ಉಪ ಚುನಾವಣೆಯಲ್ಲಿ ನನ್ನ ಸ್ಪರ್ಧೆ ಅನಿರೀಕ್ಷಿತ : ನಿಖಿಲ್ ಕುಮಾರಸ್ವಾಮಿ

Update: 2024-10-27 15:33 GMT

ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ನನ್ನ ಸ್ಪರ್ಧೆ ಅನಿರೀಕ್ಷಿತ. ಕ್ಷೇತ್ರದ ಕಾರ್ಯಕರ್ತರ ಒತ್ತಡಕ್ಕೆ ಮಣಿದು ಸ್ಪರ್ಧಿಸಿದ್ದೇನೆ. ನಾಮಪತ್ರ ಸಲ್ಲಿಸಿದ ನಂತರ ಇದೇ ಪ್ರಥಮ ಬಾರಿಗೆ ಇಂದು ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಜೊತೆ ಮತ ಪ್ರಚಾರ ಮಾಡುತ್ತಿದ್ದೇನೆ ಎಂದು ಎನ್‍ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ರವಿವಾರ ಚನ್ನಪಟ್ಟಣ ತಾಲೂಕಿನ ಮಾಕಳಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಷೇತ್ರದ ಮೂರು ಪಂಚಾಯಿತಿಗಳ 16ಕ್ಕೂ ಹೆಚ್ಚು ಗ್ರಾಮಗಳಿಗೆ ಭೇಟಿ ನೀಡುತ್ತಿದ್ದೇನೆ. ಕುಮಾರಸ್ವಾಮಿ ಈ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ದೇವೇಗೌಡರು ಇಗ್ಗಲೂರು ಜಲಾಶಯ ನಿರ್ಮಾಣ ಮಾಡಿದ್ದಾರೆ ಎಂದು ಹೇಳಿದರು.

ತಾಲೂಕಿನ ನೀರಾವರಿ ಯೋಜನೆಗೆ ಅವರ ಕೊಡುಗೆ ಶಾಶ್ವತವಾಗಿದೆ. ನೀರಾ ಚಳವಳಿ ವೇಳೆ ದೇವೇಗೌಡರು ಚನ್ನಪಟ್ಟಣದಿಂದ ಬೆಂಗಳೂರಿನವರೆಗೂ ಪಾದಯಾತ್ರೆ ಮಾಡಿದ್ದರು. ಮಂಡ್ಯ ಹಾಗೂ ರಾಮನಗರದಲ್ಲಿ ಈಗಾಗಲೇ ಎರಡು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದೇನೆ. ಒಬ್ಬ ಯುವಕನಾಗಿ, ಯುವಕರ ಧ್ವನಿಯಾಗಿ ಕೆಲಸ ಮಾಡುತ್ತೇನೆ. ಅದಕ್ಕೆ ಕ್ಷೇತ್ರದ ಜನ ಅವಕಾಶ ಮಾಡಿಕೊಡಿ ಎಂದು ನಿಖಿಲ್ ಕುಮಾರಸ್ವಾಮಿ ಮನವಿ ಮಾಡಿದರು.

ನನಗೆ ಸೇಡಿನ ರಾಜಕೀಯ, ಜಿದ್ದಾಜಿದ್ದಿನ ರಾಜಕೀಯದಲ್ಲಿ ನಂಬಿಕೆ ಇಲ್ಲ. ಜನತೆಯ ಸೇವೆ ಮಾಡುವ ಒಂದು ಮಾರ್ಗವಾಗಿ ನಾನು ರಾಜಕೀಯವನ್ನು ಆಯ್ಕೆ ಮಾಡಿಕೊಂಡಿದ್ದೇನೆ. ನನ್ನನ್ನು ನೀವೆಲ್ಲರೂ ಆಶೀರ್ವಾದ ಮಾಡಬೇಕು ಎಂದು ಅವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಶಾಸಕ ಎ.ಮಂಜು, ಮಾಜಿ ಶಾಸಕ ಸುರೇಶ್ ಗೌಡ, ಜೆಡಿಎಸ್ ಪಕ್ಷದ ರಾಮನಗರ ಜಿಲ್ಲಾಧ್ಯಕ್ಷ ಮಾಗಡಿ ಮಂಜುನಾಥ್, ಚನ್ನಪಟ್ಟಣ ತಾಲೂಕು ಅಧ್ಯಕ್ಷ ಜಯಮುತ್ತು, ಬಿಜೆಪಿ ಜಿಲ್ಲಾಧ್ಯಕ್ಷ ಆನಂದ್ ಸ್ವಾಮಿ ಸೇರಿದಂತೆ ಅನೇಕ ನಾಯಕರು ಉಪಸ್ಥಿತರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News