ಸಾರ್ವಜನಿಕರು ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು : ಅಮೃತರಾವ್ ಚಿಮಕೋಡೆ
ಬೀದರ್ : ಜಿಲ್ಲೆಯ ಎಲ್ಲ ಸಾರ್ವಜನಿಕರು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ್ ಚಿಮಕೋಡೆ ಹೇಳಿದರು.
ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆಯಯಲ್ಲಿ ಮಾತನಾಡಿದ ಅವರು, ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಶಕ್ತಿ ಯೋಜನೆ, ಗೃಹಜ್ಯೋತಿ, ಗೃಹಲಕ್ಷ್ಮೀ ಹಾಗೂ ಯುವನಿಧಿ ಯೋಜನೆಗಳಿಂದ ಬಡವರು, ಕೂಲಿ ಕಾರ್ಮಿಕರು ಹಾಗೂ ನಿರುದ್ಯೋಗ ಯುವಕ-ಯುವತಿಯರ ಬದುಕಿಗೆ ಆಸರೆಯಾಗಿದೆ. ಈ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಅಗತ್ಯ ಕ್ರಮವಹಿಸುವಂತೆ ತಿಳಿಸಿದರು.
ಜಿಲ್ಲೆಯಾದ್ಯಂತ ಅನ್ನಭಾಗ್ಯ ಯೋಜನೆಯಡಿ ಆಗಸ್ಟ್ 2024 ರವರೆಗೆ 3,43,703 ಪಡಿತರ ಚೀಟಿಗಳಿದ್ದು, ಫಲಾನುಭವಿಗಳ ಖಾತೆಗೆ 18,80,19,490 ರೂ. ಹಣವನ್ನು ವರ್ಗಾಯಿಸಲಾಗಿದೆ. ಅಕ್ಟೋಬರ್ 2024 ರವರೆಗೆ ಗೃಹಲಕ್ಷ್ಮೀ ಯೋಜನೆಯಡಿ 3,35,429 ಫಲಾನುಭವಿಗಳು ನೋಂದಾಯಿಸಿಕೊಂಡಿದ್ದು, ಒಟ್ಟು 9,29,88,20,000 ರೂ. ಗಳನ್ನು ಫಲಾನುಭವಿಗಳ ಖಾತೆಗೆ ವರ್ಗಾಯಿಸಲಾಗಿದೆ. ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆಯಡಿ 3,76,084 ಫಲಾನುಭವಿಗಳಿದ್ದು, ಒಟ್ಟು 231.12 ಕೋಟಿ ರೂ. ವೆಚ್ಚ ಭರಿಸಲಾಗಿದೆ.
ಶಕ್ತಿ ಯೋಜನೆಯಡಿಯಲ್ಲಿ ಒಟ್ಟು 6,23,37,710 ಅಭ್ಯರ್ಥಿಗಳು ಉಚಿತವಾಗಿ ಪ್ರಯಾಣಿಸುವುದರ ಮೂಲಕ ಯೋಜನೆಯ ಸೌಲಭ್ಯ ಪಡೆಯುತ್ತಿದ್ದಾರೆ. ಹಾಗೂ ಯುವನಿಧಿ ಯೋಜನೆಯಡಿ ಜಿಲ್ಲಾದ್ಯಂತ ಒಟ್ಟು 5,395 ಪದವಿ ಹಾಗೂ 81 ಡಿಪ್ಲೋಮಾ ಪೂರ್ಣಗೊಳಿಸಿದ ನೋಂದಾಯಿತ ಫಲಾನುಭವಿಗಳು ಯೋಜನೆಯ ಲಾಭ ಪಡೆಯುತ್ತಿದ್ದು, ಫಲಾನುಭವಿಗಳ ಖಾತೆಗೆ ಒಟ್ಟು 9,32,34,000 ರೂ. ಗಳನ್ನು ವರ್ಗಾಯಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ ಅವರು ಪ್ರಗತಿ ಪರಿಶೀಲನಾ ಸಭೆಗೆ ಸಂಬಂಧಪಟ್ಟ ಯೋಜನಾ ಅಧಿಕಾರಿಗಳು ಗೈರುಹಾಜರಾಗಿ ಸರಿಯಾದ ಮಾಹಿತಿ ನೀಡದ ಅಧಿಕಾರಿಗಳಿಗೆ ನೋಟಿಸ್ ನೀಡಲು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಕಿಶೋರ್ ದುಬೆ, ಜಿಲ್ಲಾ ಗ್ಯಾರಂಟಿ ಸಮಿತಿಯ ಉಪಾಧ್ಯಕ್ಷ ಪೂಜಾ ಚಾರ್ಜ, ಲತಾ ಹಾರಕೂಡೆ, ಮಾರುತಿ ಬಂಗಾರೆ, ಮಹೆರೋಜ್ ಖಾನ್, ಬೀದರ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಶೇಖರ್ ಫುಲೆಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶ್ರೀಧರ್ ಹಾಗೂ ತಾಲೂಕು ಮಟ್ಟದ ಗ್ಯಾರಂಟಿ ಸಮಿತಿ ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಎಲ್ಲಾ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿದಂತೆ ಅನೇಕರು ಭಾಗವಹಿಸಿದ್ದರು.