ಬೆಳಗಾವಿ ಅಧಿವೇಶನ | ‘ಗ್ಯಾರಂಟಿ ಯೋಜನೆ’ ಅನುಷ್ಠಾನದಿಂದ ಅಭಿವೃದ್ಧಿಗೆ ಅನುದಾನದ ಕೊರತೆಯಾಗಿಲ್ಲ : ಸಿದ್ದರಾಮಯ್ಯ ಸ್ಪಷ್ಟನೆ

Update: 2024-12-19 07:50 GMT

ಬೆಳಗಾವಿ : ಐದು ಗ್ಯಾರಂಟಿ ಯೋಜನೆಗಳಿಗೆ ಆಯವ್ಯಯದಲ್ಲಿಯೇ ಸೂಕ್ತ ಅನುದಾನವನ್ನು ಕಲ್ಪಿಸಲಾಗಿದೆ. ಅಲ್ಲದೆ, ರಾಜ್ಯದ ಅಭಿವೃದ್ದಿಗೆ ಎಲ್ಲ ಕ್ಷೇತ್ರಗಳಿಗೂ ಅಗತ್ಯ ಅನುದಾನವನ್ನು ಬಜೆಟ್‍ನಲ್ಲಿ ಒದಗಿಸಿರುತ್ತದೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಕ್ಷೇತ್ರಗಳ ಅಭಿವೃದ್ಧಿಗೆ ಯಾವುದೇ ಅನುದಾನದ ಕೊರತೆಯಾಗಿರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ.

ಗುರುವಾರ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಕೇಳಿದ ಪ್ರಶ್ನೆಗೆ ಉತ್ತರ ನೀಡಿರುವ ಅವರು, ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಿಸಲು ಸರಕಾರವು ಯಾವುದೇ ನಿರ್ಧಾರ ತೆಗೆದುಕೊಂಡಿರುವುದಿಲ್ಲ. ಗ್ಯಾರಂಟಿ ಯೋಜನೆಗಳು ಅಸ್ತಿತ್ವಕ್ಕೆ ಬಂದಾಗಿನಿಂದ 2024ರ ನವೆಂಬರ್ ಅಂತ್ಯದ ವರೆಗೆ ಗೃಹಲಕ್ಷ್ಮಿ ಯೋಜನೆಗೆ 32,817ಕೋಟಿ ರೂ., ಅನ್ನಭಾಗ್ಯ ಯೋಜನೆಗೆ 8,931 ಕೋಟಿ ರೂ., ಗೃಹಜ್ಯೋತಿಗೆ 14,869 ಕೋಟಿ ರೂ., ‘ಶಕ್ತಿ ಯೋಜನೆ’ಗೆ 6,543 ಕೋಟಿ ರೂ., ಯುವನಿಧಿ ಯೋಜನೆಗೆ 221.3 ಕೋಟಿ ರೂ.ವೆಚ್ಚವಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾಮಟ್ಟದಲ್ಲಿ 30 ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಚಿಸಿ ಆದೇಶಿಸಲಾಗಿದೆ. ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಹಾಗೂ ಅವರ ಆಪ್ತ ಸಿಬ್ಬಂದಿ ಮತ್ತು ಪ್ರಾಧಿಕಾರದ ಸದಸ್ಯರುಗಳ ವೇತನ ಹಾಗೂ ಇತರೆ ಸವಲತ್ತುಗಳನ್ನು ನಿಗದಿಪಡಿಸಲಾಗಿದೆ. ಅದೇ ರೀತಿ ಜಿಲ್ಲಾ ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ, ಉಪಾಧ್ಯಕ್ಷರು ಮತ್ತು ಸದಸ್ಯರು ಹಾಗೂ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಬಿಬಿಎಂಪಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಮತ್ತು ಸದಸ್ಯರುಗಳಿಗೆ ಗೌರವಧನ ಸಭಾಭತ್ಯೆ ನಿಗದಿಪಡಿಸಿ ಆದೇಶಿಸಲಾಗಿದೆ ಎಂದು ಅವರು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News