ಮುಡಾ ಅಕ್ರಮ | ಪ್ರಕರಣ ಸಿಬಿಐಗೆ ವಹಿಸುವಂತೆ ಒತ್ತಾಯಿಸಿ ಪ್ರತಿಭಟನೆ : ಬಿಜೆಪಿ ನಾಯಕರ ಬಂಧನ

Update: 2024-07-12 09:38 GMT

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ದಲ್ಲಿ ನಡೆದಿದೆ ಎನ್ನಲಾದ ಹಗರಣವನ್ನು ಖಂಡಿಸಿ ಮತ್ತು ಪ್ರಕರಣದ ತನಿಖೆಯನ್ನು ಸಿಬಿಐ ಗೆ ವಹಿಸುವಂತೆ ಒತ್ತಾಯಿಸಿ ಮುಡಾ ಕಚೇರಿ ಮುತ್ತಿಗೆ ಹಾಕಲು ಯತ್ನಿಸಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಶುಕ್ರವಾರ ಮುಡಾ ಕಚೇರಿ ಮುತ್ತಿಗೆ ಹಾಕಲು ಬಿಜೆಪಿ ವತಿಯಿಂದ ಕರೆ ನೀಡಲಾಗಿತ್ತು. ಜಿಲ್ಲೆಯ ವಿವಿಧ ಭಾಗಗಳಿಂದ ಬಿಜೆಪಿ ಕಾರ್ಯಕರ್ತರು ನಗರದ ಮಹರಾಜ ಕಾಲೇಜು ಮೈದಾನದ ಮುಂಭಾಗ ಜಮಾಯಿಸಿದ್ದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗಮನಕ್ಕೆ ಮುಖಂಡರುಗಳು ಮತ್ತು ಕಾರ್ಯಕರ್ತರು ಕಾಯುತ್ತಿದ್ದರು. ಈ ಮಧ್ಯೆ ವಿಜಯೇಂದ್ರ ಅವರನ್ನು ಬೆಂಗಳೂರಿನ ಕುಂಬಳಗೋಡು ಬಳಿಯೇ ಪೊಲೀಸರು ಬಂಧಿಸಿರುವ ಸುದ್ದಿ ತಿಳಿಯುತ್ತಲೇ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಟಿ.ಎಸ್.ಶ್ರೀವತ್ಸ ನೇತೃತ್ವದಲ್ಲಿ ಮುಡಾ ಕಚೇರಿಯತ್ತ ತೆರಳಲು ಬಿಜೆಪಿ ಕಾರ್ಯಕರ್ತರು ಮುಂದಾದರು. ಈ ವೇಳೆ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಎಲ್ಲರನ್ನು ಬಂಧಿಸಿದರು.

ಈ ವೇಳೆ ಬಿಜೆಪಿ ಮುಖಂಡರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಮಾಜಿ ಶಾಸಕ ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ ಪೊಲೀಸ್ ಬ್ಯಾರಿಕೇಡ್ ಬೇದಿಸಿ ನುಗ್ಗಲು ಯತ್ನಿಸಿದರು. ಆಗ ಪೊಲೀಸರು ಸುತ್ತುವರಿದು ಬ್ಯಾರಿಕೇಡ್ ಜೊತೆಗೆ ಅವರನ್ನು ತಳ್ಳಿಕೊಂಡು ಹೋಗಿ ಪೊಲೀಸ್ ಬಸ್ ಹತ್ತಿಸಿದರು.

ಇದಕ್ಕೂ ಮೊದಲು ಸಂಸದ ಯದುವೀರ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುವಲ್ಲಿ ಸಂಪೂರ್ಣ ವಿಫಲಗೊಂಡಿದ್ದು, ಭ್ರಷ್ಟಾಚಾರದಲ್ಲಿ ತುಂಬಿ ತುಳುಕುತ್ತಿದೆ. ರಾಜ್ಯದಲ್ಲಿ ಗ್ಯಾರಂಟಿ ಹೆಸರೇಳಿಕೊಂಡು ಯಾವುದೇ ಅಭಿವೃದ್ಧಿಯಾಗುತ್ತಿಲ್ಲ. ಮುಡಾದಲ್ಲಿ ಬಹುಕೋಟಿ ಹಗರಣ ನಡೆಸುವ ಮೂಲಕ ಮೈಸೂರಿನ ಜನ ತಲೆ ತಗ್ಗಿಸುವಂತೆ ಮಾಡಿದ್ದಾರೆ.‌ ಇದರಿಂದ ಮೈಸೂರು ಆರೋಪ ಮುಕ್ತವಾಗಬೇಕಾದರೆ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ವಾಲ್ಮೀಕಿ ನಿಗಮದ ಹಗರಣ, ಮುಡಾ ಹಗರಣ ದೊಡ್ಡ ಮಟ್ಟದಲ್ಲಿ ನಡೆದಿದ್ದು, ಇದರ ನೈತಿಕ ಹೊಣೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ವಹಿಸಿಕೊಳ್ಳಬೇಕು ಎಂದು ಹೇಳಿದರು.

ವಿರೋಧ ಪಕ್ಷದ ನಾಯಕ ಆರ್.ಆಶೋಕ್, ಮಾಜಿ ಉಪಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ್, ಸಂಸದ ಯದುವೀರ್, ಶಾಸಕ ಟಿ.ಎಸ್.ಶ್ರೀವತ್ಸ, ಮಾಜಿ ಶಾಸಕರುಗಳಾದ ಎಲ್. ನಾಗೇಂದ್ರ, ಎನ್.ಮಹೇಶ್, ಎಸ್.ಬಾಲರಾಜ್, ಹರ್ಷವರ್ಧನ್, ಬಿಜೆಪಿ ಜಿಲ್ಲಾಧ್ಯಕ್ಷ ಎಲ್.ಆರ್ ಮಹದೇವಸ್ವಾಮಿ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಕರೆದೊಯ್ದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News