ಬೀದರ್ | ಅಮಿತ್ ಶಾ ವಿರುದ್ಧ ಬೃಹತ್ ಪ್ರತಿಭಟನೆ
ಬೀದರ್ : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನೀಡಿರುವ ಅಂಬೇಡ್ಕರ್ ಅವರ ವಿರುದ್ಧದ ಹೇಳಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ, ದಲಿತ ಸಂಘಟನೆಗಳ ಒಕ್ಕೂಟ ಹಾಗೂ ಸಂವಿಧಾನ ಸಂರಕ್ಷಣಾ ನೇತೃತ್ವದಲ್ಲಿ ನಗರದ ಅಂಬೇಡ್ಕರ್ ಪ್ರತಿಮೆ ಎದುರು ಮಾನವ ಸರಪಳಿ ನಿರ್ಮಿಸಿ ಶಾ ಪ್ರತಿಕೃತಿ ದಹಿಸುವ ಮೂಲಕ ಪ್ರತಿಭಟನೆ ನಡೆಸಲಾಯಿತು.
ನಗರದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಲಾಯಿತು. ಅಮಿತ್ ಶಾ ವಿರುದ್ಧ 'ರಿಕ್ಷಾವಾಲಾ ಅಚ್ಛೆ ಹೈ, ಅಮಿತ್ ಷಾ ಲುಚ್ಚಾ ಹೈ' ಎನ್ನುವ ಘೋಷಣೆ ಕೂಗುತ್ತಾ ದಲಿತ ಸಂಘಟನೆಗಳು ಆಕ್ರೋಶ ಹೊರಹಾಕಿದವು.
ಸಂವಿಧಾನ ಸಂರಕ್ಷಣಾ ಸಮಿತಿ ಮುಖಂಡ ಅನೀಲ್ಕುಮಾರ ಬೆಲ್ದಾರ್ ಮಾತನಾಡಿ, ಭಾರತೀಯ ಜನತಾ ಪಕ್ಷ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಿಜವಾಗಲೂ ಡಾ.ಅಂಬೇಡ್ಕರ್ ಅವರ ಬಗ್ಗೆ ಗೌರವ ಇದ್ದರೆ ಅಮಿತ್ ಶಾ ಅವರನ್ನು ತಕ್ಷಣ ಸಚಿವ ಸ್ಥಾನದಿಂದ ವಜಾ ಮಾಡಬೇಕು ಎಂದು ಒತ್ತಾಯಿಸಿದರು.
ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ ಅಮಿತ್ ಶಾ ಅವರನ್ನು ತಕ್ಷಣವೇ ಸಚಿವ ಸ್ಥಾನದಿಂದ ವಜಾ ಮಾಡಬೇಕು. ಇಲ್ಲವಾದಲ್ಲಿ ದೇಶಾದ್ಯಂತ ತೀವ್ರ ಹೋರಾಟ ಎದುರಿಸಬೇಕಾಗುತ್ತದೆ ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ದಲಿತ ಮುಖಂಡ ಬಾಬುರಾವ ಪಾಸ್ವಾನ್, ಶಂಕರರಾವ್ ದೊಡ್ಡಿ ಮತ್ತಿತರರು ಉಪಸ್ಥಿತರಿದ್ದರು.