ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ: 2 ಲಕ್ಷ ರೂ. ಪರಿಹಾರ ಘೋಷಿಸಿದ ಸರಕಾರ
ಬೆಂಗಳೂರು: ರಿಂಗರ್ ಲ್ಯಾಕ್ಟೇಟ್ ದ್ರಾವಣ ಪೂರೈಸಿರುವ ಪಶ್ಚಿಮ್ ಬಂಗಾ ಕಂಪೆನಿಯನ್ನು ಕಪ್ಪು ಪಟ್ಟಿಗೆ ಸೇರಿಸಿ, ಕಂಪೆನಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಶನಿವಾರ ವಿಧಾನಸೌಧದಲ್ಲಿ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಇತ್ತೀಚೆಗೆ ಸಂಭವಿಸಿದ ಬಾಣಂತಿಯರ ಸಾವಿನ ಕುರಿತಾಗಿ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಸರಕಾರದಿಂದ 2 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಡ್ರಗ್ ಪೂರೈಸಿದ ಕಂಪೆನಿಯಿಂದಲೂ ಪರಿಹಾರವನ್ನು ವಸೂಲು ಮಾಡಿ, ಮೃತರ ಕುಟುಂಬಕ್ಕೆ ನೀಡಲು ಸೂಚನೆ ನೀಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.
ನವೆಂಬರ್ 11ರಿಂದ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ನಾಲ್ವರು ಬಾಣಂತಿಯರ ಸಾವಿನ ಪ್ರಕರಣ ವರದಿಯಾಗಿದೆ. ಹಿಮೋಡಯಾಲಿಸಿಸ್ ಮತ್ತು ಬಹು ಅಂಗಗಳ ವೈಫಲ್ಯ ಹಾಗೂ ತೀವ್ರತರ ಮೂತ್ರಪಿಂಡದ ಗಾಯದಂತಹ ತೊಂದರೆಗಳ 7 ಪ್ರಕರಣಗಳಲ್ಲಿ, 4 ಬಾಣಂತಿಯರು ಸಾವಿಗೀಡಾಗಿದ್ದಾರೆ. ಉಳಿದ 3 ರೋಗಿಗಳಲ್ಲಿ 2 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಿವರಿಸಿದರು.
ಬಾಣಂತಿಯರ ಸಾವಿನ ಕುರಿತು ತಜ್ಞರ ಸಮಿತಿ ರಚಿಸಿ ಘಟನಾವಳಿಗಳ ಬಗ್ಗೆ ಪ್ರಾಥಮಿಕ ವರದಿ ಪಡೆಯಲಾಗಿದೆ. ಬಾಣಂತಿಯರಿಗೆ ನೀಡಲಾಗಿರುವ ರಿಂಗರ್ ಲ್ಯಾಕ್ಟೇಟ್ ದ್ರಾವಣದ ಎಲ್ಲಾ ಬ್ಯಾಚ್‍ಗಳ ಬಳಕೆಯನ್ನು ಹಿಂಪಡೆಯಲಾಗಿದ್ದು, ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಳಸಲಾದ ದ್ರಾವಣ ಪರೀಕ್ಷಿಸಲು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.
ತಮಿಳುನಾಡು ಮಾದರಿಯಲ್ಲಿ ಔಷಧಿಗಳ ಖರೀದಿ ಪ್ರಕ್ರಿಯೆ ಹಾಗೂ ಔಷಧ ನಿಯಂತ್ರಣ ಇಲಾಖೆಯನ್ನು ಪುನಾರಚನೆ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಇನ್ನು ಮುಂದೆ ಈ ರೀತಿಯ ದುರ್ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ. ಪ್ರಯೋಗಾಲಯದ ವರದಿ ಬಂದ ಬಳಿಕ ಘಟನೆಗೆ ಜವಾಬ್ದಾರರಾದ ಪ್ರತಿಯೊಬ್ಬರನ್ನು ಗುರುತಿಸಿ ಕ್ರಮ ಕೈಗೊಳ್ಳಬೇಕು. ಡ್ರಗ್ ಕಂಟ್ರೋಲರ್ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಔಷಧ ನಿಯಂತ್ರಣ ಕಾಯ್ದೆಯನ್ನು ಇನ್ನಷ್ಟು ಬಿಗಿಗೊಳಿಸುವ ಕುರಿತು ಕೇಂದ್ರ ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲು ನಿರ್ಧಾರಿಸಲಾಗಿದೆ. ಮೆಡಿಸಿನ್ ಮಾಫಿಯಾ ನಿಯಂತ್ರಣಕ್ಕೆ ಅತ್ಯಂತ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕಾದ ಅನಿವಾರ್ಯತೆ ಬಗ್ಗೆ ಚರ್ಚಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ವೈದ್ಯಕೀಯ ಶಿಕ್ಷಣ ಇಲಾಖೆಯ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಝಮೀರ್ ಅಹ್ಮದ್ ಖಾನ್, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ವರದಿಗೆ ತಜ್ಞರ ಸಮಿತಿ ರಚನೆ..!
ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಸಂಭವಿಸಿರುವ ಬಾಣಂತಿಯರ ಸಾವಿನ ಪ್ರಕರಣಗಳ ಬಗ್ಗೆ ತನಿಖೆ ನಡೆಸಲು ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಉನ್ನತ ತಜ್ಞರ ಸಮಿತಿ ರಚಿಸಿ ಒಂದು ವಾರದಲ್ಲಿ ವರದಿ ತರಿಸಿಕೊಳ್ಳಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕರ್ತವ್ಯಲೋಪಕ್ಕೆ ಡ್ರಗ್ ಕಂಟ್ರೋಲರ್ ಅಮಾನತು..!
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರ್ತವ್ಯಲೋಪ ಎಸಗಿದ ಕಾರಣಕ್ಕಾಗಿ ಡ್ರಗ್ ಕಂಟ್ರೋಲರ್ ಉಮೇಶ್ ಅವರನ್ನು ಅಮಾನತು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.