವೈಫಲ್ಯವನ್ನು ವಿರೋಧಿಸಿ ಬಿಜೆಪಿ ಜತೆ ಸೇರಿ ಸದನದಲ್ಲಿ ಜಂಟಿ ಹೋರಾಟ ಮಾಡುತ್ತೇವೆ. ಆಡಳಿತ ಪಕ್ಷವು ಪ್ರತಿಪಕ್ಷಗಳ ಮೇಲೆ ಹಿಂದಿನ ಹಗರಣಗಳ ಬಗ್ಗೆ ವಿನಾಕಾರಣ ಪ್ರಕರಣ ದಾಖಲಿಸಲಾಗುತ್ತಿದೆ. ಸರಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಆಕ್ಷೇಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News