ʼಗ್ಯಾರಂಟಿʼಯಿಂದ ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆಯಾಗಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

Update: 2024-12-12 10:04 GMT

ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಕುಂಠಿತವಾಗಿಲ್ಲ, ರಾಜ್ಯದಲ್ಲಿ 2023-24ರಲ್ಲಿ ಅಭಿವೃದ್ಧಿ ವೆಚ್ಚಗಳಿಗಾಗಿ 2,14,292 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಕೆ.ಎ.ತಿಪ್ಪೇಸ್ವಾಮಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಅವರು ಉತ್ತರಿಸಿದರು.

ಸರಕಾರವು 5 ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಗೊಳಿಸಲು ಸದ್ರಿ ಯೋಜನೆಗಳಿಗೆ ಆಯವ್ಯಯದಲ್ಲಿ 52,009 ಕೋಟಿ ರೂ. ಗಳನ್ನು ಒದಗಿಸಿದೆ. ರಾಜ್ಯ ಸರಕಾರವು 2023-24 ರಲ್ಲಿ 90,280 ಕೋಟಿ ರೂ ಗಳನ್ನು ಸಾಲ ಪಡೆದಿದ್ದು, ರಾಜ್ಯದ ವಿತ್ತೀಯ ಕೊರತೆ ಶೇ.2.6 ಇದ್ದು, ರಾಜ್ಯ ಸರಕಾರವು ಪಡೆದ ಒಟ್ಟು ಸಾಲ ಕರ್ನಾಟಕ ಆರ್ಥಿಕ ಹೊಣೆಗಾರಿಕೆ ಅಧಿನಿಯಮದ ಮಾನದಂಡ ಮತ್ತು ಕೇಂದ್ರ ಸರ್ಕಾರ ನಿಗಧಿಪಡಿಸಿರುವ ಸಾಲಮಿತಿಗೆ ಒಳಪಟ್ಟಿದೆ ಎಂದರು.

ರಾಜ್ಯ ಸರಕಾರವು ರಾಜಸ್ವ ಹಾಗು ಬಂಡವಾಳ ಸ್ವೀಕೃತಿಗಳಿಂದ ಮತ್ತು ಕೇಂದ್ರ ಸರಕಾರ ನಿಗದಿಪಡಿಸುವ ಮಿತಿಯೊಳಗೆ ಸಾಲವನ್ನು ಪಡೆಯುವ ಮೂಲಕ ಆಯವ್ಯಯದಲ್ಲಿ ಅಂದಾಜಿಸಿರುವ ವೆಚ್ಚವನ್ನು ಭರಿಸುತ್ತದೆ. ಈ ಸ್ವೀಕೃತಿಗಳನ್ನು ಮೀರಿ ಈವರೆಗೂ ಯಾವುದೇ ವೆಚ್ಚದ ಹೊರೆ ರಾಜ್ಯ ಸರಕಾರಕ್ಕೆ ಉಂಟಾಗಿರುವುದಿಲ್ಲ ಎಂದರು.

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ ಎಂಬ ವಿರೋಧ ಪಕ್ಷಗಳ ಆರೋಪ ಸುಳ್ಳು ಹಾಗೂ ಸತ್ಯಕ್ಕೆ ದೂರವಾಗಿದ್ದು ಈ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಸ್ಪಷ್ಟಪಡಿಸಿದರು.

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News