ಆ.30ರಂದು 'ಗೃಹಲಕ್ಷ್ಮಿ' ಯೋಜನೆಗೆ ಮೈಸೂರಿನಲ್ಲಿ ಚಾಲನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Update: 2023-08-19 07:57 GMT

ಬೆಂಗಳೂರು, ಆ.19: ರಾಜ್ಯ ಸರಕಾರದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾದ 'ಗೃಹಲಕ್ಷ್ಮಿ' ಯೋಜನೆಗೆ ಆ.30ರಂದು ಮೈಸೂರಿನಲ್ಲಿ ಚಾಲನೆ ಸಿಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದ ವೃಕ್ಷ ಸಾಂಪ್ರದಾಯಿಕ ಕಲಾಮಂಟಪದಲ್ಲಿ ನಡೆದ 'ನಮ್ಮೂರ ನಾಗಪಂಚಮಿ-2022' ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವೆ, ಚಾಮುಂಡೇಶ್ವರಿ ತಾಯಿಯ ಕ್ಷೇತ್ರದಲ್ಲಿ ಈ ಯೋಜನೆಗೆ ಚಾಲನೆ ಸಿಗುತ್ತಿರುವುದು ನನ್ನ ಅದೃಷ್ಟ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದರು.

ಕಾರ್ಯಕ್ರಮ ಸಿದ್ಧತೆ ಕುರಿತು ವೀಕ್ಷಿಸಲು ಇಂದು ಮೈಸೂರಿಗೆ ತೆರಳುತ್ತಿದ್ದು, ಮೈಸೂರು, ಮಂಡ್ಯ ಹಾಗೂ ಹಾಸನ ಜಿಲ್ಲೆಯ ಸಚಿವರು, ಶಾಸಕರೊಂದಿಗೆ ಸಭೆ ನಡೆಸುವುದಾಗಿ ತಿಳಿಸಿದರು.

ಅದ್ದೂರಿಯಾಗಿ ಕಾರ್ಯಕ್ರಮ ನಡೆಯಲಿದ್ದು, ಈಗಾಗಲೇ ಸಿದ್ಧತೆ ಕೈಗೊಳ್ಳಲಾಗಿದೆ ಎಂದರು.

ರಾಹುಲ್ ಗಾಂಧಿ ಅವರ ದಿನಾಂಕ ಹೊಂದಾಣಿಕೆ ದೃಷ್ಟಿಯಿಂದ ಮೈಸೂರಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ಸಚಿವೆ ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಿ ಕಾರ್ಯಕ್ರಮವನ್ನು ಮೈಸೂರಿನಲ್ಲಿ ನಿಗದಿ ಪಡಿಸಲಾಗಿದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News