ಬೆಳಗಾವಿ-ಚಿಕ್ಕೋಡಿ ಎರಡೂ ಲೋಕಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ಗೆ ಗೆಲ್ಲುವ ವಾತಾವರಣವಿದೆ : ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ: ಬೆಳಗಾವಿ ಮತ್ತು ಚಿಕ್ಕೋಡಿ ಎರಡೂ ಕ್ಷೇತ್ರಗಳನ್ನು ಗೆಲ್ಲಿಸುವ ಸಂದೇಶ ನಮಗೆ ಬಂದಿದ್ದು, ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆ ಉತ್ತಮ ವಾತಾವರಣವಿದೆ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಮಂಗಳವಾರ ನಗರದ ಗಾಂಧಿಭವನದಲ್ಲಿ ಆಯೋಜಿಸಲಾಗಿದ್ದ ಬೆಳಗಾವಿ ಉತ್ತರ ಜಿಲ್ಲಾ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಬೆಳಗಾವಿ ಮತ್ತು ಚಿಕ್ಕೋಡಿಯಲ್ಲಿ ಆಂತರಿಕ ಸಮೀಕ್ಷೆ ನಡೆಸಿದೆ. ಎರಡೂ ಕಡೆ ಹೆಚ್ಚಿನ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುವ ಭರವಸೆ ಮೂಡಿದೆ ಎಂದರು.
ಕಳೆದ 50 ವರ್ಷಗಳಲ್ಲಿ ಅನೇಕ ಅಭಿವೃದ್ಧಿ ಮಾಡಿದ್ದೇವೆ. ಜನರ ಜೀವನ ಮಟ್ಟ ಎತ್ತರಿಸಿದ್ದೇವೆ. ಈಗ ನಮ್ಮ ಸರಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಲಾಭದ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು. 10 ವರ್ಷಗಳ ಮೋದಿ ಸರಕಾರದ ವೈಫಲ್ಯಗಳನ್ನು ಜನರಿಗೆ ತಿಳಿಸಬೇಕು ಎಂದು ಸತೀಶ್ ಜಾರಕಿಹೊಳಿ ಕರೆ ನೀಡಿದರು.
ಬಿಜೆಪಿಯವರು ಬುಲೆಟ್ ರೈಲು, ರೈತರ ಆದಾಯ ದ್ವಿಗುಣ, ಪ್ರತಿಯೊಬ್ಬರಿಗೆ 15 ಲಕ್ಷ ರೂ., ಸ್ವಿಸ್ ಬ್ಯಾಂಕ್ ನಿಂದ ಹಣ ವಾಪಸ್ಸು ತರುವುದು ಸೇರಿ ಅನೇಕ ಭರವಸೆ ಕೊಟ್ಟಿದ್ದರು. ಆದರೆ, ಏನೂ ಮಾಡಿಲ್ಲ. ಮಹಿಳೆಯರು, ಬಡವರು, ಎಸ್ಸಿ, ಎಸ್ಟಿಗಳಿಗೆ ಏನು ಮಾಡಿದ್ದಾರೆ? ಪುಷ್ಪಕ ವಿಮಾನ ಕಥೆ ಅಷ್ಟೇ ಹೇಳಿದ್ದಾರೆ ಎಂದು ಅವರು ಟೀಕಿಸಿದರು.
ಜಲಾಶಯ, ಇಸ್ರೋ, ವಿಶ್ವವಿದ್ಯಾಲಯ, ಐಐಟಿ ಸೇರಿ ಅನೇಕ ಸಂಸ್ಥೆಗಳನ್ನು ಕಟ್ಟಿದ್ದು ಕಾಂಗ್ರೆಸ್. ಇದರಿಂದಾಗಿಯೆ ಇಂದು ಭಾರತ ವಿಶ್ವಗುರು ಆಗಿದೆ. ಮೃಣಾಲ್ ಭವಿಷ್ಯದ ನಾಯಕ. ಮುಂದೆ ಪಕ್ಷ ಮತ್ತು ಜಿಲ್ಲೆಗೆ ದೊಡ್ಡ ಆಸ್ತಿಯಾಗಲಿದ್ದಾರೆ. ಅವರನ್ನು ಎಲ್ಲರೂ ಬೆಂಬಲಿಸಬೇಕು ಎಂದು ಸತೀಶ್ ಜಾರಕಿಹೊಳಿ ಕರೆ ನೀಡಿದರು.
ಮೃಣಾಲ್ ಮತ್ತು ಪ್ರಿಯಾಂಕಾ ಇಬ್ಬರೂ ತಮ್ಮ ಭವಿಷ್ಯವನ್ನು ತ್ಯಾಗ ಮಾಡಿ ಲೋಕಸಭೆಗೆ ಸ್ಪರ್ಧಿಸುತ್ತಿದ್ದಾರೆ. ಅವರಿಗೆ ಸಂಸದರಾಗುವ ಅವಶ್ಯಕತೆ ಇರಲಿಲ್ಲ. ವಿದೇಶದಲ್ಲಿ ಉನ್ನತ ಹುದ್ದೆಯಲ್ಲಿ ಆರಾಮವಾಗಿ ಇರಬಹುದಿತ್ತು. ಆದರೆ, ನಮ್ಮ ಒತ್ತಾಯಕ್ಕೆ ಜನರ ಸೇವೆ ಮಾಡಲು ಚುನಾವಣೆ ಕಣಕ್ಕೆ ಧುಮುಕಿದ್ದಾರೆ ಎಂದು ಅವರು ಹೇಳಿದರು.
