ಎ.16 ರಂದು ಸಿಎಂ, ಡಿಸಿಎಂ ಜಿಲ್ಲಾ ಪ್ರವಾಸ : ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ : ಸಚಿವ ಈಶ್ವರ್ ಖಂಡ್ರೆ

ಬೀದರ್ : ಎ.16 ರಂದು ಜಿಲ್ಲೆಗೆ ಸಿಎಂ ಮತ್ತು ಡಿಸಿಎಂ ಆಗಮಿಸಲಿದ್ದು, 1 ಸಾವಿರ ಕೋಟಿ ರೂ. ಗಿಂತ ಹೆಚ್ಚು ಮೊತ್ತದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ತಿಳಿಸಿದರು.
ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಿದ್ಧತಾ ಸಭೆ ಉದ್ದೇಶಿಸಿ ಅವರು ಮಾತನಾಡಿದರು.
ನೀರಾವರಿ, ಕುಡಿಯುವ ನೀರು, ಜಿಲ್ಲಾಡಳಿತ ಸಂಕಿರಣ, ರಸ್ತೆ ಮತ್ತು ಒಳಚರಂಡಿ, ಶಾಲೆ ಹಾಗೂ ವಸತಿ ಶಾಲೆ, ಅರಣ್ಯ ಇಲಾಖೆಯ ಇಕೋ ಟೂರಿಸಂ ಪಾರ್ಕ್, ಬ್ರಿಮ್ಸ್ ನ ಕ್ಯಾತ್ ಲ್ಯಾಬ್, ಭಾಲ್ಕಿ ತಾಲೂಕು ಆಸ್ಪತ್ರೆ, ಭಾಲ್ಕಿ ಒಳ ಮತ್ತು ಹೊರ ಕ್ರೀಡಾಂಗಣ ಹಾಗೂ ವಿವಿಧ ಇಲಾಖೆಯ ಹತ್ತು ಹಲವಾರು ಯೋಜನೆ ಕಾಮಗಾರಿಗಳಿಗೆ, ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಚಿವ ಸಂಪುಟದ ವಿವಿಧ ಸಚಿವರು ಭಾಗವಹಿಸಲಿದ್ದಾರೆ. ಹಾಗೆಯೇ ಜಿಲ್ಲೆಯ ವಿವಿಧ ಭಾಗಗಳಿಂದ ನಲವತ್ತರಿಂದ ಐವತ್ತು ಸಾವಿರ ಜನರು ಸೇರಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಸಭೆಯಲ್ಲಿ ಪೌರಾಡಳಿತ ಮತ್ತು ಹಜ್ ಸಚಿವ ರಹೀಮ್ ಖಾನ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ವಾನತಿ, ಅಪರ ಜಿಲ್ಲಾಧಿಕಾರಿ ಶಿವಕುಮಾರ್ ಶೀಲವಂತ, ಬೀದರ್ ಹಾಗೂ ಬಸವಕಲ್ಯಾಣ ಸಹಾಯಕ ಆಯುಕ್ತರು ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.