ಚಾಮರಾಜನಗರ | ಬೈಲೂರು ಅರಣ್ಯ ವಲಯದಲ್ಲಿ ಬೆಂಕಿ : ಅಪಾರ ಪ್ರಮಾಣದ ವನ್ಯ ಸಂಪತ್ತು ಅಗ್ನಿಗಾಹುತಿ

Update: 2024-03-30 12:16 GMT

ಹನೂರು : ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ಅರಣ್ಯ ವಲಯ ವ್ಯಾಪ್ತಿಯ ಕೆ.ಕೆ.ಡ್ಯಾಂ ಬಳಿ ಅರಣ್ಯಕ್ಕೆ ಬೆಂಕಿ ಬಿದ್ದು ಅಪಾರ ಪ್ರಮಾಣದ ಅರಣ್ಯ ನಾಶವಾಗಿದೆ.

ಶನಿವಾರ ಬೆಳಗ್ಗೆ ಗಸ್ತಿನಲ್ಲಿದ್ದ ಅರಣ್ಯ ಇಲಾಖೆ ಸಿಬ್ಬಂದಿಗೆ ಬೈಲೂರು ವಲಯದ ಕೆ.ಕೆ.ಡ್ಯಾಂ ಬಳಿ ಹೊಗೆ ಕಾಣಿಸಿಕೊಂಡಿದೆ. ಕೂಡಲೇ ಸಿಬ್ಬಂದಿ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಈ ವೇಳೆ ಮತ್ತೊಂದು ಕಡೆ ಬೆಂಕಿ ಕಾಣಿಸಿಕೊಂಡಿದ್ದು, 60ಕ್ಕೂ ಹೆಚ್ಚು ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಕಾರ್ಯಪ್ರವೃತ್ತರಾಗಿದ್ದರು.

ಆದರೆ, ಈ ವೇಳೆ ಗಾಳಿ ಇರುವುದರಿಂದ ಬೆಂಕಿಯ ಕೆನ್ನಾಲಿಗೆ ತನ್ನ ವ್ಯಾಪ್ತಿಯನ್ನು ವಿಸ್ತರಿಸುತ್ತಿದ್ದು, ಅರಣ್ಯ ಇಲಾಖೆಯ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಕುರುಚಲು ಗಿಡ, ಹುಲ್ಲು ಜಾತಿಯ ಗಿಡಗಳು ಸಂಪೂರ್ಣ ನಾಶವಾಗಿದೆ ಎಂದು ತಿಳಿದು ಬಂದಿದೆ.

ಕಿಡಿಗೇಡಿಗಳಿಂದ ಕೃತ್ಯ ಶಂಕೆ : ಬೈಲೂರು ವಲಯ ವ್ಯಾಪ್ತಿಯ ಕೆ.ಕೆ.ಡ್ಯಾಂ ಬಳಿ ಅರಣ್ಯ ಪ್ರದೇಶಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಹಿಂದೆಯೂ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ವಿವಿಧ ವಲಯಗಳಲ್ಲೂ ಅರಣ್ಯಕ್ಕೆ ಬೆಂಕಿ ಬಿದ್ದು ಅಪಾರ ಪ್ರಮಾಣದ ಅರಣ್ಯ ನಾಶವಾಗಿತ್ತು. ಈಗಲೂ ಇದು ಮುಂದುವರಿದಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ಈಗಾಗಲೇ ಬೆಂಕಿ ನಂದಿಸಲು ಮುಂದಾಗಿ ಬೆಂಕಿ ಹಚ್ಚಿರುವವರನ್ನು ಪತ್ತೆ ಹಚ್ಚುವ ಕಾರ್ಯದಲ್ಲಿಯೂ ತೊಡಗಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News