ಔರಂಗಜೇಬ್ ಸಮಾಧಿ ವಿವಾದ : ನಾಗ್ಪುರದಲ್ಲಿ ಘರ್ಷಣೆ, ವಾಹನಗಳಿಗೆ ಬೆಂಕಿ

ನಾಗಪುರ : ವಿಶ್ವ ಹಿಂದೂ ಪರಿಷತ್ ಔರಂಗಜೇಬ್ ಸಮಾಧಿಯನ್ನು ತೆಗೆದುಹಾಕುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ ಕೆಲವೇ ಗಂಟೆಗಳ ನಂತರ, ನಾಗ್ಪುರದ ಮಹಲ್ ಪ್ರದೇಶದಲ್ಲಿ ಎರಡು ಗುಂಪುಗಳ ನಡುವೆ ಸೋಮವಾರ ರಾತ್ರಿ ಘರ್ಷಣೆ ಸಂಭವಿಸಿದೆ. ಘರ್ಷಣೆಯು ವಿಕೋಪಕ್ಕೆ ತಿರುಗುತ್ತಿದ್ದಂತೆ ಕಲ್ಲು ತೂರಾಟ ನಡೆದಿದೆ ಎನ್ನಲಾಗಿದೆ.
ಔರಂಗಜೇಬ್ ಸಮಾಧಿ ತೆರವುಗೊಳಿಸುವಂತೆ ಆಗ್ರಹಿಸಿ ಸಂಘ ಪರಿವಾರ ನಡೆಸಿದ ಪ್ರತಿಭಟನೆಯ ಸಂದರ್ಭ ಧರ್ಮ ಗ್ರಂಥವನ್ನು ದಹಿಸಲಾಗಿದೆ ಎಂಬ ವದಂತಿಯ ಹಿನ್ನೆಲೆಯಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಘರ್ಷಣೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಜರಂಗದಳದ ಪ್ರತಿಭಟನೆಯ ವೀಡಿಯೊ ಮುಸ್ಲಿಂ ಸಮುದಾಯದ ಆಕ್ರೋಶಕ್ಕೆ ಕಾರಣವಾಯಿತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಅಗ್ನಿಶಾಮಕ ದಳಕ್ಕೆ ಸೇರಿದ ಕೆಲವು ವಾಹನಗಳು ಸೇರಿದಂತೆ ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಘಟನೆಯಲ್ಲಿ ಹಲವಾರು ಅಗ್ನಿಶಾಮಕ ಸಿಬ್ಬಂದಿಯೂ ಗಾಯಗೊಂಡಿದ್ದಾರೆ ಎಂದು ಅಗ್ನಿಶಾಮಕ ಇಲಾಖೆ ಹೇಳಿಕೊಂಡಿದೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಲಾಠಿ ಪ್ರಹಾರ ಮತ್ತು ಅಶ್ರುವಾಯು ಬಳಸಿದರು ಎಂದು ವರದಿಯಾಗಿದೆ.
ದುಷ್ಕರ್ಮಿಗಳು ಆಸ್ತಿಪಾಸ್ತಿಗೆ ಹಾನಿ ಮಾಡಿ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘಟನಾ ಸ್ಥಳದಿಂದ ವೈರಲ್ ಆಗಿರುವ ವೀಡಿಯೊಗಳು ವಾಹನಗಳಿಗೆ ಬೆಂಕಿ ಹಚ್ಚಿರುವ ದೃಶ್ಯಾವಳಿಗಳನ್ನು ತೋರಿಸಿವೆ.
ಸುಳ್ಳು ಮಾಹಿತಿ ಹರಡುತ್ತಿದ್ದಂತೆ ಹಿಂಸಾಚಾರವು ಸಂಭವಿಸಿದೆ ಎಂದು ಉಪ ಪೊಲೀಸ್ ಆಯುಕ್ತ (ಡಿಸಿಪಿ) ಅರ್ಚಿತ್ ಚಂದಕ್ ದೃಢಪಡಿಸಿದ್ದಾರೆ. "ಪರಿಸ್ಥಿತಿ ಇದೀಗ ನಿಯಂತ್ರಣದಲ್ಲಿದೆ. ಸಾರ್ವಜನಿಕರು ಹೊರಗೆ ಹೋಗಬಾರದು. ಕಲ್ಲು ತೂರಾಟದಲ್ಲಿ ತೊಡಗಬಾರದು ಎಂದು ನಾನು ಮನವಿ ಮಾಡುತ್ತೇನೆ" ಎಂದು ಅವರು ಮನವಿ ಮಾಡಿದ್ದಾರೆ.