ಸಂತ್ರಸ್ತ ಮಹಿಳೆಗೆ ಎರಡು ಎಕರೆ ಜಮೀನು ಮಂಜೂರು: ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ: ತಾಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೌರ್ಜನ್ಯಕ್ಕೆ ಒಳಗಾಗಿರುವ ಮಹಿಳೆಗೆ ಸರಕಾರವು 2.03 ಎಕರೆ ಜಮೀನು ಮಂಜೂರು ಮಾಡಿ ಆದೇಶಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ತಿಳಿಸಿದ್ದಾರೆ.
ದೌರ್ಜನ್ಯಕ್ಕೆ ಒಳಗಾಗಿರುವ ಕಾಕತಿ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸ ವಂಟಮೂರಿ ಗ್ರಾಮದ ಸಂತ್ರಸ್ತ ಮಹಿಳೆಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಭೂ ಒಡೆತನ ಯೋಜನೆಯಡಿ ಜಮೀನು ಮಂಜೂರು ಮಾಡಿ ಆದೇಶಿಸಲಾಗಿರುತ್ತದೆ.
ಪರಿಶಿಷ್ಟ ವರ್ಗಗಳ ಕಲ್ಯಾಣ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಚಿವರಾದ ಬಿ.ನಾಗೇಂದ್ರ ಅವರು ವಿಶೇಷ ಪ್ರಕರಣವೆಂದು ಪರಿಗಣಿಸಿ ತಕ್ಷಣವೇ ಜಮೀನು ಮಂಜೂರಾತಿಗೆ ನಿರ್ದೇಶನ ನೀಡಿದ್ದರು.
ಈ ಹಿನ್ನೆಲೆಯಲ್ಲಿ ನೊಂದ ಮಹಿಳೆಗೆ ಆರ್ಥಿಕ ಸ್ಥಿರತೆ ಒದಗಿಸುವ ದೃಷ್ಟಿಯಿಂದ ವಿಶೇಷ ಪ್ರಕರಣವೆಂದು ಪರಿಗಣಿಸಿ ಜಮೀನು ಮಂಜೂರು ಮಾಡಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಅನುಮೋದನೆ ನೀಡಿರುತ್ತದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
2.03 ಎಕರೆ ಜಮೀನು ಮಂಜೂರಾತಿ ಜತೆಗೆ ಸರಕಾರವು ಈಗಾಗಲೇ ಐದು ಲಕ್ಷ ರೂ. ಪರಿಹಾರವನ್ನು ಕೂಡ ಘೋಷಿಸಿರುತ್ತದೆ.