ಕಾಂಗ್ರೆಸ್‌ ಸರ್ಕಾರ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ : ಲಕ್ಷ್ಮಿ ಹೆಬ್ಬಾಳ್ಕರ್

Update: 2025-03-24 21:49 IST
ಕಾಂಗ್ರೆಸ್‌ ಸರ್ಕಾರ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ : ಲಕ್ಷ್ಮಿ ಹೆಬ್ಬಾಳ್ಕರ್
  • whatsapp icon

ಬೆಳಗಾವಿ : ಮಹಿಳೆಯರ ಸಬಲೀಕರಣಕ್ಕಾಗಿಯೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಮುಂದಿನ ವರ್ಷದ ಮಾರ್ಚ್ ತಿಂಗಳಲ್ಲಿ ಪ್ರತಿಯೊಂದು ಜಿಲ್ಲೆಯಲ್ಲೂ ಸಾಮೂಹಿಕ ಸೀಮಂತ ಕಾರ್ಯಕ್ರಮ ಆಯೋಜಿಸಲು ಸರಕಾರದಿಂದ ಆದೇಶ ಹೊರಡಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಕಟಿಸಿದರು.

ಸೋಮವಾರ ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಂತರ್‍ರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಸಿಪಿಎಡ್ ಮೈದಾನದಲ್ಲಿ ಆಯೋಜಿಸಲಾಗಿದ್ದ 3000 ಮಹಿಳೆಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಗರ್ಭಿಣಿಯರಿಗೆ ಸೀಮಂತ ಮಾಡುವುದೆಂದರೆ ಅದು ನಮ್ಮ ಭಾರತೀಯ ಸಂಸ್ಕೃತಿಯ ಭಾಗವಾಗಿದೆ. ಭಾರತೀಯ ಸಂಸ್ಕೃತಿ ಮಹಿಳೆಗೆ ಅತ್ಯಂತ ಉನ್ನತ ಸ್ಥಾನವನ್ನು ಕೊಟ್ಟಿದೆ. ಮಾತೃತ್ವ ಎನ್ನುವುದು ಅತ್ಯಂತ ಶ್ರೇಷ್ಠವಾದ ಮೌಲ್ಯ. ಹಿಂದಿನಿಂದಲೂ ಮಾತೃದೇವೋಭವ ಎನ್ನುತ್ತೇವೆ, ಜನನಿ ತಾನೆ ಮೊದಲ ಗುರುವು ಎನ್ನುತ್ತೇವೆ. ಅದು ಸೀಮಂತ ದಿಂದ ಆರಂಭವಾಗಿ ಮಗು ಬೆಳವಣಿಗೆ ಹೊಂದಿದಂತೆ ಮುಂದುವರಿಯುತ್ತ ಹೋಗುತ್ತದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

ಒಂದು ಮಗುವಿನ ಬೆಳವಣಿಗೆ ಎಂದರೆ ಅದು ಸಮಾಜದ ಬೆಳವಣಿಗೆ, ದೇಶದ ಬೆಳವಣಿಗೆ, ಮಗುವನ್ನು ಸಮಾಜದ ಆಸ್ತಿಯಾಗಿ ಬೆಳೆಸಲು ಈ ಸಂಸ್ಕಾರಗಳು ಅತ್ಯಂತ ಅಗತ್ಯ. ಮಗು ನಾಳೆಯ ಉತ್ತಮ ಪ್ರಜೆಯಾಗಬೇಕು, ಸಮಾಜಕ್ಕೆ ಆಸ್ತಿಯಾಗಬೇಕು ಎಂದು ಅವರು ಕರೆ ನೀಡಿದರು.

ಅಂಗನವಾಡಿಗೆ ಹೈಟೆಕ್ ಸ್ಪರ್ಶ: ನಾನು ಮಂತ್ರಿಯಾದ ಬಳಿಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಹೊಸರೂಪ ಕೊಡುತ್ತಿದ್ದೇನೆ. ಅಂಗನವಾಡಿ ಇಲಾಖೆಗೆ ಹೈಟೆಕ್ ಸ್ಪರ್ಶ ಕೊಟ್ಟಿದ್ದು, ಸರಕಾರಿ ಮಾಂಟೆಸರಿ ತರಗತಿಗಳನ್ನು ಆರಂಭಿಸಲಾಗಿದೆ. ಇದೀಗ ಇಲಾಖೆ ವತಿಯಿಂದ ಸಾಮೂಹಿಕ ಸೀಮಂತ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

