ಎಪಿಎಲ್, ಬಿಪಿಎಲ್ ಕಾರ್ಡ್‌ ಇದ್ದವರಿಗೆ ʼಗೃಹಲಕ್ಷ್ಮಿʼ ಹಣ ಬಂದೇ ಬರುತ್ತೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Update: 2024-11-20 14:06 GMT

ಬೆಳಗಾವಿ: ಗೃಹಲಕ್ಷ್ಮಿ ಯೋಜನೆ ವಿಚಾರವಾಗಿ ನಾನು ಸ್ಪಷ್ಟವಾಗಿ ಪ್ರತಿಕ್ರಿಯಿಸಿದ್ದೇನೆ. ಎಪಿಎಲ್ ಮತ್ತು ಬಿಪಿಎಲ್ ಪಡಿತರ ಚೀಟಿ ಹೊಂದಿದವರು, ಆದಾಯ ತೆರಿಗೆ ಪಾವತಿ ವ್ಯಾಪ್ತಿಗೆ ಬರದವರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯ ಆಗುತ್ತದೆ. ಈ ಬಗ್ಗೆ ಯಾರಿಗೂ ಅನುಮಾನ ಬೇಡ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ  ಹೆಬ್ಬಾಳ್ಕರ್ ತಿಳಿಸಿದರು.

ರಾಜ್ಯದಲ್ಲಿ ಬಿಪಿಎಲ್ ಕಾರ್ಡ್‍ಗಳನ್ನು ರದ್ದು ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬುಧವಾರ ನಗರದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, 80 ಸಾವಿರ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡುವ ಬದಲಿಗೆ ಎಪಿಎಲ್‍ಗೆ ಪರಿವರ್ತನೆ ಮಾಡಲಾಗಿದೆ. ಇದರಿಂದ ಯಾವುದೇ ಗೊಂದಲ ಇಲ್ಲ, ಎಪಿಎಲ್, ಬಿಪಿಎಲ್ ಇದ್ದವರಿಗೆ ಗೃಹಲಕ್ಷ್ಮೀ ಹಣ ಬಂದೇ ಬರುತ್ತೆ ಎಂದು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರ ಖರೀದಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಇಡೀ ದೇಶದಲ್ಲಿ ಈ ರೀತಿಯ ವ್ಯವಹಾರ ನಡೆಯುತ್ತಿದೆ. ಬಿಜೆಪಿಯವರು ನಿರಂತರವಾಗಿ ಇಂತಹ ಪ್ರಯತ್ನ ಮಾಡುತ್ತಿದ್ದಾರೆ. ಕಾಂಗ್ರೆಸ್ ಶಾಸಕರು ಗಟ್ಟಿಯಾಗಿದ್ದಾರೆ. ಸುಭದ್ರವಾಗಿರುವ ಸರಕಾರವನ್ನು ಯಾರು ಏನೂ ಮಾಡುವುದಕ್ಕೆ ಸಾಧ್ಯವಿಲ್ಲ. ಸಚಿವ ಸಂಪುಟ ಪುನರ್ರಚನೆ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಖಾತೆ ಬದಲಾವಣೆ ವಿಚಾರವು ಚರ್ಚೆಯಾಗಿಲ್ಲ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

ಡಿಸೆಂಬರ್ 9 ರಿಂದ 10 ದಿನಗಳ ಕಾಲ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಈ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗುವುದು. ಬೆಳಗಾವಿ ಜಿಲ್ಲೆಯ ವಿಭಜನೆ ಬಗ್ಗೆ ಅಧಿವೇಶನದಲ್ಲಿ ಚರ್ಚೆಗೆ ಬರಬಹುದು. ಈ ಕುರಿತು ಎಲ್ಲ ಶಾಸಕರ ಜತೆಗೆ ಒಂದು ಸುತ್ತು ಮಾತುಕತೆ ನಡೆಸಿದ್ದೇವೆ. ಅಧಿವೇಶನದಲ್ಲಿ ಚರ್ಚೆ ಮಾಡುತ್ತೇವೆ ಎಂದು ಅವರು ಹೇಳಿದರು.

ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವನ್ನಪ್ಪಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿರುವ (ಬೀಮ್ಸ್) ಅವ್ಯವಸ್ಥೆಗಳಿಗೆ ಸರ್ಜರಿ ಆಗಬೇಕಿದೆ. ತಪ್ಪಿತಸ್ಥರ ಮೇಲೆ ಕಠಿಣ ಕ್ರಮವಾಗಬೇಕು. ಶಿಸ್ತು, ಆರೋಗ್ಯದ ದೃಷ್ಟಿಯಿಂದ ಆಸ್ಪತ್ರೆಯಲ್ಲಿ ಕೆಲವೊಂದು ವ್ಯವಸ್ಥೆಗಳನ್ನು ಸರಿಪಡಿಸಬೇಕಿದೆ ಎಂದು ಹೇಳಿದರು.

ನಾವು ಕೇವಲ ಬಾಯಿ ಮಾತಿಗೆ ಹೇಳಬಾರದು. ಇದನ್ನು ಜಾರಿಗೆ ತರಬೇಕು. ಈ ಮೊದಲು ನಾನು ಆಸ್ಪತ್ರೆಗೆ ಭೇಟಿ ನೀಡಿದ್ದು, ಮತ್ತೊಮ್ಮೆ ಭೇಟಿ ನೀಡಿ ಪರಿಶೀಲನೆ ನಡೆಸುವೆ ಎಂದು ಅವರು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News