ಚಿಕ್ಕಮಗಳೂರು | ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ

ಚಿಕ್ಕಮಗಳೂರು : ಕೇಂದ್ರ ಸರಕಾರದ ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ನಗರದಲ್ಲಿ ಮುಸ್ಲಿಮರು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ತಮ್ಮ ಕೈಗಳಿಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ ನಡೆಸಿದರು.
ಮುಸ್ಲಿಮ್ ಸಂಘಟನೆಗಳು ಹಾಗೂ ರಾಜ್ಯದ ಮುಸ್ಲಿಮ್ ಪರ್ಸನಲ್ ಬೋರ್ಡ್‌ನಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಲು ಕರೆ ನೀಡಿದ್ದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಎಲ್ಲ ಮಸೀದಿಗಳಲ್ಲೂ ಶುಕ್ರವಾರ ವಿಶೇಷ ನಮಾಝ್ ಸಂದರ್ಭದಲ್ಲಿ ಸಣ್ಣ ಮಕ್ಕಳಿಂದ ವೃದ್ಧರವರೆಗೂ ಕಪ್ಪು ಪಟ್ಟಿ ಧರಿಸಿ ಪ್ರಾರ್ಥನೆ ಸಲ್ಲಿಸಿದರು.
ನಗರದ ದುಬೈ ನಗರದ ಫಿರ್ ದೋಸ್ ಮಸೀದಿಯಲ್ಲಿ ಕಪ್ಪು ಪಟ್ಟಿ ಧರಿಸಿ, ವಕ್ಫ್ ತಿದ್ದುಪಡಿ ಮಸೂದೆ ಜಾರಿಯಾಗದಂತೆ ಆಗ್ರಹಿಸಿದ ಮುಖಂಡರು, ನಾಗರಿಕರು, ಯಾವುದೇ ಕಾರಣಕ್ಕೂ ವಕ್ಫ್ ತಿದ್ದುಪಡಿ ಮಸೂದೆಯನ್ನು ಒಪ್ಪಲು ಸಾಧ್ಯವಿಲ್ಲ. ಕೇಂದ್ರ ಸರಕಾರ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ, ದಬ್ಬಾಳಿಕೆ ನಿಲ್ಲಿಸಬೇಕು, ತಪ್ಪಿದಲ್ಲಿ ರಮಝಾನ್ ಹಬ್ಬದ ನಂತರ ನಿರಂತರ ಪ್ರತಿಭಟನೆಯ ಮೂಲಕ ಹೋರಾಟ ಮುಂದುವರಿಸಲಾಗುವುದು ಎಂದು ಎಚ್ಚರಿಸಿದರು.
ನಗರದ ಮಕ್ಕ ಮಸೀದಿಯ ಗುರುಗಳಾದ ಆಶ್ರಫ್ ಹಜರತ್, ನಗರಸಭೆ ಸದಸ್ಯ ಶಾದಾಬ್ ಪ್ರತಿಭಟನೆಯ ನೇತೃತ್ವವಹಿಸಿದ್ದರು