ಚಿಕ್ಕಮಗಳೂರು| ಡಿಸಿ ಕಚೇರಿಗೆ ನುಗ್ಗಲು ಯತ್ನ, ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣ; ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಸೇರಿ ಐವರ ಬಂಧನ

Update: 2024-01-24 18:20 GMT

ಸಂತೋಷ್ ಕೋಟ್ಯಾನ್

ಚಿಕ್ಕಮಗಳೂರು: ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಇತ್ತೀಚೆಗೆ ಸಂಘಪರಿವಾರದ ಮುಖಂಡರು, ಕಾರ್ಯಕರ್ತರು ಧರಣಿ ನಡೆಸಿ, ಕಚೇರಿಗೆ ನುಗ್ಗಲು ಯತ್ನಿಸಿದ ಹಾಗೂ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ ಸಂಬಂಧ ನಗರ ಠಾಣೆ ಪೊಲೀಸರು ಯುವಮೋರ್ಚಾ ಜಿಲ್ಲಾಧ್ಯಕ್ಷ ಸೇರಿದಂತೆ ಐವರು ಕಾರ್ಯಕರ್ತರನ್ನು ಬುಧವಾರ ಬಂಧಿಸಿದ್ದಾರೆ.

ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್ ಹಾಗೂ ಸಂಘಪರಿವಾರದ ಕಾರ್ಯಕರ್ತರಾದ ಕಿಶೋರ್, ರವಿಕಿರಣ್, ಅಮಿತ್, ದೀಕ್ಷಿತ್ ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಜ.22ರಂದು ಅಯೋಧ್ಯೆ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ದತ್ತಪೀಠದಲ್ಲಿ ತಾರಕ ಹೋಮ ನಡೆಸಲು ಅವಕಾಶ ನೀಡಿಲ್ಲ ಎಂದು ಆರೋಪಿಸಿ ಬಿಜೆಪಿ, ಬಜರಂಗದಳ, ವಿಎಚ್‍ಪಿ ಸೇರಿದಂತೆ ಸಂಘಪರಿವಾರದ ಮುಖಂಡರು, ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಕಳೆದ ಸೋಮವಾರ ಧರಣಿ ನಡೆಸಿದ್ದರು. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಧರಣಿಗೆ ಅವಕಾಶವಿಲ್ಲ ಎಂದು ಖುದ್ದು ಎಸ್ಪಿ ಧರಣಿನಿರತರಿಗೆ ಮನವರಿಕೆ ಮಾಡಿದರೂ ಕಾರ್ಯಕರ್ತರು ಪೊಲೀಸರ ಸೂಚನೆ ಮೀರಿ ಧರಣಿ ನಡೆಸಿದ್ದರು. ಈ ವೇಳೆ ಕೆಲ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಲು ಯತ್ನಿಸಿದ್ದರು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಎಲ್ಲ ಮುಖಂಡರು, ಕಾರ್ಯಕರ್ತರನ್ನು ಬಂಧಿಸಿ ನಂತರ ಬಿಡುಗಡೆ ಮಾಡಿದ್ದರು.

ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಲು ಯತ್ನಿಸಿ ಆತಂಕ ಸೃಷ್ಟಿಸಿದ ಆರೋಪದ ಮೇರೆಗೆ ಚಿಕ್ಕಮಗಳೂರು ಉಪವಿಭಾಗಾಧಿಕಾರಿ ದಲ್ಜಿತ್‍ಕುಮಾರ್ ಅವರು ನಗರ ಠಾಣೆಗೆ ದೂರು ನೀಡಿದ್ದರಿಂದ ಸಂಘಪರಿವಾರದ ಐವರು ಕಾರ್ಯಕರ್ತರ ವಿರುದ್ಧ ಪೊಲೀಸರು ಎಫ್‍ಐಆರ್ ದಾಖಲಿಸಿದ್ದರು. ಅಲ್ಲದೇ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಿಸಿದ ಪ್ರಕರಣವೂ ಕಾರ್ಯಕರ್ತರ ಮೇಲೆ ದಾಖಲಾಗಿತ್ತು. ಈ ಘಟನೆ ಸಂಬಂಧ ನಗರ ಠಾಣೆ ಪೊಲೀಸರು ಬುಧವಾರ ಯುವಮೋರ್ಚಾದ ಜಿಲ್ಲಾಧ್ಯಕ್ಷ ಸೇರಿದಂತೆ ಸಂಘಪರಿವಾರದ ಐವರು ಕಾರ್ಯಕರ್ತರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News