ಜು.3ರಿಂದ ಬಜೆಟ್ ಅಧಿವೇಶನ ಹಿನ್ನೆಲೆ: ವಿಧಾನಸೌಧದ ಸುತ್ತಲೂ ನಿಷೇಧಾಜ್ಞೆ ಜಾರಿ

Update: 2023-07-01 14:52 GMT

ಬೆಂಗಳೂರು, ಜು. 1: ಕಾಂಗ್ರೆಸ್ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ಬಳಿಕ ವಿಧಾನ ಮಂಡಲ ಜಂಟಿ ಅಧಿವೇಶನ ಜು.3ರಿಂದ ಆರಂಭವಾಗಲಿದ್ದು, ಜು.14ರ ವರೆಗೆ ನಡೆಯಲಿದೆ. ಕಲಾಪದ ಹಿನ್ನೆಲೆಯಲ್ಲಿ ವಿಧಾನಸೌಧದ ಸುತ್ತಲಿನ ಎರಡೂ ಕಿ.ಮೀ ವ್ಯಾಪ್ತಿಯಲ್ಲಿ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ.

ಶನಿವಾರ ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶ ಹೊರಡಿಸಿದ್ದು, ಅನುಮತಿ ಪಡೆದು ಸ್ವಾತಂತ್ರ್ಯ ಉದ್ಯಾನವನದಲ್ಲಿ ಧರಣಿ, ಪ್ರತಿಭಟನೆ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಜು.3ರಿಂದ 14ರ ವರೆಗೆ ಪ್ರತಿನಿತ್ಯ ಬೆಳಗ್ಗೆ 6ಗಂಟೆಯಿಂದ ಮಧ್ಯರಾತ್ರಿ 12ರ ವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಈ ವ್ಯಾಪ್ತಿಯಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಜನರ ಗುಂಪು ಸೇರುವುದು, ಮೆರವಣಿಗೆ ಮತ್ತು ಸಭೆ ನಡೆಸುವುದನ್ನು ನಿಷೇಧಿಸಲಾಗಿದೆ.

ಅಲ್ಲದೇ ಶಸ್ತ್ರಾಸ್ತ್ರ, ದೊಣ್ಣೆ, ಕತ್ತಿಗಳು, ಈಟಿಗಳು, ಮಾರಕಾಸ್ತ್ರಗಳನ್ನು ಒಯ್ಯುವುದಾಗಲಿ ಅಥವಾ ಯಾವುದೇ ಸ್ಫೋಟಕ ವಸ್ತುಗಳನ್ನು ಸಿಡಿಸುವುದು, ಕಲ್ಲುಗಳನ್ನು, ಕ್ಷಿಪಣಿಗಳನ್ನು ಎಸೆಯುವ ಸಾಧನಗಳ ಅಥವಾ ಉಪಕರಣಗಳ ಸಾಗಾಟ ಮತ್ತು ಶೇಖರಿಸುವುದನ್ನು ನಿಷೇಧಿಸಲಾಗಿದೆ. ಯಾವುದೇ ವ್ಯಕ್ತಿಗಳ ಅಥವಾ ಅವರ ಪ್ರತಿಕೃತಿಗಳ ಪ್ರದರ್ಶನ, ಪ್ರಚೋದಿಸುವಂತಹ ಘೋಷಣೆ ಕೂಗುವುದನ್ನು ನಿಷೇಧಿಸಿ ಆದೇಶ ಮಾಡಲಾಗಿದೆ.




 


Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News