ಬೀದರ್ | ಜಾತ್ರೆಗೆ ಬಂದಿದ್ದಕ್ಕೆ ದಲಿತರ ಮೇಲೆ ಸವರ್ಣೀಯರಿಂದ ಹಲ್ಲೆ; ಆರೋಪ: ಹಲವರ ವಿರುದ್ಧ ಪ್ರಕರಣ ದಾಖಲು
Update: 2024-11-05 04:27 GMT
ಬೀದರ್: ಜಾತ್ರೆಯಲ್ಲಿ ಭಾಗವಹಿಸಿದ್ದ ದಲಿತರ ಮೇಲೆ ಸವರ್ಣೀಯರು ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಭಾಲ್ಕಿ ತಾಲೂಕಿನ ಚಳಕಾಪುರ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ.
ನ.1ರಂದು ಹನುಮಾನ್ ದೇವರ ಜಾತ್ರಾ ಮೆರವಣಿಗೆಯ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಮೆರವಣಿಗೆಯಲ್ಲಿ ಭಾಗವಹಿಸಿದ್ದಕ್ಕೆ ದಲಿತರು ಮತ್ತು ಸವರ್ಣೀಯರ ನಡುವೆ ವಾಗ್ವಾದ ಉಂಟಾಗಿದೆ. ಈ ವೇಳೆ ಸವರ್ಣೀಯ ಯುವಕರು ತಮ್ಮ ಮನೆಗೆ ನುಗ್ಗಿ ಹಲ್ಲೆ ಮಾಡಿದ್ದಾರೆಂದು ದಲಿತ ಯುವಕರು ಗಂಭೀರ ಆರೋಪ ಮಾಡಿದ್ದಾರೆ.
ಘಟನೆಯಲ್ಲಿ ದಲಿತ ಸಮುದಾಯದ ಹಲವು ಯುವಕರಿಗೆ ಗಾಯಗಳಾಗಿವೆ ಎಂದು ಹೇಳಲಾಗಿದೆ. ಈ ಬಗ್ಗೆ ಹಲ್ಲೆಗೊಳಗಾದವರು ಕಟಕ ಚಿಂಚೋಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಘಟನೆಗೆ ಸಂಬಂಧಿಸಿ 70ಕ್ಕೂ ಹೆಚ್ಚು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.