ಬೀದರ್ | ಅಮಿತ್ ಶಾ ವಿರುದ್ಧ ಪ್ರತಿಭಟನೆ : ಹುಮನಾಬಾದ್ ಸಂಪೂರ್ಣ ಬಂದ್

Update: 2024-12-24 12:02 GMT

ಬೀದರ್ : ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಅಂಬೇಡ್ಕರ್ ಅವರ ಬಗ್ಗೆ ಅವಮಾನಕರ ಮಾತುಗಳನ್ನಾಡಿರುವುದನ್ನು ಖಂಡಿಸಿ ಇಂದು ಹುಮನಾಬಾದ ಪಟ್ಟಣ ಸಂಪೂರ್ಣವಾಗಿ ಬಂದ್ ಮಾಡಲಾಯಿತು.

ಹುಮನಾಬಾದ್ ನಗರದಲ್ಲಿ ಬೆಳಿಗ್ಗೆಯಿಂದ ಅಂಗಡಿ ಮುಗ್ಗಟ್ಟುಗಳು ಸಂಪೂರ್ಣವಾಗಿ ಮುಚ್ಚಲ್ಪಟ್ಟಿದ್ದವು. ಸಾವಿರಾರು ಸಂಖ್ಯೆಯಲ್ಲಿ ಸೇರಿದ ಜನರು ಅಮಿತ್ ಶಾ ವಿರುದ್ಧ ಘೋಷಣೆ ಕೂಗುವ ಮೂಲಕ ಆಕ್ರೋಶ ಹೊರ ಹಾಕಿದರು.

ಚಳಿಗಾಲದ ಸಂಸತ್ ಅಧಿವೇಶನದಲ್ಲಿ ಸಂವಿಧಾನದ 75ನೇ ವರ್ಷಾಚರಣೆಯ ಪ್ರಯುಕ್ತ ನಡೆದ ಚರ್ಚೆಯ ಸಂದರ್ಭದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಅಡಿಯಲ್ಲಿ ಚುನಾವಣೆಯಲ್ಲಿ ಗೆದ್ದು, ಕೇಂದ್ರದ ಗೃಹ ಸಚಿವರಾಗಿ ಸಂಸತ್ತಿನಲ್ಲಿ ನಿಂತು, ಅಂಬೇಡ್ಕರ್ ಎಂಬ ಹೆಸರು ಫ್ಯಾಶನ್ ಆಗಿದೆ ಎಂದು ಅವಮಾನಕರ ಹೇಳಿಕೆ ನೀಡಿರುವುದು ಡಾ.ಅಂಬೇಡ್ಕರ್ ಮತ್ತು ಅವರು ಬರೆದ ಸಂವಿಧಾನಕ್ಕೆ ಮಾಡಿರುವ ಅವಮಾನವಾಗಿದೆ. ಇದನ್ನು ನಾವು ಖಂಡಿಸುತ್ತೇವೆ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.

ರಾಷ್ಟ್ರಪತಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಅಮೀತ್ ಶಾ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು. ಇವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ, ದೇಶದಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.

ಜಿಲ್ಲೆಯಲ್ಲಿ ದಲಿತರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ವಿಶೇಷವಾಗಿ ಸಚಿವರ ತವರು ಕ್ಷೇತ್ರವಾದ ಭಾಲ್ಕಿಯಲ್ಲಿಯೇ ದೌರ್ಜನ್ಯಗಳಾಗುತ್ತಿವೆ. ಉಸ್ತುವಾರಿ ಸಚಿವರಾದ ಈಶ್ವರ್ ಖಂಡ್ರೆ ಅವರನ್ನು ಸಹ ಸಜೀವ ಸಂಪುಟದಿಂದ ವಜಾಗೊಳಿಸಬೇಕು. ಸಚಿವರ ಕೈಗೊಂಬೆಯಾಗಿರುವ ಭಾಲ್ಕಿಯ ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ ಅವರನ್ನು ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಹುಮನಾಬಾದ್ ಜನಪರ ಸಂಘಟನೆಗಳ ಒಕ್ಕೂಟದ ಎಲ್ಲ ಪದಾಧಿಕಾರಿಗಳು, ದಲಿತ ಮುಖಂಡರು ಹಾಗೂ ಮಹಿಳೆಯರು ಸೇರಿ ಹಳ್ಳಿಯಿಂದ ಬಂದ ಸಾವಿರಾರು ಜನ ಭಾಗವಹಿಸಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News