ಒಂದಿಷ್ಟು ಜನರು ಇವರು ಸಣ್ಣವರು ಎನ್ನುತ್ತಿದ್ದಾರೆ. ಈಗ ಸಣ್ಣವರೆ ಮುಂದೆ ದೊಡ್ಡವರಾಗುತ್ತಾರೆ. ರಾಜಕೀಯ ಹೊಸದಾಗಿ ಇರಬಹುದು. ಆದರೆ, ನಾಲ್ಕೈದು ವರ್ಷಗಳಿಂದ ಸಮಾಜಸೇವೆ ಮಾಡುತ್ತಿದ್ದಾರೆ. ಕೊರೋನ, ಪ್ರವಾಹ ಸಂದರ್ಭದಲ್ಲಿ ಜನರ ಪರವಾಗಿ ಕೆಲಸ ಮಾಡಿದ್ದಾರೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.
ದೇಶದಲ್ಲಿ ವಿರೋಧ ಪಕ್ಷವನ್ನು ಸಂಪೂರ್ಣವಾಗಿ ನಾಶ ಮಾಡುವ ಹುನ್ನಾರ ನಡೆದಿದೆ. ಜನ ಮನಸ್ಸು ಮಾಡಿದರೆ ಯಾವ ಬದಲಾವಣೆ ಬೇಕಾದರೂ ಆಗುತ್ತದೆ. ಮೃಣಾಲ್, ಪ್ರಿಯಾಂಕಾ ಸಂಸದರಾಗುವುದರಲ್ಲಿ ಸಂಶಯವೇ ಇಲ್ಲ. ಚಿಕ್ಕ ವಯಸ್ಸಿನ ಸಂಸದರನ್ನು ಸಂಸತ್ತಿಗೆ ಕಳಿಸಿ ಕೊಟ್ಟ ಶ್ರೇಯ ಬೆಳಗಾವಿ ಮತ್ತು ಚಿಕ್ಕೋಡಿಗೆ ಸಲ್ಲಲಿದೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿ, ಬೆಳಗಾವಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸ್ಥಳೀಯ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಗೆ ಆಶೀರ್ವಾದ ಮಾಡಿ. ಸತೀಶ್ ಜಾರಕಿಹೊಳಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಜಿಲ್ಲೆಯ ಎಲ್ಲ ನಾಯಕರ ಆಶೀರ್ವಾದದಿಂದ ನನ್ನ ಪುತ್ರನಿಗೆ ಟಿಕೆಟ್ ಸಿಕ್ಕಿದೆ. ಬೆಳಗಾವಿ ಮತ್ತು ಚಿಕ್ಕೋಡಿ ಕ್ಷೇತ್ರಗಳನ್ನು ಖಂಡಿತವಾಗಲೂ ಕಾಂಗ್ರೆಸ್ ತೆಕ್ಕೆಗೆ ತೆಗೆದುಕೊಳ್ಳುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಮಾತನಾಡಿ, ಯುವಕರೆ ಈ ದೇಶದ ಆಸ್ತಿ, ಭವಿಷ್ಯ ಎಂದು ಬೆಳಗಾವಿಯಲ್ಲಿ ನನಗೆ ಮತ್ತು ಚಿಕ್ಕೋಡಿಯಲ್ಲಿ ಸಹೋದರಿ ಪ್ರಿಯಾಂಕಾಗೆ ಪಕ್ಷದ ವರಿಷ್ಠರು ಅವಕಾಶ ಮಾಡಿಕೊಟ್ಟಿದ್ದಾರೆ. ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಮನೆ ಮನೆಗೆ ನಮ್ಮ ಕಾಂಗ್ರೆಸ್ ಸರಕಾರ ತಲುಪಿಸಿದೆ. ಇದರಿಂದ ಜನ ತುಂಬಾ ಖುಷಿಯಲ್ಲಿದ್ದಾರೆ. ನನಗೊಂದು ಸುವರ್ಣಾವಕಾಶ ಸಿಕ್ಕಿದ್ದು, ದಯವಿಟ್ಟು ನನಗೆ ನೀವು ಆಶೀರ್ವಾದ ಮಾಡಬೇಕು ಎಂದು ಕೇಳಿಕೊಂಡರು.
ಸಭೆಯಲ್ಲಿ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಬೆಳಗಾವಿ ಉತ್ತರ ಶಾಸಕ ಆಸೀಫ್(ರಾಜು)ಸೇಠ್, ಮಾಜಿ ಸಚಿವರಾದ ಎ.ಬಿ.ಪಾಟೀಲ್, ಶಶಿಕಾಂತ್ ನಾಯಕ, ಮಾಜಿ ಶಾಸಕ ಕಾಕಾಸಾಹೇಬ್ ಪಾಟೀಲ್, ಬೆಳಗಾವಿ ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಚಿಕ್ಕೋಡಿ ಜಿಲ್ಲಾಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಬಾರ್ ಅಸೊಸಿಯೇಷನ್ ಅಧ್ಯಕ್ಷ ಎಸ್.ಎಸ್.ಕಿವಡಸಣ್ಣವರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.