ಬೀದರ್ | ನೀರಿನ ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಶಾಸಕ ಪ್ರಭು ಚೌವ್ಹಾಣ್ ಸೂಚನೆ

Update: 2025-03-25 21:26 IST
Photo of Metting
  • whatsapp icon

ಬೀದರ್ : ಬೇಸಿಗೆಯ ತೀವ್ರತೆ ಹೆಚ್ಚುತ್ತಿದ್ದಂತೆ ಔರಾದ್ (ಬಿ) ಹಾಗೂ ಕಮಲನಗರ ತಾಲ್ಲೂಕಿನ ಸಾಕಷ್ಟು ಗ್ರಾಮಗಳಲ್ಲಿ ನೀರಿನ ಸಮಸ್ಯೆ ಹೆಚ್ಚಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು, ಅಧಿಕಾರಿಗಳು ಚುರುಕಿನಿಂದ ಕೆಲಸ ಮಾಡಬೇಕು ಎಂದು ಶಾಸಕ ಪ್ರಭು ಚವ್ಹಾಣ್ ಅವರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮತ್ತು ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.

ಇಂದು ಔರಾದ(ಬಿ) ತಾಲ್ಲೂಕು ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.

ನೀರಿನ ಸಮಸ್ಯೆಯ ಕುರಿತು ಪಂಚಾಯತ್‌ ಅಧಿಕಾರಿಗಳಿಂದ ಗ್ರಾಮವಾರು ಮಾಹಿತಿ ಪಡೆದ ಅವರು, ಪ್ರತಿದಿನ ಒಂದಿಲ್ಲೊಂದು ಗ್ರಾಮದ ಜನರು ನೀರಿನ ಸಮಸ್ಯೆ ಹೇಳಿಕೊಂಡು ಬರುತ್ತಿದ್ದಾರೆ. ಸಾರ್ವಜನಿಕರಿಂದ ನಿರಂತರ ದೂರುಗಳು ಬರುತ್ತಿವೆ. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕಚೇರಿಯಲ್ಲಿ ಲಭ್ಯವಿದ್ದು, ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಖಾಸಗಿ ಬೋರವೆಲ್ ಇಲ್ಲವೇ ಹೊಸ ಬೋರ್‌ವೆಲ್ ಕೊರೆಸಿ ನೀರು ಸರಬರಾಜು ಮಾಡಬೇಕು. ಸಾಧ್ಯವಾದಷ್ಟು ಸ್ಥಳೀಯವಾಗಿಯೇ ಪರಿಹಾರ ಕಲ್ಪಿಸಬೇಕು. ಸಮಸ್ಯೆಯ ತೀವ್ರತೆ ಹೆಚ್ಚಿರುವ ಗ್ರಾಮಗಳಲ್ಲಿ ಮಾತ್ರ ಟ್ಯಾಂಕರ್ ಮೂಲಕ ನೀರು ಪೂರೈಸಲು ಆದ್ಯತೆ ಕೊಡಬೇಕು ಎಂದು ಹೇಳಿದರು.

ಇನ್ನು ಎರಡು ತಿಂಗಳು ನೀರಿನ ಸಮಸ್ಯೆ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಒಳಗೊಂಡು ಎಲ್ಲ ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ತಾಲ್ಲೂಕು ಕೇಂದ್ರದಲ್ಲಿ ವಾಸ್ತವ್ಯ ಮಾಡಬೇಕು. ಎಲ್ಲರೂ ತಮ್ಮ ಮೊಬೈಲ್ ಫೋನ್ ಗಳು ಚಾಲ್ತಿಯಲ್ಲಿಡಬೇಕು. ಸಾರ್ವಜನಿಕರ ಕರೆಗಳಿಗೆ ತಕ್ಷಣ ಸ್ಪಂದಿಸಬೇಕು. ಸಣ್ಣಪುಟ್ಟ ಸಮಸ್ಯೆಗಳಿದ್ದಲ್ಲಿ ತಕ್ಷಣ ಸರಿಪಡಿಸಬೇಕು. ಎಲ್ಲಿಯೂ ನೀರಿನ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಬಿಲ್ ಪಾವತಿಯಲ್ಲಿ ಲೋಪ, ಅಧಿಕಾರಿಗಳಿಗೆ ತರಾಟೆ :

