ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಯಲು ಆಂತರಿಕ ದೂರು ನಿರ್ವಹಣಾ ಸಮಿತಿ ರಚಿಸಿ : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚನೆ

ಬೀದರ್ : ಜಿಲ್ಲೆಯಲ್ಲಿನ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟುವ ನಿಟ್ಟಿನಲ್ಲಿ ಆಂತರಿಕ ದೂರು ನಿರ್ವಹಣಾ ಸಮಿತಿ ರಚನೆ ಮಾಡಿ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚನೆ ನೀಡಿದ್ದಾರೆ.
ಜಿಲ್ಲೆಯ ಎಲ್ಲಾ ಸರಕಾರಿ, ಖಾಸಗಿ ಕಚೇರಿ, ನಿಗಮ ಮಂಡಳಿ, ಸಾರ್ವಜನಿಕ ಉದ್ಯಮಗಳು, ಕಾರ್ಖಾನೆ, ಗಾರ್ಮೇಂಟ್ಸ್ ಫ್ಯಾಕ್ಟರಿ, ವಿಶ್ವವಿದ್ಯಾಲಯ, ಶಾಲಾ ಕಾಲೇಜು, ಸಂಘ ಸಂಸ್ಥೆ, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಹಾಗೂ ಖಾಸಗಿ ಸಂಸ್ಥೆ, ಅಂಚೆ ಕಚೇರಿ, ಬ್ಯಾಂಕ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅಧಿಕಾರಿ ಹಾಗೂ ಸಿಬ್ಬಂದಿಯ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ ಸ್ವೀಕೃತವಾದ ದೂರು ಪರಿಹರಿಸಲು ಎಲ್ಲಾ ಇಲಾಖೆಗಳಲ್ಲಿ ಒಂದು ಆಂತರಿಕ ದೂರು ಸಮಿತಿ ರಚನೆ ಮಾಡಬೇಕು ಎಂದು ಅವರು ತಿಳಿಸಿದ್ದಾರೆ.
ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟುವ ನಿಟ್ಟಿನಲ್ಲಿ (ತಡೆಗಟ್ಟುವಿಕೆ, ನಿಷೇಧಿಸುವಿಕೆ, ನಿವಾರಿಸುವಿಕೆ) 2013 ಅಧಿನಿಯಮವನ್ನು ಕೇಂದ್ರ ಸರ್ಕಾರವು ಜಾರಿಗೊಳಿಸಿದೆ. ಎಲ್ಲಿ ಆಂತರಿಕ ದೂರು ಸಮಿತಿ ರಚನೆಯಾಗಿರುವುದಿಲ್ಲವೋ, ಅಲ್ಲಿ ಕೂಡಲೇ ಕಡ್ಡಾಯವಾಗಿ ಆಂತರಿಕ ದೂರು ಸಮಿತಿ ರಚಿಸಬೇಕು. ಹಾಗೆಯೇ ಈಗಾಗಲೇ ದೂರು ಸಮಿತಿ ರಚನೆಯಾಗಿದ್ದಲ್ಲಿ, ಆಂತರಿಕ ದೂರು ಸಮಿತಿ ಮುಂದೆ ಬಾಕಿ ಉಳಿದಿರುವ ಪ್ರಕರಣಗಳು ಕಾಲಮಿತಿಯಲ್ಲಿ ಇತ್ಯರ್ಥಪಡಿಸಿರುವ ಬಗ್ಗೆ ಪರಿಶೀಲಿಸಬೇಕು ಎಂದು ಅವರು ಹೇಳಿದ್ದಾರೆ.
ಆಂತರಿಕ ದೂರು ಸಮಿತಿಯ ವಿವರಗಳು ಪರಿಸ್ಕೃತ SHe Box Portal ನಲ್ಲಿ ಅಪ್ಲೋಡ್ ಮಾಡಬೇಕು. ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟುವ ಕಾಯ್ದೆಯ ಪ್ರತಿಯೊಂದು ನಿಂಬಂಧನೆಗಳು ಕಟ್ಟುನಿಟ್ಟಾದ ಅನುಸರಣೆ ಖಚಿತಪಡಿಸಬೇಕು. ಔಪಚಾರಿಕ ಮತ್ತು ಔಪಚಾರಿಕವಲ್ಲದ, ಸಂಘಟಿತ ಮತ್ತು ಅಸಂಘಟಿತ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಲೈಂಗಿಕ ಕಿರುಕುಳದಿಂದ ಮುಕ್ತವಾದ ಸುರಕ್ಷಿತ ಕೆಲಸದ ವಾತಾವರಣವನ್ನು ಕಡ್ಡಾಯವಾಗಿ ಜಾರಿಗೆ ತರಲು ಅವರು ಸೂಚಿಸಿದ್ದಾರೆ.
ವರದಿಯನ್ನು ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯಕ್ಕೆ ಸಲ್ಲಿಸಬೇಕಾಗಿರುವುದರಿಂದ ಮಾ.25 ರ ಒಳಗಾಗಿ ರಚನೆಯಾದ ಸಮಿತಿಯ ಮಾಹಿತಿ ಕಡ್ಡಾಯವಾಗಿ SHe Box Portal ನಲ್ಲಿ ಅಪ್ಲೋಡ್ ಮಾಡಬೇಕು. ಮಾಹಿತಿಯನ್ನು ಜಿಲ್ಲಾಧಿಕಾರಿ ಕಚೇರಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಿಗೆ ಸಲ್ಲಿಸಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿ ಮೈಲೂರ್, ಬೀದರ್ ದೂರವಾಣಿ ಸಂಖ್ಯೆ: 99807 02545, 83100 32095 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.