ಬೀದರ್ | ಆಸ್ಪತ್ರೆಯಲ್ಲಿ ಮಹಿಳೆ ಮೃತ್ಯು : ವೈದ್ಯರ ವಿರುದ್ಧ ಪ್ರತಿಭಟನೆ
ಬೀದರ್ : ಹುಮ್ನಾಬಾದ್ ತಾಲೂಕಿನ ದುಬಲಗುಂಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳ ನಿರ್ಲಕ್ಷತನದಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ ಎಂದು ಆರೋಪಿಸಿ ಕುಟುಂಬಸ್ಥರು ಹಾಗೂ ಗ್ರಾಮದ ಮುಖಂಡರಿಂದ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ.
ದುಬಲಗುಂಡಿ ಗ್ರಾಮದ ನಾಗಮ್ಮ ನರಸಪ್ಪ (63) ಮೃತ ಮಹಿಳೆ. ರವಿವಾರ ಮುಂಜಾನೆ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆಯೂ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷತನದಿಂದ ಈ ಘಟನೆ ನಡೆದಿದೆ ಎಂದು ಆರೋಪಿಸಿ ಪ್ರತಿಭಟನೆಕಾರರು ವೈದ್ಯಾಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
ಜಿಲ್ಲಾ ಆರೋಗ್ಯ ಅಧಿಕಾರಿ ಭೇಟಿ :
ಈ ಘಟನೆಯ ಸುದ್ದಿ ತಿಳಿದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಜ್ಞಾನೇಶ್ವರ್ ನಿರ್ಗುಡೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಈ ಘಟನೆಗೆ ಕಾರಣರಾದ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರಿಂದ ಪ್ರತಿಭಟನೆ ಕೈಬಿಟ್ಟರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಾಗರಾಜ್ ಭೋಜ್ಗುಂಡಿ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಶಿವರಾಜ ಗಂಶೆಟ್ಟಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.