ಜಲ ಜೀವನ್ ಮಿಷನ್ ಯೋಜನೆ (ಜೆಜೆಎಂ) ಅಡಿ ಬಿಲ್ ಪಾವತಿಗೆ ಸಂಬಂಧಿಸಿದಂತೆ ಕಡಿಮೆ ಕೆಲಸವಾದರೂ ಗುತ್ತಿಗೆದಾರರಿಗೆ ಹೆಚ್ಚಿನ ಬಿಲ್ ಪಾವತಿಸಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳಿಗೆ ಶಾಸಕರು ತೀವ್ರ ತರಾಟೆಗೆ ತೆಗೆದುಕೊಂಡರು.

ಖೇರ್ಡಾ(ಬಿ) ಗ್ರಾಮದಲ್ಲಿ ಶೇ.30ರಷ್ಟು ಮಾತ್ರ ಕೆಲಸವಾಗಿದ್ದು, ಶೇ.70ರಷ್ಟು ಬಿಲ್ ಪಾವತಿಸಲಾಗಿದೆ. ಸಾವರಗಾಂವ ಗ್ರಾಮದಲ್ಲಿ ಶೇ.40ರಷ್ಟು ಕೆಲಸವಾದರೆ, ಶೇ.60ರಷ್ಟು ಬಿಲ್ ಪಾವತಿಸಲಾಗಿದೆ. ಅದರಂತೆ ಹುಲ್ಯಾಳ್, ಬಾವಲಗಾಂವ್, ಹೊಕ್ರಾಣಾ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಕೆಲಸ ಕಡಿಮೆಯಾದರೂ ಹೆಚ್ಚಿನ ಬಿಲ್ ಪಾವತಿಸಿರುವುದನ್ನು ಗಮನಕ್ಕೆ ಬರುತ್ತಿದ್ದಂತೆ ಶಾಸಕರು ಅಧಿಕಾರಿಗಳ ವಿರುದ್ಧ ಕೆಂಡಾಮಂಡಲವಾದರು.

ಅಧಿಕಾರಿಗಳು ಹೀಗೆ ಮಾಡುವುದರಿಂದಲೇ ಯೋಜನೆ ಸಂಪೂರ್ಣವಾಗಿ ಹಳ್ಳ ಹಿಡಿದಿದೆ. ಇಂತಹ ಪ್ರಕರಣಗಳನ್ನು ಪತ್ತೆ ಹಚ್ಚಿ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಸಂಬಂಧಪಟ್ಟ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ಕಿಡಿಕಾರಿದರು.

ಈ ಸಂದರ್ಭದಲ್ಲಿ ಔರಾದ್‌ (ಬಿ) ತಹಶೀಲ್ದಾರ್ ಮಲಶೆಟ್ಟಿ ಚಿದ್ರೆ, ಕಮಲನಗರ್ ತಹಶೀಲ್ದಾರ್‌ ಅಮಿತಕುಮಾರ್ ಕುಲಕರ್ಣಿ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕರಾವ್ ಪಾಟೀಲ್, ಗ್ರಾಮೀಣ ಕುಡಿಯುವ ನೀರು ಸರಬರಾಜು ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಮಾಣಿಕರಾವ್ ಕೆರೂರ್, ಜೆಸ್ಕಾಂ ಸಹಾಯಕ ಕಾರ್ಯಪಾಲಕ ಅಭಿಯಂತರ ರವಿ ಕಾರಭಾರಿ ಹಾಗೂ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸ್ವಾಮಿದಾಸ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ ಮತ್ತು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News