ಬೀದರ್ | ಯುಜಿಸಿಇಟಿ ಪರೀಕ್ಷೆ ಅಚ್ಚುಕಟ್ಟಾಗಿ ನಡೆಸಲು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚನೆ

ಬೀದರ್ : ಎ.16 ಹಾಗೂ 17 ರಂದು ನಡೆಯಲಿರುವ ಯುಜಿಸಿಇಟಿ ಪರೀಕ್ಷೆಯನ್ನು ಅಚ್ಚುಕಟ್ಟಾಗಿ ನಡೆಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚನೆ ನೀಡಿದ್ದಾರೆ.
ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ 2025ನೇ ಸಾಲಿನ ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿ ಸರ್ಕಾರಿ ಸೀಟುಗಳ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ (ಯುಜಿಸಿಇಟಿ) ಗಳನ್ನು ಸುವ್ಯವಸ್ಥಿತವಾಗಿ ನಡೆಸುವ ಹಿನ್ನಲೆಯಲ್ಲಿ ಪರೀಕ್ಷಾ ಪೂರ್ವಭಾವಿ ಸಿದ್ಧತಾ ಸಭೆ ಉದ್ದೇಶಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಒಟ್ಟು 36 ಪರೀಕ್ಷಾ ಕೇಂದ್ರಗಳಿರಲಿದ್ದು ಬೀದರ್, ಬಸವಕಲ್ಯಾಣ, ಭಾಲ್ಕಿ ನಗರಗಳಲ್ಲಿ ಪರೀಕ್ಷೆ ನಡೆಯಲಿವೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲೂ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಾಗೂ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು. ಪ್ರತಿ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿ ಪ್ರದೇಶದಲ್ಲಿ ಸ್ಕಾನಿಂಗ್, ಜೆರಾಕ್ಸ್, ಕಂಪ್ಯೂಟರ್ ಅಂಗಡಿಗಳನ್ನು ಪರೀಕ್ಷಾ ಸಮಯದಲ್ಲಿ ಬಂದ್ ಮಾಡಲು ಆದೇಶಿಸಲಾಗುವುದು ಎಂದು ತಿಳಿಸಿದ್ದಾರೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವತಿಯಿಂದ ಈ ಪರೀಕ್ಷೆಗಳು ನಡೆಯಲಿವೆ. ಕೆಇಎ ಆದೇಶಿಸಿರುವ ವಸ್ತ್ರ ಸಂಹಿತೆಯನ್ನು ಕಡ್ಡಾಯ ಪಾಲಿಸಬೇಕು ಎಂದು ಅವರು ಸೂಚನೆ ನೀಡಿದ್ದಾರೆ.
ಈ ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್ ಪೂಜಾರ್, ಬೀದರ್ ವಿಶ್ವವಿದ್ಯಾಲಯದ ಕುಲಸಚಿವೆ ಸುರೇಖಾ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಚಂದ್ರಕಾಂತ್ ಶಹಾಬಾದಕರ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.