ಚಿಕ್ಕಮಗಳೂರು | ಮಲೆನಾಡಿನಲ್ಲಿ ಮುಂದುವರಿದ ಮಳೆ : ನದಿಗಳಲ್ಲಿ ಹೆಚ್ಚಿದ ನೀರಿನ ಹರಿವು, ಮನೆಗಳಿಗೆ ಹಾನಿ
ಚಿಕ್ಕಮಗಳೂರು : ಕಾಫಿನಾಡಿನ ಮಲೆನಾಡು ಭಾಗದಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಕಳೆದ ಮೂರು ದಿನಗಳಿಂದ ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಅಲ್ಲಲ್ಲಿ ಮನೆಗಳಿಗೆ ಹಾನಿಯಾಗಿದೆ. ಇನ್ನು ಬಯಲು ಭಾಗದಲ್ಲಿ ಸಾಧಾರಣ ಮಳೆಯಾಗುತ್ತಿದೆ.
ಜಿಲ್ಲೆಯ ಮಲೆನಾಡು ಭಾಗದಲ್ಲಿ ರವಿವಾರ ಇಡೀ ದಿನ ಮಳೆಯಾಗಿದ್ದು, ಅಲ್ಲಲ್ಲಿ ಧಾರಾಕಾರ ಮಳೆಯಾಗಿದೆ. ಮಲೆನಾಡು ಭಾಗದ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್, ಕೊಟ್ಟಿಗೆಹಾರ, ಬಣಕಲ್, ಬಾಳೂರು ಭಾಗದಲ್ಲಿ ಭಾರೀ ಮಳೆಯಾಗಿದ್ದರೆ, ಕಳಸ ತಾಲೂಕಿನಲ್ಲಿ ಸಂಸೆ, ಕುದುರೆಮುಖ, ಹೊರನಾಡು, ಬಲಿಗೆ ಭಾಗದಲ್ಲಿ ಧಾರಾಕಾರ ಮಳೆಯಾಗಿದೆ. ಕೊಪ್ಪ ತಾಲೂಕಿನ ಜಯಪುರ, ಹೇರೂರು, ಬಸರೀಕಟ್ಟೆ, ಕೊಪ್ಪ ಭಾಗದಲ್ಲಿ ಹೆಚ್ಚು ಮಳೆಯಾಗಿದ್ದು, ಶೃಂಗೇರಿ ತಾಲೂಕಿನ ಕೆರೆಕಟ್ಟೆ, ಕಿಗ್ಗಾ, ನೆಮ್ಮಾರು, ಶೃಂಗೇರಿ ಪಟ್ಟಣ ವ್ಯಾಪ್ತಿಯಲ್ಲಿ ಅತೀ ಹೆಚ್ಚು ಮಳೆಯಾಗಿದೆ. ಎನ್.ಆರ್.ಪುರ ತಾಲೂಕಿನ ಮಾಗುಂಡಿ, ಬಾಳೆಹೊನ್ನೂರು ಹಾಗೂ ಎನ್.ಆರ್.ಪುರ ಪಟ್ಟಣ ವ್ಯಾಪ್ತಿಯಲ್ಲಿ ರವಿವಾರ ಭಾರೀ ಮಳೆಯಾಗಿದೆ.
