ಮಕ್ಕಳಿಗೆ ಮೌಲ್ಯಾಧಾರಿತ, ಸಂಸ್ಕಾರಯುತ ಶಿಕ್ಷಣ ನೀಡುವುದು ಅಗತ್ಯ: ಡಿ.ಕೆ. ಸಿದ್ರಾಮ
ಬೀದರ್ : ಇಂದಿನ ಆಧುನಿಕ ಯುಗದಲ್ಲಿ ಮಕ್ಕಳಿಗೆ ಮೌಲ್ಯಾಧಾರಿತ ಮತ್ತು ಸಂಸ್ಕಾರಯುತ ಶಿಕ್ಷಣ ನೀಡುವುದು ಅಗತ್ಯವಾಗಿದೆ ಎಂದು ನಾರಂಜಾ ಸಹಕಾರ ಸಕ್ಕರೆ ಕಾರಖಾನೆ ಅಧ್ಯಕ್ಷ ಡಿ.ಕೆ.ಸಿದ್ರಾಮ ಅಭಿಪ್ರಾಯಪಟ್ಟರು.
ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಚನ್ನಬಸವೇಶ್ವರ ಪಬ್ಲಿಕ್ ಶಾಲೆಯ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ನಗರ, ಮಹಾನಗರ ಪ್ರದೇಶಗಳಲ್ಲಿ ಶಿಕ್ಷಣ ವ್ಯಾಪಾರೀಕರಣಗೊಳ್ಳುತ್ತಿದೆ. ಮೌಲ್ಯಯುತ ಶಿಕ್ಷಣ ಮರೆಯಾಗುತ್ತಿದೆ. ವಿದ್ಯಾರ್ಥಿಗಳು ಪಾಶ್ಚಿಮಾತ್ಯ ಸಂಸ್ಕೃತಿ, ಡ್ರಗ್ಸ್ ಸೇರಿ ವಿವಿಧ ಕೆಟ್ಟ ಚಟಗಳಿಗೆ ಬಲಿಯಾಗುತ್ತಿರುವ ಉದಾಹರಣೆಗಳು ನಮ್ಮ ಮಧ್ಯೆ ಸಾಕಷ್ಟಿವೆ.ಆದರೆ ಗಡಿಭಾಗದಲ್ಲಿ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಧರ್ಮ ಪ್ರಚಾರ, ಪ್ರಸಾರದ ಜತೆಗೆ ಶೈಕ್ಷಣಿಕ ಸಂಸ್ಥೆ ಮೂಲಕ ಈ ಭಾಗದ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ಮತ್ತು ಸಂಸ್ಕಾರ ನೀಡುತ್ತಿರುವುದು ಹೆಮ್ಮೆ ತರಿಸಿದೆ. ಇಲ್ಲಿ ಕಲಿತ ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತ ನಾಡು ಕಟ್ಟುವ ಕೆಲಸ ಮಾಡುತ್ತಿರುವುದು ಸಂತಸ ತಂದಿದೆ ಎಂದು ತಿಳಿಸಿದರು.
ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿ, ವಿದ್ಯಾರ್ಥಿಗಳು ಶಾರೀರಿಕ ಮತ್ತು ಮಾನಸಿಕವಾಗಿ ಸದೃಢರಾಗಲು ವಿದ್ಯೆಯ ಜತೆಗೆ ಕ್ರೀಡೆಗೂ ಆದ್ಯತೆ ನೀಡುವುದು ಅಗತ್ಯವಿದೆ. ಕ್ರೀಡೆಯಲ್ಲಿ ಸೋಲು, ಗೆಲುವು ಎನ್ನದೇ ಕ್ರೀಡಾ ಮನೋಭಾವದಿಂದ ಭಾಗವಹಿಸಬೇಕು ಎಂದರು.
ಈ ಸಂದರ್ಭದಲ್ಲಿ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ನ ಆಡಳಿತ ಅಧಿಕಾರಿ ಮೋಹನ ರೆಡ್ಡಿ, ಮುಖ್ಯಗುರು ಎನ್.ರಾಜು, ಹಿರೇಮಠ ಸಂಸ್ಥಾನದ ಕಾರ್ಯದರ್ಶಿ ಮಹಾಲಿಂಗ ಸ್ವಾಮೀಜಿ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ, ಯುವ ಮುಖಂಡ ಆಕಾಶ ರಿಕ್ಕೆ, ವಿಲಾಸ ಬಕ್ಕಾ, ಪ್ರಶಾಂತ್ ರೆಡ್ಡಿ ಹಾಗೂ ಶಶಿಕುಮಾರ್ ಸೇರಿದಂತೆ ಹಲವರು ಭಾಗವಹಿಸಿದ್ದರು.