ಸಿದ್ದರಾಮಯ್ಯ ಜೈಲಿಗೆ ಹೋಗುವ ಕಾಲ ದೂರವಿಲ್ಲ : ಬಿ.ಎಸ್.ಯಡಿಯೂರಪ್ಪ

Update: 2024-11-16 13:34 GMT

ಬಿ.ಎಸ್.ಯಡಿಯೂರಪ್ಪ(PTI)

ಸಂಡೂರು : ʼಮುಖ್ಯಮಂತ್ರಿ ಸಿದ್ದರಾಮಯ್ಯನವರು ಜೈಲಿಗೆ ಹೋಗುವ ಕಾಲ ದೂರವಿಲ್ಲʼ ಎಂದು ಮಾಜಿ ಮುಖ್ಯಮಂತ್ರಿ  ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಶುಕ್ರವಾರ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ರೋಡ್ ಷೋನಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ಮತ್ತು ಅವರ ಪತ್ನಿ ಮುಡಾ ಹಗರಣದಲ್ಲಿ ಸಿಲುಕಿಕೊಂಡಿದ್ದಾರೆ. ಲೋಕಾಯುಕ್ತ ತನಿಖೆ ಎದುರಿಸಿದ್ದಾರೆ ಎಂದು ವಿವರಿಸಿದರು.

ಮೈಸೂರು ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಲು ನಾವು ಒತ್ತಾಯಿಸಿದ್ದೇವೆ. ಸಿಬಿಐ ತನಿಖೆಗೆ ವಹಿಸಿದ 24 ಗಂಟೆಗಳಲ್ಲಿ ಮುಖ್ಯಮಂತ್ರಿಯನ್ನು ಬಂಧನ ಮಾಡಿ ಜೈಲಿಗೆ ಕಳುಹಿಸುವುದು ನಿಶ್ಚಿತ ಎಂದು ಯಡಿಯೂರಪ್ಪ ಹೇಳಿದರು.

ಹಣ, ಹೆಂಡ, ಅಧಿಕಾರದ ಬಲದಿಂದ ಹಾಗೂ ಜಾತಿ ವಿಷಬೀಜ ಬಿತ್ತಿ ರಾಜಕಾರಣ ಮಾಡುವ ಕಾಲ ಹೋಗಿದೆ. ಸಿದ್ದರಾಮಯ್ಯನವರೇ, ಇವತ್ತು ಜನ ಜಾಗೃತರಾಗಿದ್ದಾರೆ. ನಿಮ್ಮ ಮೋಸಕ್ಕೆ ಬಲಿ ಆಗುವುದಿಲ್ಲ. ರಾಜ್ಯದಲ್ಲಿ ಉಪ ಚುನಾವಣೆ ನಡೆಯುವ 3ಕ್ಕೆ 3 ಕ್ಷೇತ್ರಗಳನ್ನು ಗೆದ್ದೇ ಗೆಲ್ಲುತ್ತೇವೆ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಬಂಗಾರು ಹನುಮಂತು ಅವರ ಚಿಹ್ನೆ ಕಮಲದ ಹೂವಿನ ಗುರುತಿಗೆ ಮತ ಕೊಡಿ. ಬಂಗಾರು ಹನುಮಂತು ಅವರನ್ನು ಗೆಲ್ಲಿಸುವ ಉದ್ದೇಶದಿಂದ ಇಲ್ಲಿಗೆ ಬಂದಿದ್ದೇನೆ ಎಂದು ಯಡಿಯೂರಪ್ಪ ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿಯವರ ಗುರುತು, ಬಂಗಾರು ಹನುಮಂತು ಅವರ ಗುರುತು, ಬಿಜೆಪಿ ಗುರುತು ಕಮಲ-ಕಮಲ-ಕಮಲ. ಸಂಡೂರು ಕ್ಷೇತ್ರದಲ್ಲಿ ತಾತ, ಮುತ್ತಾತಂದಿರ ಕಾಲದಿಂದ ಉಳುಮೆ ಮಾಡಿಕೊಂಡು ಬಂದ ರೈತರ ಭೂಮಿಯ ವಿಚಾರದಲ್ಲಿ ಸಮಸ್ಯೆ ಆಗಿದೆ. ಅದನ್ನು ಸರಿಪಡಿಸುವ ಎಲ್ಲ ಪ್ರಯತ್ನ ಮಾಡಲಾಗುವುದು ಎಂದು ಯಡಿಯೂರಪ್ಪ ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ಮಾಜಿ ಸಚಿವ, ಶಾಸಕ ಜನಾರ್ದನ ರೆಡ್ಡಿ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಅಭ್ಯರ್ಥಿ ಬಂಗಾರು ಹನುಮಂತು ಸಹಿತ ಪಕ್ಷದ ಪ್ರಮುಖರು, ಕಾರ್ಯಕರ್ತರು ಭಾಗವಹಿಸಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News