ಧಾರಾಕಾರ ಮಳೆಯಿಂದಾಗಿ ಕಳಸ ತಾಲೂಕಿನ ಮರಸಣಿಗೆ ಗ್ರಾಪಂ ವ್ಯಾಪ್ತಿಯ ಇಂದಿರಾನಗರದಲ್ಲಿ ಕರಿಯ ಎಂಬವರ ಮನೆ ಮೇಲೆ ಮರಬಿದ್ದು ಮನೆಗೆ ಹಾನಿಯಾಗಿದ್ದು, ಮನೆ ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭಾರೀ ಮಳೆಯಿಂದಾಗಿ ಚಾರ್ಮಾಡಿ ಘಾಟ್ ವ್ಯಾಪ್ತಿಯಲ್ಲಿ ಮಂಜು ಮುಸುಕಿನ ವಾತಾವರಣ ನಿರ್ಮಾಣವಾಗಿದ್ದು, ವಾಹನಗಳ ಸಂಚಾರಕ್ಕೆ ತೀವ್ರ ಸಮಸ್ಯೆಯಾಗಿದೆ. ಮಳೆಯಿಂದಾಗಿ ಮಲೆನಾಡು ಭಾಗದ ಗಿರಿಶ್ರೇಣಿಗಳು, ಝರಿ ಜಲಪಾತ, ನದಿಗಳಿಗೆ ಜೀವಕಳೆ ಬಂದಿದ್ದು, ವಾರಾಂತ್ಯದ ಹಿನ್ನೆಲೆಯಲ್ಲಿ ಮಲೆನಾಡು ಭಾಗಕ್ಕೆ ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದಾರೆ. ಆದರೆ ಮಳೆ ಪ್ರವಾಸಿಗರಿಗೆ ನಿರಾಶೆಯನ್ನುಂಟು ಮಾಡುತ್ತಿದ್ದು, ವಾಹನಗಳ ಸಂಚಾರಕ್ಕೂ ತೊಂದರೆಯಾಗಿದೆ. ಮಳೆ, ಗಾಳಿಗೆ ಅಲ್ಲಲ್ಲಿ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿ ಗ್ರಾಮೀಣ ಭಾಗದಲ್ಲಿ ವಿದ್ಯುತ್ ಕಡಿತವಾಗಿದೆ.
ಭಾರೀ ಮಳೆಯಿಂದಾಗಿ ಮಲೆನಾಡು ಭಾಗದ ಹೇಮಾವತಿ, ಭದ್ರಾ, ತುಂಗಾ ನದಿಗಳೂ ಸೇರಿದಂತೆ ಹಳ್ಳಕೊಳ್ಳಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ. ನಿರಂತರ ಮಳೆಯಿಂದಾಗಿ ಮಲೆನಾಡು ಭಾಗದ ಕಾಫಿ, ಅಡಿಕೆ ತೋಟಗಳಲ್ಲಿ ಕೃಷಿ ಚಟುವಟಿಕೆಗಳಿಗೆ ಹಿನ್ನಡೆಯಾಗಿದ್ದು, ಕಾರ್ಮಿಕರಿಗೂ ಕೆಲಸಕ್ಕೆ ಹೋಗಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ.
ಇನ್ನು ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದರೆ, ಬಯಲು ಭಾಗದಲ್ಲಿ ಕೆಲ ದಿನಗಳಿಂದ ಧಟ್ಟ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುತ್ತಿದೆ. ಚಿಕ್ಕಮಗಳೂರು ನಗರದಲ್ಲಿ ರವಿವಾರ ಇಡೀ ದಿನ ಸಾಧಾರಣ ಮಳೆಯಾಗಿದ್ದು, ನಗರ ಸುತ್ತಮುತ್ತಲ ಗ್ರಾಮಗಳಲ್ಲಿ ಉತ್ತಮ ಮಳೆಯಾಗಿದೆ. ಜಿಲ್ಲೆಯ ಕಡೂರು, ತರೀಕೆರೆ, ಅಜ್ಜಂಪುರ ತಾಲೂಕುಗಳ ವ್ಯಾಪ್ತಿಯಲ್ಲಿ ರವಿವಾರ ಆಗಾಗ್ಗೆ ಸಾಧಾರಣ ಮಳೆಯಾಗಿದ್ದು, ಉಳಿದಂತೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಬಯಲು ಭಾಗದಲ್ಲಿ ಸಾಧಾರಣ ಮಳೆ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆ ಬಿರುಸುಗೊಂಡಿದೆ.