ಜಿಲ್ಲೆಯಾದ್ಯಂತ ಪ್ರತಿವರ್ಷ ಸಾವಿರಾರು ಕೃಷಿ ಹೊಂಡ ನಿರ್ಮಿಸಿ : ಸಚಿವ ಈಶ್ವರ್ ಖಂಡ್ರೆ

Update: 2025-03-25 19:48 IST
Photo of Metting
  • whatsapp icon

ಬೀದರ್ : ರೈತರಿಗೆ ಹಾಗೂ ಅಂತರ್ಜಲ ಹೆಚ್ಚಳಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಜಿಲ್ಲಾದ್ಯಂತ ಸಾವಿರಾರು ಕೃಷಿ ಹೊಂಡಗಳು ನಿರ್ಮಿಸುವಂತೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಸೂಚಿಸಿದರು.

ಇಂದು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಡ, ಮಧ್ಯಮ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕೃಷಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರದ ಅನುದಾನ ಬಳಸಿ ಜಿಲ್ಲಾದ್ಯಂತ ಪ್ರತಿವರ್ಷ ಒಂದು ಸಾವಿರ ಕೃಷಿ ಹೊಂಡಗಳು ನಿರ್ಮಿಸುವಂತೆ ಕೃಷಿ ಇಲಾಖೆ ಜಂಟಿ ನಿರ್ದೇಶಕ ಜಿಯಾವುಲ್ಲಾ ಅವರಿಗೆ ತಿಳಿಸಿದರು.

ರೈತ ಸಂಪರ್ಕ ಕೇಂದ್ರ ಅಧಿಕಾರಿ, ಜಲಾನಯನ ಅಧಿಕಾರಿಗಳು ಈ ನಿಟ್ಟಿನಲ್ಲಿ ಕ್ರಿಯಶೀಲರಾಗಿ ರೈತರಲ್ಲಿ ಜಾಗೃತಿ ಮೂಡಿಸಿ ರೈತರ ಜಮೀನಿನಲ್ಲಿ ಹೆಚ್ಚಿನ ಕೃಷಿ ಹೊಂಡಗಳು ನಿರ್ಮಿಸಬೇಕು. ಮಳೆ ಕಡಿಮೆಯಾಗಿ ನೀರಿನ ಅಭಾವವಾದಲ್ಲಿ ನೀರು ಸಂಗ್ರಹಣೆಗೆ ರೈತರಿಗೆ ಅನುಕೂಲವಾಗುತ್ತದೆ ಎಂದು ಅವರು ಹೇಳಿದಾಗ, ಈ ವರ್ಷ 334 ಕೃಷಿ ಹೊಂಡಗಳನ್ನು ನಿರ್ಮಿಸಲಾಗಿದೆ ಎಂದು ಅಧಿಕಾರಿಗಳು ಸಚಿವರ ಗಮನಕ್ಕೆ ತಂದರು.

ಔರಾದ್ ತಾಲ್ಲೂಕಿನ ರಕ್ಷಾಳ ಹಾಗೂ ಕರ್ಕಿಹಾಳ ಗ್ರಾಮ ಮತ್ತು ಭಾಲ್ಕಿ ತಾಲ್ಲೂಕಿನ ಜೈನಾಪುರ ಹಾಗೂ ಧಾರಜವಾಡಿ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ ಬಗ್ಗೆ ಗ್ರಾಮಸ್ಥರು ತಮಗೆ ಅಹವಾಲು ನೀಡಿದ ತಕ್ಷಣವೇ ಬಗೆಹರಿಸುವಂತೆ ಅವರು ಅಧಿಕಾರಿಗಳಿಗೆ ತಿಳಿಸಿದರು.

ಬೇಸಿಗೆ ಹಿನ್ನೆಲೆಯಲ್ಲಿ ಜಿಲ್ಲೆಯ ಯಾವುದೇ ಜನವಸತಿ ಪ್ರದೇಶದಲ್ಲಿ ಜನರಿಗೆ ಹಾಗೂ ಜಾನುವಾರುಗಳಿಗೆ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ಕ್ರಮವಹಿಸಬೇಕು. ಎಲ್ಲಿಯಾದರೂ ಸಮಸ್ಯೆ ಕಂಡು ಬಂದಲ್ಲಿ 24 ಗಂಟೆಗಳಲ್ಲಿ ಆ ಸಮಸ್ಯೆ ಬಗೆಹರಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದಾಗ, ಸದ್ಯ 70 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಸಂಭವಿಸುವ ಮುನ್ನೆಚ್ಚರಿಕೆಯಾಗಿ ಕ್ರಮ ಕೈಗೊಳ್ಳಲಾಗಿದೆ. ಕಮಲನಗರದ ಐದು ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಉಳಿದೆಡೆ ಕೊಳವೆ ಬಾವಿಗಳು ಸಹ ಬಳಸಲಾಗಿದೆ ಎಂದು ಅಧಿಕಾರಿಗಳು ಹೇಳಿದರು.

ಪತ್ರಿಕೆಗಳ ವರದಿಗೆ ಸ್ಪಂದಿಸಿ :

ಪತ್ರಿಕೆಗಳಲ್ಲಿ ಪ್ರಕಟಗೊಳ್ಳುವ ಸಮಸ್ಯಾತ್ಮಕ ವರದಿಗಳಿಗೆ ಅಧಿಕಾರಿಗಳು ತಕ್ಷಣವೇ ಸ್ಪಂದಿಸಿ ಸಮಸ್ಯೆ ಪರಿಶೀಲಿಸಿ ಬಗೆಹರಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ವಾನತಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News