100 ವಿಕಲ ಚೇತನರಿಗೆ ವೀಲ್‍ಚೇರ್: ಬೆಳಗಾವಿ ಗ್ರಾಮೀಣ ಕ್ಷೇತ್ರದ 100 ಮಂದಿ ವಿಕಲ ಚೇತನರಿಗೆ ಬ್ಯಾಟರಿ ಚಾಲಿತ ವೀಲ್‍ಚೇರ್, ಬ್ರೈಲ್ ವಾಚ್, ಲ್ಯಾಪ್‍ಟಾಪ್‍ಗಳನ್ನು ನೀಡಲಾಗಿದೆ. ಇಲ್ಲಿ ಆಗಮಿಸಿರುವ ವಿಕಲ ಚೇತನರಿಗೂ, ಹಿರಿಯ ನಾಗರಿಕರಿಗೂ ಉತ್ತಮ ಆರೋಗ್ಯ, ನೆಮ್ಮದಿಯನ್ನು ಹಾರೈಸುತ್ತೇನೆ. ಹಿರಿಯ ನಾಗರಿಕರ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಅವರ ವರ್ಷಪೂರ್ತಿ ಉತ್ತಮ ಕೆಲಸಗಳು ನಡೆದಿವೆ. ಹೀಗೆಯೇ ಉತ್ತಮ ಕೆಲಸಗಳು ಮುಂದುವರಿಯಲಿ ಎಂದು ಅವರು ತಿಳಿಸಿದರು.

ಮಳಿಗೆಗಳಿಗೆ ಚಾಲನೆ: ಸಮಾರಂಭಕ್ಕೂ ಮುನ್ನ ಸ್ತ್ರೀಶಕ್ತಿ ಗುಂಪುಗಳನ್ನು ಉತ್ತೇಜಿಸಲು ವಿಭಾಗೀಯ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಉದ್ಘಾಟಿಸಿದರು.

ಬೆಳಗಾವಿ, ಹಾವೇರಿ, ಬಾಗಲಕೋಟೆ, ವಿಜಯಪುರ, ಕಾರವಾರ, ಗದಗ ಹಾಗೂ ಧಾರವಾಡ ಹೀಗೆ 7 ಜಿಲ್ಲೆಗಳ ಸ್ತ್ರೀಶಕ್ತಿ ಗುಂಪುಗಳ ಸದಸ್ಯರು ಮತ್ತು ಜಿಲ್ಲಾ ಪಂಚಾಯತ್ ಎನ್.ಆರ್.ಎಲ್.ಎಮ್ ಅಡಿ ಸ್ತ್ರೀ ಶಕ್ತಿ ಗುಂಪುಗಳು ಪಾಲ್ಗೊಂಡು ಸದರಿ ಮಳಿಗೆಗಳಲ್ಲಿ ವಿವಿಧ ಕರಕುಶಲ ವಸ್ತುಗಳ ಪ್ರದರ್ಶನ, ಬಟ್ಟೆ ವ್ಯಾಪಾರ, ತಿಂಡಿ-ತಿನಿಸುಗಳ ವ್ಯಾಪಾರ, ಲಂಬಾಣಿ ಉಡುಪು, ಬಿದಿರಿನಿಂದ ತಯಾರಿಸಿದ ವಸ್ತುಗಳು, ವಿವಿಧ ರೀತಿಯ ಬ್ಯಾಗ್ ಗಳು ಇತ್ಯಾದಿ ವಸ್ತುಗಳನ್ನು ಪ್ರದರ್ಶಿಸಲು ಹಾಗೂ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿತ್ತು.

ಸಮಾರಂಭದಲ್ಲಿ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಜಿ.ಪಂ.ಸಿಇಒ ರಾಹುಲ್ ಶಿಂಧೆ, ಸಚಿವರ ಮಾಧ್ಯಮ ಸಲಹೆಗಾರ ಎಂ.ಕೆ.ಹೆಗಡೆ, ಇಲಾಖೆಯ ಉಪ ನಿರ್ದೇಶಕ ನಾಗರಾಜ್.ಆರ್, ದಲಿತ ಮುಖಂಡ ಮಲ್ಲೇಶ ಚೌಗಲೆ, ಜಯಶ್ರೀ ಮಾಳಗಿ, ಯುವರಾಜ ಕದಂ ಸೇರಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News