ʼಗೃಹಲಕ್ಷ್ಮಿʼ ಯೋಜನೆ ನಿಲ್ಲಿಸುವ ಮಾತೇ ಇಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಳಗಾವಿ : ಮಹಿಳೆಯರು ಆರ್ಥಿಕ ಹಾಗೂ ಸಾಮಾಜಿಕವಾಗಿ ಸಬಲರನ್ನಾಗಿಸುವ ಗೃಹಲಕ್ಷ್ಮಿ ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವ ಮಾತೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಬುಧವಾರ ಇಲ್ಲಿನ ಸುವರ್ಣ ವಿಧಾನಸೌಧಕ್ಕೆ ಆಗಮಿಸಿದ್ದ ಗೃಹಲಕ್ಷ್ಮಿಯರ ಜೊತೆ ಸಂವಾದದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯ ಹಣದಿಂದ ನಾನಾ ಬದುಕಿನ ಅವಕಾಶಗಳನ್ನು ಸೃಷ್ಟಿಸಿಕೊಂಡ 25ಕ್ಕೂ ಹೆಚ್ಚು ಮಂದಿ ಫಲಾನುಭವಿಗಳನ್ನು ಭೇಟಿ ಮಾಡಿ ಸಂವಾದ ನಡೆಸಿದ್ದೇನೆ. ಗೃಹಲಕ್ಷ್ಮಿ ಯೋಜನೆಯಿಂದ ಫಲಾನುಭವಿಗಳ ಜೀವನದಲ್ಲಿ ಆಗಿರುವ ಲಾಭಗಳ ಬಗ್ಗೆ ವಿವರಿಸಿದ್ದಾರೆ ಎಂದರು.
ಗೃಹಲಕ್ಷ್ಮಿ ಯೋಜನೆಯಿಂದ ಒಂದೇ ಮನೆಯ ಅತ್ತೆ-ಸೊಸೆಯ ಮಧ್ಯೆ ಜಗಳ ತಂದಿದೆ ಎಂದು ಬಿಜೆಪಿಯವರು ಆರೋಪಿಸಿದ್ದರು. ಆದರೆ ಇಂದಿನ ಕಾರ್ಯಕ್ರಮಕ್ಕೆ ಅತ್ತೆ-ಸೊಸೆಯರೇ ಜೊತೆ-ಜೊತೆಯಾಗಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಯೋಜನೆಯಿಂದ ತಮಗಾಗಿರುವ ಲಾಭದ ಬಗ್ಗೆ ಮಾತನಾಡಿದ್ದಾರೆ. ಈ ಯೋಜನೆಯಿಂದ ಮಹಿಳೆಯರು ಆರ್ಥಿಕ, ಸಾಮಾಜಿಕವಾಗಿ ಸಬಲರಾಗುತ್ತಿರುವುದು ಸಂತೋಷದ ವಿಚಾರ. ಆದ್ದರಿಂದ ಮಹಿಳೆಯರನ್ನು ಸಶಕ್ತಗೊಳಿಸುವ ಈ ಯೋಜನೆಯನ್ನು ಮುಂದುವರಿಸಲಿದ್ದೇವೆ ಎಂದು ಅವರು ತಿಳಿಸಿದರು.